ಪ್ರವೀಣ್‌ ನೆಟ್ಟಾರು ಹತ್ಯೆ ಖಂಡಿಸಿ ಟೌನ್‌ಹಾಲ್‌ ಬಳಿ ಪ್ರತಿಭಟನೆ: ಸೂಲಿಬೆಲೆ ವಿರುದ್ಧದ ಸಮನ್ಸ್‌ಗೆ ಹೈಕೋರ್ಟ್‌ ತಡೆ

ಕಾನೂನು ಪ್ರಕಾರ ಆದೇಶ ಹೊರಡಿಸಿದ ಅಧಿಕಾರಿ ಅಥವಾ ಅವರಿಗಿಂತ ಮೇಲಿನ ಶ್ರೇಣಿಯ ಅಧಿಕಾರಿ ದೂರು ದಾಖಲಿಸಬೇಕು ಎಂದು ವಾದಿಸಿದ ಹಿರಿಯ ವಕೀಲ ಅರುಣ್‌ ಶ್ಯಾಮ್‌.
Chakravarti Sulibele and Karnataka HC
Chakravarti Sulibele and Karnataka HC
Published on

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧ ಮಾಡುವಂತೆ ಆಗ್ರಹಿಸಿ ಬೆಂಗಳೂರಿನ ಟೌನ್ ಹಾಲ್ ಮುಂದೆ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಯುವ ಬ್ರಿಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಜಾರಿ ಮಾಡಿದ್ದ ಸಮನ್ಸ್‌ಗೆ ಕರ್ನಾಟಕ ಹೈಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.

ತಮ್ಮ ವಿರುದ್ಧ ಎಸ್ ಜೆ ಪಾರ್ಕ್ ಠಾಣಾ ಇನ್ಸ್‌ಪೆಕ್ಟರ್ ನಗರದ 6ನೇ ಎಸಿಎಂಎಂ ನ್ಯಾಯಾಲಯದಲ್ಲಿ ದಾಖಲಿಸಿರುವ ಖಾಸಗಿ ದೂರು ಮತ್ತು ನ್ಯಾಯಾಲಯ ಹೊರಡಿಸಿರುವ ಸಮನ್ಸ್ ರದ್ದುಪಡಿಸುವಂತೆ ಕೋರಿ ಚಕ್ರವರ್ತಿ ಸೂಲಿಬೆಲೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ಮಧ್ಯಂತರ ಆದೇಶ ಮಾಡಿದೆ.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅರುಣ್ ಶ್ಯಾಮ್ ಅವರು, ಫ್ರೀಡಂ ಪಾರ್ಕ್ ಹೊರತುಪಡಿಸಿ ಬೆಂಗಳೂರಿನ ಇತರೆ ಭಾಗದಲ್ಲಿ ಪ್ರತಿಭಟನೆ ನಡೆಸಬಾರದು ಎಂಬುದಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ಉಲ್ಲಂಘಿಸಿ ಮತ್ತು ಪೂರ್ವಾನುಮತಿ ಪಡೆಯದೇ ಬೆಂಗಳೂರಿನ ಟೌನ್‌ಹಾಲ್ ಮುಂದೆ ಪ್ರತಿಭಟನೆ ನಡೆಸಿ, ಸಾರ್ವಜನಿಕ ಶಾಂತಿ ಭಂಗ ಉಂಟು ಮಾಡಿದ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಎಸ್ ಜೆ ಪಾರ್ಕ್ ಠಾಣೆಯ ಇನ್ಸ್‌ಪೆಕ್ಟರ್ 6ನೇ ಎಸಿಎಂಎಂ ನ್ಯಾಯಾಲಯದಲ್ಲಿ ಅರ್ಜಿದಾರರ ವಿರುದ್ಧ ಖಾಸಗಿ ದೂರು ದಾಖಲಿಸಿದ್ದಾರೆ.

