ಹೊಸನಗರದ ರಾಮಚಂದ್ರಾಪುರ ಮಠವೂ ಸೇರಿ ರಾಜ್ಯದಲ್ಲಿರುವ ಎಲ್ಲ ಮಠಗಳ ನಿಯಂತ್ರಣಕ್ಕೆ ಕಾನೂನು ರೂಪಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂಬ ಕೋರಿಕೆ ಪುರಸ್ಕರಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಗುರುವಾರ ಇತ್ಯರ್ಥಪಡಿಸಿದೆ.
ಮಠಗಳ ನಿಯಂತ್ರಣಕ್ಕೆ ಕಾನೂನು ರೂಪಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು. ರಾಮಚಂದ್ರಾಪುರ ಮಠದ ಪೀಠಾಧಿಪತಿ ಸ್ಥಾನದಿಂದ ರಾಘವೇಶ್ವರ ಭಾರತೀ ಸ್ವಾಮೀಜಿಯನ್ನು ಕೆಳಗಿಳಿಸಿ, ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಬೇಕು ಹಾಗೂ ಮಠದ ಆಡಳಿತದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಕುರಿತು ತನಿಖೆಗೆ ಆದೇಶಿಸಬೇಕು ಎಂದು ಕೋರಿ ಬೆಂಗಳೂರಿನ ಎದುರ್ಕಳ ಈಶ್ವರ ಭಟ್, ಎ ಕೆ ಜೈಕೃಷ್ಣ ಸೇರಿ 6 ಮಂದಿ 2016ರಲ್ಲಿ ಸಲ್ಲಿಸಿದ್ದ ಅರ್ಜಿಯ ಕುರಿತು ಸುದೀರ್ಘ ವಾದ ಆಲಿಸಿ ಸೆಪ್ಟೆಂಬರ್ 22ರಂದು ಕಾಯ್ದರಿಸಿದ್ದ ತೀರ್ಪನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರ ನೇತೃತ್ವದ ವಿಭಾಗೀಯ ಪೀಠವು ಪ್ರಕಟಿಸಿತು.
ಮಠಗಳ ಮೇಲೆ ನಿಯಂತ್ರಣ ಸಾಧಿಸುವ ನಿಟ್ಟಿನಲ್ಲಿ ಕಾನೂನು ರೂಪಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಲು ಸಾಧ್ಯವಿಲ್ಲ. ಒಂದು ವೇಳೆ ಯಾರಾದರೂ ಬಾಧಿತರಿದ್ದರೆ ಅಂಥವರು ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿ ಪರಿಹಾರ ಪಡೆಯಲು ಪರ್ಯಾಯ ಮಾರ್ಗವಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಸಂವಿಧಾನದ 226ನೇ ವಿಧಿ ಅಡಿಯಲ್ಲಿ ತನ್ನ ಪರಮಾಧಿಕಾರವನ್ನು ಬಳಸಿ, ಮಠಗಳ ಆಡಳಿತ ನಿಯಂತ್ರಣಕ್ಕಾಗಿ ಕಾನೂನು ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಲು ಸಾಧ್ಯವಿಲ್ಲ. ಮಠಗಳು ಹಾಗೂ ಅವುಗಳಿಗೆ ಹೊಂದಿಕೊಂಡ ದೇವಾಲಯಗಳು ಮಠಾಧಿಪತಿಗಳಿಂದ ನಿರ್ವಹಿಸಲ್ಪಡುವುದರಿಂದ ಶಾಸನ ಸಭೆಯು ಅವುಗಳನ್ನು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿ ಕಾಯಿದೆ-1997ರ ವ್ಯಾಪ್ತಿಯಿಂದ ಹೊರಗಿಟ್ಟಿದೆ. ಮೇಲಾಗಿ ಅರ್ಜಿದಾರರಿಗೆ ಪರ್ಯಾಯ ಪರಿಹಾರ ಪಡೆಯಲು ಸಿಪಿಸಿ ಸೆಕ್ಷನ್ 92ರ ಅಡಿಯಲ್ಲಿ ಅವಕಾಶವಿದೆ. ಆದ್ದರಿಂದ, ಈ ಅರ್ಜಿ ವಿಚಾರಣೆ ನಿರ್ವಹಣೆಗೆ ಯೋಗ್ಯವಾಗಿಲ್ಲ ಎಂದು ತೀರ್ಪಿನಲ್ಲಿ ವಿವರಿಸಲಾಗಿದೆ.