ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದ ಪ್ರಮುಖ ಆರೋಪಿಯಾಗಿರುವ ಅಮಾನತುಗೊಂಡಿರುವ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ತಮ್ಮ ವಿರುದ್ಧದ ಒಟ್ಟು ಏಳು ಆರೋಪ ಪಟ್ಟಿಗಳನ್ನು ವಜಾ ಮಾಡುವಂತೆ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಆಕ್ಷೇಪಣೆ ಸಲ್ಲಿಸಲು ಸಿಐಡಿಗೆ ಮತ್ತೊಮ್ಮೆ ನ್ಯಾಯಾಲಯ ಅವಕಾಶ ಕಲ್ಪಿಸಿದೆ.
ಪಿಎಸ್‌ಐ ಹಗರಣದಲ್ಲಿ 35ನೇ ಆರೋಪಿಯಾಗಿರುವ ಒಎಂಆಎರ್ ಶೀಟುಗಳನ್ನು ತಿರುಚಲು ನೆರವಾದ ಆರೋಪ ಎದುರಿಸುತ್ತಿರುವ ಅಮೃತ್ ಪೌಲ್ ತಮ್ಮ ವಿರುದ್ಧದ ಒಂದು ಪ್ರಾಥಮಿಕ ಆರೋಪ ಪಟ್ಟಿ ಮತ್ತು ಆರು ಹೆಚ್ಚುವರಿ ಆರೋಪ ಪಟ್ಟಿ, ಎಫ್‌ಐಆರ್ ಹಾಗೂ ವಿಚಾರಣಾಧೀನ ನ್ಯಾಯಾಲಯದಲ್ಲಿನ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈಚೆಗೆ ವಿಚಾರಣೆ ನಡೆಸಿತು.
ಸಿಐಡಿ ಪರ ವಕೀಲ ಪಿ ಪ್ರಸನ್ನಕುಮಾರ್ ಅವರು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿರುವ ಹಿನ್ನೆಲೆಯಲ್ಲಿ ನ್ಯಾಯಾಲಯವು ವಿಚಾರಣೆಯನ್ನು ಆಗಸ್ಟ್ 21ಕ್ಕೆ ಮುಂದೂಡಿದೆ. ಅಮೃತ್ ಪೌಲ್ ಪರವಾಗಿ ವಕೀಲೆ ಪಿ ಎಲ್ ವಂದನಾ ವಕಾಲತ್ತು ಹಾಕಿದ್ದಾರೆ.
ಸಿಐಡಿ ಉಪ ಪೊಲೀಸ್ ವರಿಷ್ಠಾಧಿಕಾರಿ ಪಿ ನರಸಿಂಹ ಮೂರ್ತಿ ಅವರ ದೂರಿನ ಮೇರೆಗೆ ಅಮೃತ್ ಪೌಲ್ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 120(ಬಿ), 36, 37, 119, 409, 420, 465, 468, 471, 201 ಜೊತೆಗೆ ಸೆಕ್ಷನ್ 34 ಹಾಗೂ ಭ್ರಷ್ಟಾಚಾರ ನಿಷೇಧ ಕಾಯಿದೆ ಸೆಕ್ಷನ್‌ಗಳಾದ 7(ಎ) (ಸಿ), 7ಎ, 8, 13(1)(ಎ) ಜೊತೆಗೆ 13(2) ಅಡಿ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣದ ಸಂಬಂಧ 2022ರ ಜುಲೈ 4ರಂದು ಬಂಧಿತರಾಗಿದ್ದ ಪೌಲ್ ಅವರಿಗೆ ಹೈಕೋರ್ಟ್ 2023ರ ಸೆಪ್ಟೆಂಬರ್ 25ರಂದು ಜಾಮೀನು ಮಂಜೂರು ಮಾಡಿತ್ತು.
