ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ರದ್ದುಪಡಿಸುವಂತೆ ಕೋರಿ ತಾತ್ಕಲಿಕ ಪಟ್ಟಿಯಲ್ಲಿ ಮೊದಲ ಮತ್ತು ನಾಲ್ಕನೇ ರ‍್ಯಾಂಕ್ ಪಡೆದಿರುವ ಇಬ್ಬರು ಅಭ್ಯರ್ಥಿಗಳು ಸಲ್ಲಿಸಿರುವ ರಿಟ್ ಮನವಿಯನ್ನು ಕರ್ನಾಟಕ ಹೈಕೋರ್ಟ್ ಮೇ 19ಕ್ಕೆ ಮುಂದೂಡಿದೆ.
ಪಿಎಸ್‌ಐ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಪ್ರಥಮ ರ‍್ಯಾಂಕ್ ಪಡೆದಿರುವ ಬೆಂಗಳೂರಿನ ರಚನಾ ಹನಮಂತ್ ಹಾಗೂ ನಾಲ್ಕನೇ ರ‍್ಯಾಂಕ್ ಪಡೆದಿರುವ ಜಾಗೃತ್ ಅವರು ಸಲ್ಲಿಸಿರುವ ಪ್ರತ್ಯೇಕ ಮನವಿಗಳು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ನೇತೃತ್ವದ ರಜಾಕಾಲೀನ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಿದ್ದವು.
ಸಮಯದ ಅಭಾವದ ಹಿನ್ನೆಲೆಯಲ್ಲಿ ಪೀಠವು ಪಟ್ಟಿಯಲ್ಲಿ ನಿಗದಿಪಡಿಸಿದ್ದ ಪ್ರಕರಣವನ್ನು ತಲುಪಲಿಲ್ಲ. ಹೀಗಾಗಿ, ಮೇ 19ಕ್ಕೆ ಪೀಠ ವಿಚಾರಣೆ ಮುಂದೂಡಿತು ಎಂದು ಅರ್ಜಿದಾರರ ಪರ ವಕೀಲೆ ವಂದನಾ ಪಿ ಎಲ್ ಅವರು “ಬಾರ್ ಅಂಡ್ ಬೆಂಚ್”ಗೆ ತಿಳಿಸಿದರು.
ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಬೇಕು. ಅರ್ಜಿಯನ್ನು ನ್ಯಾಯಾಲಯ ಇತ್ಯರ್ಥಪಡಿಸುವವರೆಗೆ ಪ್ರಕರಣದ ಮುಂದಿನ ಪ್ರಕ್ರಿಯೆ ಹಾಗೂ ತನಿಖೆಗೆ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿದಾರರು ಮಧ್ಯಂತರ ಮನವಿ ಮಾಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ನಡೆದಿರುವ ಸಿಐಡಿ ತನಿಖೆಯಲ್ಲಿ ಅಕ್ರಮದಲ್ಲಿ ಭಾಗಿಯಾಗಿರುವ ಬಗ್ಗೆ ತಮ್ಮ ವಿರುದ್ಧ ಯಾವುದೇ ಆರೋಪ ಮತ್ತು ಸಾಕ್ಷ್ಯಾಧಾರಗಳು ಸಿಕ್ಕಿಲ್ಲ. ಹೀಗಿದ್ದರೂ ಪ್ರಕರಣದಲ್ಲಿ ಅನಗತ್ಯವಾಗಿ ಸಿಲುಕಿಸುವ ಉದ್ದೇಶದಿಂದ ಎಫ್‌ಐಆರ್ ದಾಖಲಿಸಲಾಗಿದೆ. ಸಿಐಡಿ ಪೊಲೀಸ್ ಅಧಿಕಾರಿ ಪಿ ನರಸಿಂಹ ಮೂರ್ತಿ ಪ್ರಕರಣದ ದೂರುದಾರರಾಗಿದ್ದು, ಅವರೇ ತನಿಖಾ ತಂಡದಲ್ಲಿ ಸಹಾಯಕ ಅಧಿಕಾರಿಯಾಗಿದ್ದಾರೆ. ನಿಯಮಗಳ ಪ್ರಕಾರ ದೂರು ಸಲ್ಲಿಸಿದ ಅಧಿಕಾರಿಯೇ ತನಿಖೆ ನಡೆಸುವಂತಿಲ್ಲ ಎಂದು ಮನವಿಯಲ್ಲಿ ವಿವರಿಸಲಾಗಿದೆ.
