ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ನೇಮಕಾತಿಗೆ ಮರು ಪರೀಕ್ಷೆ ನಡೆಸುವುದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಉಭಯ ಪಕ್ಷಕಾರರು ವಾದದ ಅಂಶಗಳನ್ನು ಒಳಗೊಂಡ ದಾಖಲೆಗಳನ್ನು ಪರಸ್ಪರ ಹಂಚಿಕೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಮೌಖಿಕವಾಗಿ ಸೂಚಿಸಿದೆ.
ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆ ನಡೆಸಲು ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಆಯ್ಕೆಯಾಗಿದ್ದ ನೂರಾರು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ಜಿ ನರೇಂದರ್ ಮತ್ತು ಸಿ ಎಂ ಪೂಣಚ್ಚ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.
ವಿಚಾರಣೆ ಆರಂಭವಾಗುತ್ತಿದ್ದಂತೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ರೊಬೆನ್ ಜಾಕಬ್ ಅವರು ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ಯಾವುದೇ ಆರೋಪಕ್ಕೆ ಗುರಿಯಾಗದ ಅಭ್ಯರ್ಥಿಗಳಿಗೆ ಮತ್ತೊಂದು ಪರೀಕ್ಷೆಯನ್ನು ಏಕೆ ನಡೆಸಲಾಗದು ಎಂಬುದಕ್ಕೆ ಪೂರಕವಾಗಿ ಹೆಚ್ಚುವರಿ ಆಕ್ಷೇಪಣೆ ಒಳಗೊಂಡ ಅಫಿಡವಿಟ್ ಅನ್ನು ಬೆಳಗ್ಗೆ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದರು.
ಇತ್ತ ಅರ್ಜಿದಾರರ ಪರ ವಕೀಲ ಸಂತೋಷ್ ನಗರ್ಲೆ ಅವರು ತಮ್ಮ ಕಕ್ಷಿದಾರರ ವಿರುದ್ಧ ರಾಜ್ಯದ ಯಾವುದೇ ನ್ಯಾಯಾಲಯದಲ್ಲಿ ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದರು. ಮುಂದುವರೆದು, ಆರೋಪಿಗಳ ವಿರುದ್ಧ ಯಾವೆಲ್ಲಾ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ, ಅವುಗಳ ಸ್ಥಿತಿಗತಿ ಕುರಿತ ಮಾಹಿತಿಯನ್ನು ಒಳಗೊಂಡ ಅಫಿಡವಿಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದರು.
ಉಭಯ ಪಕ್ಷಕಾರರ ವಾದವನ್ನು ಆಲಿಸಿದ ಪೀಠವು ಸದರಿ ದಾಖಲೆಗಳನ್ನು ಪರಸ್ಪರ ಹಂಚಿಕೊಳ್ಳಬೇಕು. ಬುಧವಾರ (ಜುಲೈ 12ಕ್ಕೆ) ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಲಾಗುವುದು ಎಂದು ಹೇಳಿ, ಪ್ರಕರಣ ಮುಂದೂಡಿತು.
ಪಿಎಸ್‌ಐ ನೇಮಕಾತಿಗೆ ಸಂಬಂಧಿಸಿದಂತೆ ಅಕ್ರಮದಲ್ಲಿ ಭಾಗಿಯಾಗಿರುವವರನ್ನು ಹೊರತುಪಡಿಸಿ ಉಳಿದವರಿಗೆ ವಿಶೇಷ ಪರೀಕ್ಷೆ ನಡೆಸಲು ಏಕೆ ಸಾಧ್ಯವಿಲ್ಲ ಎಂಬುದಕ್ಕೆ ಸಂಬಂಧಿಸಿದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಕಳೆದ ವಾರ ಸರ್ಕಾರವು ಪೀಠಕ್ಕೆ ಸಲ್ಲಿಸಿತ್ತು.