ಪಿಎಸ್‌ಐ ಹಗರಣ: ಐಪಿಎಸ್‌ ಅಧಿಕಾರಿ ಅಮೃತ್‌ ಪೌಲ್‌ ಜಾಮೀನು ಮನವಿಯನ್ನು ಮೂರನೇ ಬಾರಿ ತಿರಸ್ಕರಿಸಿದ ವಿಶೇಷ ನ್ಯಾಯಾಲಯ

ವಿಶೇಷ ನ್ಯಾಯಾಲಯದಲ್ಲಿ ಮೂರು ಬಾರಿ, ಸತ್ರ ನ್ಯಾಯಾಲಯ ಮತ್ತು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ತಲಾ ಒಮ್ಮೊಮ್ಮೆ ಸೇರಿ ಒಟ್ಟು ಐದು ಬಾರಿ ಪೌಲ್‌ ಅವರ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.
IPS officer Amrit Paul
IPS officer Amrit Paul
Published on

ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರ ಜಾಮೀನು ಅರ್ಜಿಯನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯವು ಶುಕ್ರವಾರ ವಜಾ ಮಾಡಿದ್ದು, ಸತತ ಮೂರನೇ ಬಾರಿಗೆ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಇದರೊಂದಿಗೆ ಒಟ್ಟು ಐದು ಬಾರಿ ಪೌಲ್‌ ಅವರ ಜಾಮೀನು ಅರ್ಜಿ ವಜಾಗೊಂಡಂತಾಗಿದೆ.

ಹಗರಣದಲ್ಲಿ 35ನೇ ಆರೋಪಿಯಾಗಿರುವ ಅಮೃತ್‌ ಪೌಲ್‌ ಅವರು ಸಲ್ಲಿಸಿದ್ದ ಅರ್ಜಿಯನ್ನು ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ಸ್ಥಾಪಿಸಲಾಗಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕೆ ಲಕ್ಷ್ಮಿನಾರಾಯಣ ಭಟ್‌ ಅವರು ಪುರಸ್ಕರಿಸಲಿಲ್ಲ. ವಿಸ್ತೃತವಾದ ಆದೇಶ ಇನ್ನಷ್ಟೇ ಬರಬೇಕಿದೆ.

ಈಗಾಗಲೇ ಆರೋಪ ಪಟ್ಟಿ ಸಲ್ಲಿಸಲಾಗಿದ್ದು, ತನಿಖೆ ಪೂರ್ಣಗೊಂಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಸರ್ಕಾರಿ ಅಧಿಕಾರಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಹೀಗಾಗಿ, ತನಗೂ ಜಾಮೀನು ನೀಡಬೇಕು ಎಂದು ಎಂದು ಪೌಲ್‌ ಮನವಿ ಮಾಡಿದರು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಪ್ರಾಸಿಕ್ಯೂಷನ್‌ ಪರ ವಿಶೇಷ ಸರ್ಕಾರಿ ಅಭಿಯೋಜಕರಾದ ಪಿ ಪ್ರಸನ್ನ ಕುಮಾರ್‌ ಅವರು ಈಚೆಗೆ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ಒಬ್ಬರಿಗೆ ಹೈಕೋರ್ಟ್‌ ಜಾಮೀನು ನಿರಾಕರಿಸಿದೆ. ಪಿಎಸ್‌ಐ ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರಾಗಿದ್ದ ಪೌಲ್‌ ಅವರು ಭಾರಿ ಪ್ರಮಾದ ಎಸಗಿದ್ದಾರೆ. ಯಾವುದೇ ರೀತಿಯಲ್ಲೂ ಆರೋಪಿಯು ಜಾಮೀನಿಗೆ ಅರ್ಹವಾಗಿಲ್ಲ ಎಂದು ಪ್ರಬಲವಾಗಿ ವಾದಿಸಿದರು. ಇದನ್ನು ನ್ಯಾಯಾಲಯವು ಪುರಸ್ಕರಿಸಿತು.

ಈಗಾಗಲೇ ಆರೋಪ ಪಟ್ಟಿ ಸಲ್ಲಿಸಿರುವುದರಿಂದ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದ್ದ ಪೌಲ್‌ ಅವರ ಡಿಫಾಲ್ಟ್‌ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯವು ಜನವರಿ 4ರಂದು ತಿರಸ್ಕರಿಸಿತ್ತು. ಇದಕ್ಕೂ ಮುನ್ನ, 2022ರ ನವೆಂಬರ್‌ 23ರಲ್ಲೂ ವಿಶೇಷ ನ್ಯಾಯಾಲಯವು ಪೌಲ್‌ ಅವರಿಗೆ ಜಾಮೀನು ನೀಡಲು ನಿರಾಕರಿಸಿತ್ತು. ಈ ಮಧ್ಯೆ, ಪ್ರಕರಣವನ್ನು ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸುವ ಮುನ್ನ ಬೆಂಗಳೂರಿನ 51ನೇ ಹೆಚ್ಚುವರಿ ನಗರ ಮತ್ತು ಸತ್ರ ನ್ಯಾಯಾಧೀಶರಾದ ಯಶವಂತ ಅವರು ಜಾಮೀನು ನೀಡಲು ನಿರಾಕರಿಸಿದ್ದರು. ಇದಕ್ಕೂ ಮುನ್ನ, ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಪೌಲ್‌ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಈವರೆಗೆ ಒಟ್ಟು ಐದು ಬಾರಿ ಪೌಲ್‌ ಅವರ ಜಾಮೀನು ಅರ್ಜಿ ತಿರಸ್ಕೃತವಾಗಿದೆ. 2022ರ ಜುಲೈ 4ರಂದು ಪೌಲ್‌ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದರು.

Kannada Bar & Bench
kannada.barandbench.com