ಪರೀಕ್ಷಾ ಕೇಂದ್ರದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿತ್ತು. ಮೇಲ್ವಿಚಾರಕರು ಮತ್ತು ವಿಚಕ್ಷಣಾ ಸ್ಕ್ವಾಡ್ ಪರೀಕ್ಷಾ ಕೇಂದ್ರದ ಮೇಲೆ ನಿಗಾಯಿಟ್ಟಿದ್ದರು. ಹೀಗಿರುವಾಗ ಪರೀಕ್ಷೆಯಲ್ಲಿ ಯಾವುದೇ ರೀತಿ ನಕಲು ಹಾಗೂ ಅಕ್ರಮ ನಡೆಯಲು ಸಾಧ್ಯವಿಲ್ಲ. ಪರೀಕ್ಷೆ ನಡೆದು ಬಹುತೇಕ ಒಂದು ವರ್ಷ ಕಳೆದಿದೆ. ಆದರೆ, ಇದೀಗ ಫಲಿತಾಂಶ ಪ್ರಕಟಗೊಂಡ ನಂತರ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣದ ಇತರೆ ಆರೋಪಿಗಳಿಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಮನವಿಯಲ್ಲಿ ವಿವರಿಸಲಾಗಿದೆ.
ಪಿಐಎಸ್ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರಿನ ಪರೀಕ್ಷಾ ಕೇಂದ್ರಗಳಲ್ಲಿ ನಡೆದಿರುವ ಅಕ್ರಮದ ಕುರಿತು ಹೈಗ್ರೌಂಡ್ಸ್ ಠಾಣೆಯಲ್ಲಿ ಸಿಐಡಿ ಉಪ ಪೊಲೀಸ್ ವರಿಷ್ಠಾಧಿಕಾರಿ ಪಿ ನರಸಿಂಹ ಮೂರ್ತಿ ಅವರ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 120B (ಕ್ರಿಮಿನಲ್ ಪಿತೂರಿ), 420 (ವಂಚನೆ), 465 (ನಕಲು), 468 (ವಂಚನೆಗೆ ವಿದ್ಯುನ್ಮಾನ ಸಾಧನ ಬಳಕೆ), 471 (ನಕಲಿ ದಾಖಲೆಯನ್ನು ನೈಜ ಎಂದು ಬಿಂಬಿಸುವುದು) ಜೊತೆಗೆ 34ರ (ಹಲವು ಕೃತ್ಯಯಲ್ಲಿ ಭಾಗಿ) ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದ್ದು, ಜಾಗೃತ್ ಮೊದಲ ಆರೋಪಿಯಾಗಿದ್ದು, ರಚನಾ ಅವರು 17ನೇ ಆರೋಪಿಯಾಗಿದ್ದಾರೆ. ಒಟ್ಟಾರೆ 22 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, 12 ಮಂದಿಯನ್ನು ಇದುವರೆಗೆ ಬಂಧಿಸಲಾಗಿದೆ. ಉಳಿದ 10 ಮಂದಿಗಾಗಿ ಶೋಧ ನಡೆದಿದೆ.
ಕಲಬುರ್ಗಿಯ ಚೌಕ್ ಮತ್ತು ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರತ್ಯೇಕ ಎಫ್‌ಐಆರ್ ದಾಖಲಾಗಿದ್ದು, ಬಿಜೆಪಿ ನಾಯಕಿ, ಪ್ರಕರಣದ ಪ್ರಮುಖ ಕಿಂಗ್‌ಪಿನ್ ದಿವ್ಯಾ ಹಾಗರಗಿ ಸೇರಿದಂತೆ 28 ಮಂದಿಯನ್ನು ಪೋಲೀಸರು ಬಂಧಿಸಿದ್ದು, ತನಿಖೆ ಮುಂದುವರಿದಿದೆ.
