ಪ್ರಚೋದನಕಾರಿ ಭಾಷಣ: ಈಶ್ವರಪ್ಪ ವಿರುದ್ಧದ ಬಲವಂತದ ಕ್ರಮಕೈಗೊಳ್ಳದಂತೆ ಹೈಕೋರ್ಟ್‌ ನಿರ್ದೇಶನ

ವಸತಿ ಯೋಜನೆಗಳಲ್ಲಿ ಮುಸ್ಲಿಮರಿಗೆ ಶೇ.15ರಷ್ಟು ಮೀಸಲಾತಿ ನಿಗದಿಪಡಿಸಿದ ಸರ್ಕಾರದ ಕ್ರಮ ಖಂಡಿಸಿ ರಾಷ್ಟ್ರ ಭಕ್ತರ ಬಳಗದ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಇಲ್ಲಿ ಈಶ್ವರಪ್ಪ ಪ್ರಚೋದನಾಕಾರಿ ಭಾಷಣ ಮಾಡಿದ್ದರು.
K S Eshwarappa and Karnataka HC
K S Eshwarappa and Karnataka HC
Published on

ಸರ್ಕಾರದ ವಿವಿಧ ವಸತಿ ಯೋಜನೆಗಳಲ್ಲಿ ಮುಸ್ಲಿಮರಿಗೆ ಶೇ.15ರಷ್ಟು ಮೀಸಲಾತಿ ನಿಗದಿಪಡಿಸಿದ್ದನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಕರ್ನಾಟಕ ಹೈಕೋರ್ಟ್ ಬುಧವಾರ ನಿರ್ದೇಶನ ನೀಡಿದೆ.

ಶಿವಮೊಗ್ಗ ನಗರದ ಕೋಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಹಾಗೂ ಅದರ ಸಂಬಂಧ ಶಿವಮೊಗ್ಗ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಪಡಿಸುವಂತೆ ಕೋರಿ ಕೆ ಎಸ್ ಈಶ್ವರಪ್ಪ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ ಐ ಅರುಣ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿ ಆಲಿಸಿದ ಪೀಠವು ಪ್ರಕರಣ ಸಂಬಂಧ ಪೊಲೀಸರು ಈಶ್ವರಪ್ಪ ಅವರ ವಿರುದ್ಧ ಬಲವಂತದ ಕ್ರಮ ಜರುಗಿಸಬಾರದು. ಆದರೆ, ತನಿಖೆಗೆ ಈಶ್ವರಪ್ಪನವರು ಸಹಕರಿಸಬೇಕು ಎಂದು ನಿರ್ದೇಶನ ನೀಡಿತು. ಅಲ್ಲದೇ, ಅರ್ಜಿ ಸಂಬಂಧ ಸರ್ಕಾರ ಹಾಗೂ ದೂರುದಾರ ಕೋಟೆ ಪೊಲೀಸ್ ಠಾಣೆಯ ಅಧಿಕಾರಿ ಸಂತೋಷ್ ಎಸ್. ಭಾಗೋಜಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿತು. ಕೆ ಎಸ್ ಈಶ್ವರಪ್ಪ ಪರ ವಕೀಲ ವಿನೋದ್ ಕುಮಾರ್ ವಾದಿಸಿದರು.

ವಸತಿ ಯೋಜನೆಗಳಲ್ಲಿ ಮುಸ್ಲಿಮರಿಗೆ ಶೇ.15ರಷ್ಟು ಮೀಸಲಾತಿ ನಿಗದಿಪಡಿಸಿದ ಸರ್ಕಾರದ ಕ್ರಮ ಖಂಡಿಸಿ ರಾಷ್ಟ್ರ ಭಕ್ತರ ಬಳಗದ ವತಿಯಿಂದ ಶಿವಮೊಗ್ಗ ಶಿವಪ್ಪ ನಾಯಕ್ ಸರ್ಕಲ್ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಅದರಲ್ಲಿ ಭಾಗವಹಿಸಿದ್ದ ಈಶ್ವರಪ್ಪ ಅವರು ಹಿಂದೂಗಳ ಕುರಿತು ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದರು ಎಂದು ಕೋಟೆ ಪೊಲೀಸ್ ಠಾಣೆಯ ಅಧಿಕಾರಿ ಸಂತೋಷ್ ಭಾಗೋಜಿ ದೂರು ಸಲ್ಲಿಸಿದ್ದರು. ಇದನ್ನು ಆಧರಿಸಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿತ್ತು, ಅದನ್ನು ರದ್ದುಪಡಿಸುವಂತೆ ಕೋರಿ ಈಶ್ವರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. 

Kannada Bar & Bench
kannada.barandbench.com