ಈ ಮಧ್ಯೆ, ಹಗರಣಕ್ಕೆ ಸಂಬಂಧಿಸಿದಂತೆ 2023ರ ಜುಲೈನ ಕೊನೆಯ ವಾರದಲ್ಲಿ ಸುಮಾರು 3 ಸಾವಿರಕ್ಕೂ ಹೆಚ್ಚು ಪುಟಗಳ ಮೊದಲ ಆರೋಪ ಪಟ್ಟಿಯನ್ನು ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಅಲ್ಲಿ, ಪ್ರಕರಣದ 35ನೇ ಆರೋಪಿಯಾಗಿರುವ ಅಮೃತ್ ಪೌಲ್ ಅವರ ಪಾತ್ರದ ಬಗ್ಗೆ ಪ್ರಸ್ತಾಪಿಸಿರಲಿಲ್ಲ. ಆನಂತರ 1,406 ಪುಟಗಳ ಆರೋಪ ಪಟ್ಟಿ 78 ಪ್ರಮುಖ ದಾಖಲೆಗಳು, 38 ಸಾಕ್ಷ್ಯ ಹಾಗೂ 7 ಸಂಪುಟಗಳನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಸಿಐಡಿ ಸಲ್ಲಿಸಿದ್ದು, ಇದರಲ್ಲಿ ಅಮೃತ್ ಪೌಲ್ ಪಾತ್ರದ ಬಗ್ಗೆಯೂ ವಿವರಿಸಿದ್ದಾರೆ.
ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆ ನೇಮಕಾತಿಗೆ ನಡೆದ ಪರೀಕ್ಷೆಯನ್ನು 54,287 ಅಭ್ಯರ್ಥಿಗಳು ಎದುರಿಸಿದ್ದರು. ಇಲ್ಲಿ ಪ್ರಾವಿಷನಲ್ ಆಯ್ಕೆ ಪಟ್ಟಿಯಲ್ಲಿ ಹೆಸರು ಹೊಂದಿದ್ದ ಹಲವು ಅಭ್ಯರ್ಥಿಗಳು ವಿದ್ಯುನ್ಮಾನ ಸಾಧನಗಳು, ಆನಂತರ ಒಎಂಆರ್ ತಿರುಚುವ ಮೂಲಕ ಅನುಕೂಲ ಪಡೆದಿದ್ದರು ಎಂಬುದು ಆರೋಪವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿಯು ಹಲವು ಮಂದಿಯನ್ನು ಬಂಧಿಸಿತ್ತು. ಹಗರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿಯ ಚೌಕ್ ಮತ್ತು ಸ್ಟೇಷನ್ ಬಜಾರ್ ಠಾಣೆ, ಬೆಂಗಳೂರಿನ ಹೈಗ್ರೌಂಡ್ಸ್ ಸೇರಿದಂತೆ ಹಲವು ಕಡೆ ಆರೋಪಿಗಳ ವಿರುದ್ಧ ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿತ್ತು.
ಅಮೃತ್ ಪೌಲ್ ಅವರಿಗೆ 5 ಕೋಟಿ ರೂಪಾಯಿ ನೀಡಿದ್ದು, ಹೀಗಾಗಿ ಅವರು ಪಿಎಸ್‌ಐ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳ ಒಎಂಆರ್ ಕಿಟ್‌ಬಾಕ್ಸ್‌ಗಳನ್ನು ಇರಿಸಿದ್ದ ಅಲ್ಮೇರಾಗಳ ಕೀಗಳನ್ನು ನೀಡಿದ್ದು, ಇದನ್ನು ಬಳಸಿ ಒಎಂಆರ್ ತಿರುಚಿರುವುದಾಗಿ ಪೊಲೀಸ್ ನೇಮಕಾತಿ ವಿಭಾಗದಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಬಂಧಿತರಾಗಿ ಅಮಾನತುಗೊಂಡಿರುವ 31ನೇ ಆರೋಪಿ ಶಾಂತಕುಮಾರ್ ಹೇಳಿಕೆ ನೀಡಿದ್ದರು.