ಆದರೆ, ಕಾನೂನು ಪ್ರಕಾರ ಆದೇಶ ಹೊರಡಿಸಿದ ಅಧಿಕಾರಿ ಅಥವಾ ಅವರಿಗಿಂತ ಮೇಲಿನ ಶ್ರೇಣಿಯ ಅಧಿಕಾರಿ ದೂರು ದಾಖಲಿಸಬೇಕಿದೆ. ಈ ಪ್ರಕರಣದಲ್ಲಿ ಎಸ್ ಜೆ ಪಾಕ್ ಠಾಣೆ ಇನ್ಸ್‌ಪೆಕ್ಟರ್ ಖಾಸಗಿ ದೂರು ದಾಖಲಿಸಿರುವುದು ಮತ್ತು ಆ ದೂರು ಪರಿಗಣಿಸಿ ಅರ್ಜಿದಾರರಿಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸಮನ್ಸ್ ಜಾರಿ ಮಾಡಿರುವುದು ಕಾನೂನುಬಾಹಿರ. ಆದ್ದರಿಂದ, ಅರ್ಜಿದಾರರ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿದರು.

ಈ ವಾದ ಪ್ರರಿಗಣಿಸಿದ ಪೀಠವು ಸೂಲಿಬೆಲೆ ವಿರುದ್ಧದ ಸಮನ್ಸ್‌ಗೆ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ 2022ರ ಜುಲೈ 28ರಂದು ಜೆ ಸಿ ರಸ್ತೆಯ ಟೌನ್ ಹಾಲ್ ಮುಂಭಾಗ ಮಧ್ಯಾಹ್ನ 3 ಗಂಟೆಯಿಂದ ಸಂಜೆ 6.30ರವರೆಗೆ ಹಿಂದೂ ಹಿತರಕ್ಷಣಾ ಸಮಿತಿ ಮತ್ತು ಇತರೆ ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ‘ಜಿಹಾದಿಗಳಿಗೆ ಧಿಕ್ಕಾರ, ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು. ಪ್ರವೀಣ್ ನೆಟ್ಟಾರ್ ಹಂತಕರನ್ನು ಸಾರ್ವಜನಿಕವಾಗಿ ಎನ್‌ಕೌಂಟರ್ ಮಾಡಬೇಕು’ ಎಂದು ಘೋಷಣೆ ಕೂಗಿದ್ದರು.

ಇದರಿಂದ ಎಸ್ ಜೆ ಪಾರ್ಕ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಎಂ ಆರ್ ಸತೀಶ ಅವರು ಬೆಂಗಳೂರಿನ 6ನೇ ಎಸಿಎಂಎಂ ನ್ಯಾಯಾಲಯದಲ್ಲಿ, ಶಾಸಕ ರವಿಸುಬ್ರಹ್ಮಣ್ಯ, ಮಾಜಿ ಮೇಯರ್‌ಗಳಾದ ಕಟ್ಟೆ ಸತ್ಯನಾರಾಯಣ, ಉಮೇಶ್ ಶೆಟ್ಟಿ ಮತ್ತು ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಒಟ್ಟು 11 ಮಂದಿ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು.

ಬೆಂಗಳೂರು ನಗರದಲ್ಲಿ ಫ್ರೀಡಂ ಪಾರ್ಕ್ ಹೊರತುಪಡಿಸಿ ಬೇರೆ ಯಾವುದೇ ಸ್ಥಳಗಳಲ್ಲಿ ಪ್ರತಿಭಟನೆ ಮಾಡಬಾರದು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. ಈ ನಿಯಮ ಉಲ್ಲಂಘಿಸಿ ಮತ್ತು ಸರ್ಕಾರದಿಂದಾಗಲಿ ಅಥವಾ ಸಂಬಂಧಟ್ಟ ಪ್ರಾಧಿಕಾರದಿಂದ ಯಾವುದೇ ಪೂರ್ವಾನುಮತಿ ಪಡೆಯದೆ ಆರೋಪಿಗಳು ಟೌನ್‌ಹಾಲ್ ಮುಂದೆ ಪ್ರತಿಭಟನೆ ನಡೆಸಿ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟು ಮಾಡಿದ್ದಾರೆ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಖಾಸಗಿ ದೂರು ದಾಖಲಿಸಲಾಗಿತ್ತು.

Kannada Bar & Bench
kannada.barandbench.com