
ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಗಿರಿಧಾಮಗಳಿರುವ ರಾಜ್ಯಗಳು ಮತ್ತು ದೂರದ ಸ್ಥಳಗಳಿಗೆ ಭೇಟಿ ನೀಡುವ ಪ್ರವಾಸಿಗರ ರಕ್ಷಣೆಗಾಗಿ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಹಾಗೂ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸ್ಥಳಗಳಲ್ಲಿ ಸಶಸ್ತ್ರ ಪಡೆ ನಿಯೋಜಿಸುವಂತೆ ಕೇಂದ್ರ ಗೃಹ ಸಚಿವಾಲಯ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.
ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ವಕೀಲ ವಿಶಾಲ್ ತಿವಾರಿ ಅವರು ಸಲ್ಲಿಸಿದ್ದ ಅರ್ಜಿ ಪ್ರವಾಸಿ ಸ್ಥಳಗಳಲ್ಲಿ, ಅದರಲ್ಲಿಯೂ ದೂರದ ಗಿರಿಧಾಮ ಮತ್ತು ಕಣಿವೆ ಪ್ರದೇಶಗಳಲ್ಲಿ ತುರ್ತು ಪರಿಸ್ಥಿತಿ ವೇಳೆ ವೈದ್ಯಕೀಯ ನೆರವು ನೀಡುವುದಕ್ಕಾಗಿ ಸರಿಯಾದ ವೈದ್ಯಕೀಯ ಸೌಲಭ್ಯ ಕಲ್ಪಿಸಲು ನಿರ್ದೇಶನ ನೀಡುವಂತೆ ಕೋರಿತ್ತು.
ಆದರೆ ದಾವೆದಾರ ಪ್ರಚಾರದ ಹಿತಾಸಕ್ತಿಯಿಂದ ಪದೇ ಪದೇ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸುತ್ತಿದ್ದಾರೆ ಎಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರಿದ್ದ ಪೀಠ ಅಸಮಾಧಾನ ವ್ಯಕ್ತಪಡಿಸಿತು.
"ತಿವಾರಿ ಅವರೇ, ನೀವು ಪದೇ ಪದೇ ಪಿಐಎಲ್‌ಗಳನ್ನು ಏಕೆ ಸಲ್ಲಿಸುತ್ತಿದ್ದೀರಿ? ನಿಮ್ಮನ್ನು ಯಾರು ಪ್ರಚೋದಿಸುತ್ತಿದ್ದಾರೆ" ಎಂದು ಪೀಠ ಕೇಳಿತು.
ಅರ್ಜಿ ಪ್ರವಾಸಿಗರಿಗೆ ರಕ್ಷಣೆ ನೀಡುವುದಕ್ಕೆ ಸಂಬಂಧಿಸಿದೆಯೇ ವಿನಾ ಸರ್ಕಾರದ ವಿರುದ್ಧ ಇಲ್ಲ ಎಂದು ತಿವಾರಿ ಹೇಳಿದರು. "ನೀವು ಸಮಸ್ಯೆಯ ಸೂಕ್ಷ್ಮತೆಯನ್ನು ಅರ್ಥಮಾಡಿಕೊಳ್ಳುತ್ತಿಲ್ಲ" ಎಂದು ನ್ಯಾಯಾಲಯ ಟೀಕಿಸಿತು. ನಂತರ ತಿವಾರಿ ಅರ್ಜಿಯನ್ನು ಹಿಂಪಡೆಯಲು ಅನುಮತಿ ಕೋರಿದರು.
"ಅರ್ಜಿದಾರರು ಸಾರ್ವಜನಿಕ ಹಿತಾಸಕ್ತಿಗಾಗಿ ಸೇವೆ ಸಲ್ಲಿಸುವ ಉದ್ದೇಶವಿಲ್ಲದೆ, ಪ್ರಚಾರವನ್ನು ಗುರಿಯಾಗಿಟ್ಟುಕೊಂಡು ಒಂದಿಲ್ಲೊಂದು ಪಿಐಎಲ್‌ಗಳನ್ನು ಸಲ್ಲಿಸಿದ್ದಾರೆ. ಅವುಗಳನ್ನು ವಜಾಗೊಳಿಸಲಾಗಿದೆ" ಎಂದು ನ್ಯಾಯಾಲಯ ಹೇಳಿದೆ.
ಕಾಶ್ಮೀರದಲ್ಲಿ ಅಮರನಾಥ ಯಾತ್ರೆಯ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ನಿರ್ದೇಶನ ನೀಡುವಂತೆಯೂ ಅರ್ಜಿದಾರರು ಕೋರಿದ್ದರು.
ಮತ್ತೊಂದೆಡೆ ಉಗ್ರರ ದಾಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಲು ಈಚೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಸೇನಾ ಪಡೆಗಳ ಸ್ಥೈರ್ಯ ಕುಗ್ಗಿಸಬಾರದು ಎಂದು ಅದು ಆ ವೇಳೆ ಅರ್ಜಿದಾರರಿಗೆ ಬುದ್ಧಿವಾದ ಹೇಳಿತ್ತು.