
ಹಿಂದುತ್ವ ನಾಯಕ ವಿನಾಯಕ ದಾಮೋದರ್ ಸಾವರ್ಕರ್ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ್ದ ಸಮನ್ಸ್ ರದ್ದುಗೊಳಿಸಲು ನಿರಾಕರಿಸಿದ ಅಲಾಹಾಬಾದ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣದ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಮನಮೋಹನ್ ಅವರಿರುವ ಪೀಠ ಕೈಗೆತ್ತಿಕೊಳ್ಳಲಿದೆ.
ಈ ಹಿಂದೆ, ಅಲಾಹಾಬಾದ್ ಹೈಕೋರ್ಟ್ ರಾಹುಲ್ ಗಾಂಧಿ ಅವರ ಅರ್ಜಿಯ ವಿಚಾರಣೆಗೆ ನಿರಾಕರಿಸಿತ್ತು.
ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವ ಬದಲು ಅಪರಾಧ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 397 (ಕೆಳ ನ್ಯಾಯಾಲಯದ ದಾಖಲೆಗಳ ಪರಿಶೀಲನೆ) ಅಡಿಯಲ್ಲಿ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಅವಕಾಶ ರಾಹುಲ್ ಅವರಿಗೆ ಇದೆ ಎಂದಿದ್ದ ಹೈಕೋರ್ಟ್ ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಅರ್ಜಿ ತಿರಸ್ಕರಿಸಿದ್ದರು.
ಡಿಸೆಂಬರ್ 12, 2024ರಂದು ಲಖನೌ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸಮನ್ಸ್ ಆದೇಶ ನೀಡಿತ್ತು.
ವಕೀಲ ನೃಪೇಂದ್ರ ಪಾಂಡೆ ದೂರು ದಾಖಲಿಸಿದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್ 153 ಎ (ಹಗೆತನಕ್ಕೆ ಕುಮ್ಮಕ್ಕು) ಮತ್ತು 505 (ಸಾರ್ವಜನಿಕ ಕಿಡಿಗೇಡಿತನ) ಅಡಿಯಲ್ಲಿ ಮೊಕದ್ದಮೆ ಹೂಡಲಾಗಿತ್ತು.
ನವೆಂಬರ್ 17, 2022ರಂದು ರಾಹುಲ್ ಗಾಂಧಿ ತಮ್ಮ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಸಾವರ್ಕರ್ ಅವರನ್ನು ಬ್ರಿಟಿಷರ ಅನುಯಾಯಿ ಎಂದು ಉಲ್ಲೇಖಿಸಿದ್ದರು. ಸಾವರ್ಕರ್ ಬ್ರಿಟಿಷರಿಂದ ಪಿಂಚಣಿ ಪಡೆದಿದ್ದರು ಎಂದು ಹೇಳಿದ್ದರು. ಇದಕ್ಕೆ ಪಾಂಡೆ ಆಕ್ಷೇಪ ವ್ಯಕ್ತಪಡಿಸಿದ್ದರು.