BJP
BJP Image for representative purposes

ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ಪ್ರತಿಭಟನೆ: ಛಲವಾದಿ ನಾರಾಯಣ ಸ್ವಾಮಿ, ಸಿ ಟಿ ರವಿ ವಿರುದ್ಧದ ತನಿಖೆಗೆ ತಡೆ

ಪ್ರಕರಣದ ತನಿಖೆಗೆ ತಡೆ ನೀಡಿದ ನ್ಯಾಯಾಲಯವು ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ಹೈಗ್ರೌಂಡ್ಸ್‌ ಠಾಣಾ ಪೊಲೀಸರಿಗೆ ನೋಟಿಸ್‌ ನೀಡಿ ವಿಚಾರಣೆ ಮುಂದೂಡಿತು.
Published on

ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸಿದ ಮತ್ತು ʼಆತ್ಮಹತ್ಯೆ ಮತ್ತು ಸುಪಾರಿ ಭಾಗ್ಯ ನೀಡಿದ ಕಾಂಗ್ರೆಸ್‌ ಸರ್ಕಾರಕ್ಕೆ ಧಿಕ್ಕಾರʼ ಎಂದು ಬರೆದಿರುವ ಪೋಸ್ಟರ್‌ಗಳನ್ನು ಸಾರ್ವಜನಿಕ ಶೌಚಾಲಯದ ಗೋಡೆಗೆ ಅಂಟಿಸಿ ಬೆಂಗಳೂರಿನ ಸೌಂದರ್ಯಕ್ಕೆ ಧಕ್ಕೆ ತಂದ ಆರೋಪದಡಿ ವಿಧಾನ ಪರಿಷತ್‌ನ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನ ಪರಿಷತ್‌ ಸದಸ್ಯ ಸಿ ಟಿ ರವಿ ಮತ್ತಿತರ ಬಿಜೆಪಿ ನಾಯಕರ ವಿರುದ್ಧದ ತನಿಖೆಗೆ ಕರ್ನಾಟಕ ಹೈಕೋರ್ಟ್‌ ತಡೆ ನೀಡಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧ ಹೈಗ್ರೌಂಡ್ಸ್‌ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ಮತ್ತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ರದ್ದುಪಡಿಸುವಂತೆ ಕೋರಿ ಬಿಜೆಪಿ ಮುಖಂಡರಾದ ಛಲವಾದಿ ನಾರಾಯಣ ಸ್ವಾಮಿ, ಸಿ ಟಿ ರವಿ, ರವಿಕುಮಾರ್‌ ಮತ್ತು ಉಮೇಶ್‌ ಶೆಟ್ಟಿ ಸೇರಿದಂತೆ 12 ಮಂದಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್‌ ಆರ್‌ ಕೃಷ್ಣ ಕುಮಾರ್‌ ಅವರ ಏಕಸದಸ್ಯ ಪೀಠ ನಡೆಸಿತು.

ಪ್ರಕರಣದ ತನಿಖೆಗೆ ತಡೆ ನೀಡಿದ ನ್ಯಾಯಾಲಯವು ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ಹೈಗ್ರೌಂಡ್ಸ್‌ ಠಾಣಾ ಪೊಲೀಸರಿಗೆ ನೋಟಿಸ್‌ ನೀಡಿ ವಿಚಾರಣೆ ಮುಂದೂಡಿತು.

“ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡಬೇಕು” ಎಂದು ಘೋಷಣೆ ಕೂಗುತ್ತಾ 2024ರ ಡಿಸೆಂಬರ್‌ 31ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಮಾಧವನಗರ ಜಂಕ್ಷನ್‌ ಬಳಿಕೆ ಛಲವಾದಿ ನಾರಾಯಣ ಸ್ವಾಮಿ ನೇತೃತ್ವದಲ್ಲಿ ಬಿಜೆಪಿಯ ನಾಯಕರು ಮತ್ತು ಕಾಯರ್ತಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ರಸ್ತೆಯಲ್ಲಿ ಗುಂಪುಗೂಡಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ. ಮಾಧವ ನಗರ ಜಂಕ್ಷನ್‌ನಲ್ಲಿ ಸಾರ್ವಜನಿಕ ಶೌಚಾಲಯದ ಗೋಡೆಗೆ “ಸೂಸೈಡ್‌ ಮತ್ತು ಸುಪಾರಿ ಭಾಗ್ಯ ನೀಡಿದ ಕಾಂಗ್ರೆಸ್‌ ಸರ್ಕಾರಕ್ಕೆ ಧಿಕ್ಕಾರ” ಎಂದು ಬರೆದಿರುವ ಪೋಸ್ಟರ್‌ಗಳನ್ನು ಅನಧಿಕೃತವಾಗಿ ಅಂಟಿಸಿ ಬೆಂಗಳೂರಿನ ಸೌಂದರ್ಯಕ್ಕೆ ಧಕ್ಕೆ ತಂದ ಆರೋಪದ ಮೇಲೆ ಹೈಗ್ರೌಂಡ್ಸ್‌ ಠಾಣಾ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು.

Kannada Bar & Bench
kannada.barandbench.com