[ಪಿಎಸ್‌ಐ ನೇಮಕಾತಿ ಹಗರಣ] ಆರೋಪಿ ವಿರುದ್ಧ ಎರಡು ಪ್ರತ್ಯೇಕ ಎಫ್‌ಐಆರ್‌:ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

ಅರ್ಜಿದಾರರ ವಿರುದ್ಧ ಯಾವುದೇ ದಾಖಲೆಗಳು ಲಭ್ಯವಾಗಿಲ್ಲ. ಹೀಗಾಗಿ, ಪ್ರಕರಣದಲ್ಲಿ ಅರ್ಜಿದಾರರನ್ನು ಸಿಲುಕಿಸಲು ಹಾಗೂ ಮತ್ತೆ 15 ದಿನ ಹೆಚ್ಚುವರಿಯಾಗಿ ವಶಕ್ಕೆ ಪಡೆಯಲು ಪ್ರತ್ಯೇಕವಾಗಿ ರಾಮಮೂರ್ತಿ ನಗರದಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.
PSI exam scam and Karnataka HC
PSI exam scam and Karnataka HC

ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬರ ವಿರುದ್ಧ ಎರಡು ಪ್ರತ್ಯೇಕ ಎಫ್‌ಐಆರ್‌ ದಾಖಲಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಕುರಿತಾದ ತೀರ್ಪನ್ನು ಕರ್ನಾಟಕ ಹೈಕೋರ್ಟ್‌ ಈಚೆಗೆ ಕಾಯ್ದಿರಿಸಿದೆ.

ಬೆಂಗಳೂರಿನ ರಾಮಮೂರ್ತಿ ನಗರ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಸದರಿ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಡಿ ಹರ್ಷ ಸಲ್ಲಿಸಿರುವ ಕ್ರಿಮಿನಲ್‌ ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಪೀಠವು ತೀರ್ಪು ಕಾಯ್ದಿರಿಸಿದೆ.

“ಒಂದೇ ರೀತಿಯ ಆರೋಪಕ್ಕೆ ಸಂಬಂಧಿಸಿದಂತೆ ಹಲವು ಎಫ್‌ಐಆರ್‌ ದಾಖಲಿಸಿರುವ ಹಿನ್ನೆಲೆಯಲ್ಲಿ ಅರ್ಜಿದಾರರನ್ನು ವಶಕ್ಕೆ ಪಡೆಯುವುದಕ್ಕೆ ಪ್ರತಿವಾದಿಗಳನ್ನು ನಿರ್ಬಂಧಿಸಲಾಗಿದೆ. ಆರೋಪಿಯು ನ್ಯಾಯಾಂಗ ಬಂಧನದಲ್ಲಿದ್ದು, ಕಾನೂನಿನ ಪ್ರಕಾರ ತನಿಖಾಧಿಕಾರಿ ವಿಚಾರಣೆ ಮುಂದುವರಿಸುವುದನ್ನು ನ್ಯಾಯಾಲಯವು ತಡೆದಿಲ್ಲ ಎಂಬುದನ್ನು ಸ್ಪಷ್ಟಪಡಿಲಾಗಿದೆ” ಎಂದು ಪೀಠವು ಆದೇಶದಲ್ಲಿ ಹೇಳಿದೆ.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಸಂದೇಶ್‌ ಚೌಟ ಮತ್ತು ಅರುಣ್‌ ಜಿ ಅವರು “ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಅರ್ಜಿದಾರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಪೊಲೀಸರು 15 ದಿನ ವಿಚಾರಣೆಗೆ ಒಳಪಡಿಸಿದ್ದಾರೆ. ಈ ಸಂದರ್ಭದಲ್ಲಿ ಅರ್ಜಿದಾರರ ವಿರುದ್ಧ ಯಾವುದೇ ದಾಖಲೆಗಳು ಲಭ್ಯವಾಗಿಲ್ಲ. ಹೀಗಾಗಿ, ಪ್ರಕರಣದಲ್ಲಿ ಅರ್ಜಿದಾರರನ್ನು ಸಿಲುಕಿಸಲು ಹಾಗೂ ಮತ್ತೆ 15 ದಿನ ಅರ್ಜಿದಾರರನ್ನು ಹೆಚ್ಚುವರಿಯಾಗಿ ವಶಕ್ಕೆ ಪಡೆಯಲು ಪ್ರತ್ಯೇಕವಾಗಿ ರಾಮಮೂರ್ತಿ ನಗರದಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಇಲ್ಲಿ ಸಿಆರ್‌ಪಿಸಿ ನಿಬಂಧನೆ 167 ಅನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ” ಎಂದು ಆಕ್ಷೇಪಿಸಿದರು.