ಪ್ರಕರಣದ ಹಿನ್ನೆಲೆ: 2021ರ ಅಕ್ಟೋಬರ್ 3ರಂದು ರಾಜ್ಯದ 92 ಕೇಂದ್ರಗಳಲ್ಲಿ ಪಿಎಸ್‌ಐ ನೇಮಕಾತಿ ಪರೀಕ್ಷೆ ನಡೆದಿತ್ತು. ಕಲಬುರ್ಗಿ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆದಿದೆ ಎಂಬ ವಿಚಾರ ಬಹಿರಂಗವಾಗುತ್ತಿದ್ದಂತೆ ರಾಜ್ಯ ಸರ್ಕಾರವು ಪ್ರಕರಣವು ಸಿಐಡಿ ತನಿಖೆಗೆ ವಹಿಸಿತ್ತು.
ಪಿಎಸ್‌ಐ ನೇಮಕಾತಿಯಲ್ಲಿನ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಐಡಿ ಮಧ್ಯಂತರ ವರದಿ ಸಲ್ಲಿಸಿದೆ. ನೇಮಕಾತಿಯಲ್ಲಿ ಅಕ್ರಮ, ನ್ಯಾಯಯೋಚಿತವಾಗಿ ನೇಮಕಾತಿ ನಡೆಸದಿರುವುದು ಮೇಲ್ನೋಟಕ್ಕೆ ಕಂಡುಬಂದಿರುತ್ತದೆ. ಹೀಗಾಗಿ, ಅರ್ಹರಿಗೆ ಅನ್ಯಾಯವಾಗದಂತೆ ಮರು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಸರ್ಕಾರ ಆದೇಶದಲ್ಲಿ ವಿವರಿಸಿದೆ.
ಕಲಬುರ್ಗಿ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದ 11 ಅಭ್ಯರ್ಥಿಗಳ ಪೈಕಿ 8 ಮಂದಿ ಅಕ್ರಮದಲ್ಲಿ ಭಾಗಿಯಾಗಿರುವುದು ಕಂಡು ಬಂದಿದೆ. ಅಭ್ಯರ್ಥಿಗಳು, ಶಾಲಾ ಸಿಬ್ಬಂದಿ, ವ್ಯವಸ್ಥಾಪಕರು, ಏಜೆಂಟ್‌ಗಳು ಹಾಗೂ ಹಲವರ ಸಹಕಾರದಿಂದ ಪರೀಕ್ಷಾ ಪ್ರಕ್ರಿಯೆಯನ್ನು ದುರ್ಬಲಗೊಳಿಸಿರುವುದು ಸಿಐಡಿ ವಿಚಾರಣೆ ಹಾಗೂ ತನಿಖೆಯಿಂದ ಗೊತ್ತಾಗಿದೆ. ಜ್ಞಾನಜ್ಯೋತಿ ಪರೀಕ್ಷಾ ಕೇಂದ್ರದ ರೀತಿಯಲ್ಲಿಯೇ ಇತರೆ ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ನಡೆದಿರುವುದನ್ನು ತಳ್ಳಿಹಾಕಲಾಗದು ಎಂದೂ ಸರ್ಕಾರದ ಆದೇಶದಲ್ಲಿ ವಿವರಿಸಲಾಗಿದೆ.
ಬೆಂಗಳೂರಿನ ಏಳು ಕೇಂದ್ರಗಳಲ್ಲಿ ಪರೀಕ್ಷೆ ಬರೆದು ಆಯ್ಕೆಯಾಗಿರುವ 22 ಅಭ್ಯರ್ಥಿಗಳ ಒಎಂಆರ್ ಪ್ರತಿಗಳು ಸಂದೇಹಾಸ್ಪದವಾಗಿವೆ. ಇದರ ಜೊತೆಗೆ ಹೆಚ್ಚಿನ ಸಂಖ್ಯೆಯ ಒಎಂಆರ್ ಅಸಲಿ ಹಾಗೂ ಕಾರ್ಬನ್ ಪ್ರತಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಸಿಐಡಿ ವರದಿಯಲ್ಲಿ ಹೇಳಿದೆ.