“ಡಾಕ್ಟ್ರಿನ್‌ ಆಫ್‌ ಸೇಮ್‌ನೆಸ್‌ (ಏಕರೂಪ ತತ್ವ) ಪ್ರಕಾರ ಒಂದೇ ರೀತಿಯ ಆರೋಪಗಳಿಗೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಯುತ್ತಿರುವಾಗ ಹೆಚ್ಚುವರಿಯಾಗಿ ಎಫ್‌ಐಆರ್‌ ದಾಖಲಿಸಲಾಗದು. ಸ್ವತಂತ್ರ ಘಟನೆ ಕಂಡು ಬಂದರೆ ಹೆಚ್ಚುವರಿಯಾಗಿ ಎಫ್‌ಐಆರ್‌ ದಾಖಲಿಸಬಹುದು” ಎಂದು ಪೀಠದ ಗಮನಸೆಳೆದರು.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಸುಬ್ರಹ್ಮಣ್ಯ ಅವರು “ಸರ್ವೋಚ್ಚ ನ್ಯಾಯಾಲಯವು ಇಂಥದ್ದೇ ಪ್ರಕರಣವೊಂದನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿತ್ತು. ಹೊಸ ಆರೋಪಗಳು ಇರುವುದು ತನಿಖಾಧಿಕಾರಿಗೆ ಗೊತ್ತಾದರೆ ಪ್ರತ್ಯೇಕ ಪ್ರಕರಣ ದಾಖಲಿಸಬಹುದು. ಇಲ್ಲಿ ಡಾಕ್ಟ್ರಿನ್‌ ಆಫ್‌ ಸೇಮ್‌ನೆಸ್‌ ಅನ್ವಯಿಸದು” ಎಂದು ವಾದಿಸಿದ್ದಾರೆ.

ಪ್ರಕರಣದ ಹಿನ್ನೆಲೆ: ಪಿಎಸ್‌ಐ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ 2022ರ ಏಪ್ರಿಲ್‌ 30ರಂದು ಪಿಎಸ್‌ಐ ಪರೀಕ್ಷೆ ಬರೆದಿದ್ದ 22 ಅಭ್ಯರ್ಥಿಗಳು ಸೇರಿದಂತೆ ಹಲವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್‌ಗಳಾದ 120ಬಿ, 465, 468, 471, 420 ಜೊತೆಗೆ 34ರ ಪ್ರಕರಣ ದಾಖಲಿಸಲಾಗಿತ್ತು. ಸಿಐಡಿಯ ನೇಮಕಾತಿ ವಿಭಾಗದಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಹರ್ಷ ಅವರು ಮಧ್ಯವರ್ತಿಯಾಗಿ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿ ಅವರನ್ನು ಈ ಪ್ರಕರಣದಲ್ಲಿ 27ನೇ ಆರೋಪಿಯನ್ನಾಗಿ ಮಾಡಲಾಗಿತ್ತು.

ಮತ್ತೆ 2022ರ ಜೂನ್‌ 5ರಂದು ಹರ್ಷ ಸೇರಿದಂತೆ ಮೂವರ ವಿರುದ್ಧ ರಾಮಮೂರ್ತಿ ನಗರ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆ ಸೆಕ್ಷನ್‌ಗಳಾದ 120ಬಿ, 465, 468, 471, 420 ಜೊತೆಗೆ 34ರ ಅಡಿ ಪ್ರತ್ಯೇಕ ಎಫ್‌ಐಆರ್‌ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಹರ್ಷ ಅವರನ್ನು ಮೂರನೇ ಆರೋಪಿಯನ್ನಾಗಿಸಲಾಗಿದೆ. ಇದರ ಜೊತೆಗೆ ಪಿಎಸ್‌ಐ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಯಲಹಂಕ, ಕೋರಮಂಗಲ ಹಾಗೂ ಬೆಂಗಳೂರಿನ ವಿವಿಧ ಕಡೆ ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎನ್ನಲಾಗಿದೆ.

Related Stories

No stories found.
Kannada Bar & Bench
kannada.barandbench.com