ಮಾಜಿ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸಿ ಡಿ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಸೋಮವಾರ ರಾಜ್ಯ ಸರ್ಕಾರ, ಗೃಹ ಇಲಾಖೆ ಮತ್ತು ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ನೋಟಿಸ್ ಜಾರಿಗೊಳಿಸಿದೆ.
ವಕೀಲ ಎಸ್ ಉಮೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಅವರ ನೇತೃತ್ವದ ವಿಭಾಗೀಯ ಪೀಠವು ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಏಪ್ರಿಲ್ 17ಕ್ಕೆ ಮುಂದೂಡಿದೆ. ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಮುಂದಿನ ವಿಚಾರಣೆ ವೇಳೆಗೆ ಸಲ್ಲಿಸುವಂತೆ ಎಸ್‌ಐಟಿಗೆ ನ್ಯಾಯಾಲಯ ನಿರ್ದೇಶಿಸಿದೆ.
ಮನವಿಯಲ್ಲಿ ಏನಿದೆ?: ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಸಿ ಡಿ ಪ್ರಕರಣವು ಹಾದಿ ತಪ್ಪುತ್ತಿದೆ. ಆಡಳಿತ ಮತ್ತು ಪ್ರತಿಪಕ್ಷಗಳು ಸದರಿ ಪ್ರಕರಣವನ್ನು ಇಟ್ಟುಕೊಂಡು ಆರೋಪ-ಪ್ರತ್ಯಾರೋಪದಲ್ಲಿ ತೊಡಗಿವೆ. ಇದರಿಂದಾಗಿ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆಗಾಗಿ ಕರೆಯಲಾಗಿದ್ದ ಅಧಿವೇಶನವೂ ವ್ಯರ್ಥವಾಗಿದೆ. ರಾಜ್ಯದಲ್ಲಿ ಆಡಳಿತ ಯಂತ್ರ ಹಳಿ ತಪ್ಪಿದ್ದು, ಪ್ರಕರಣವು ರಾಜಕೀಯ ರಂಗು ಪಡೆದುಕೊಂಡಿರುವುದರಿಂದ ಎಸ್‌ಐಟಿ ಹಾಗೂ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಸರಿಯಾದ ರೀತಿಯಲ್ಲಿ ತನಿಖೆ ನಡೆಸುತ್ತಿಲ್ಲ. ಹೀಗಾಗಿ, ಪ್ರಕರಣದ ವಿಚಾರಣೆಯನ್ನು ಸರಿಯಾದ ರೀತಿಯಲ್ಲಿ ನಡೆಸಿ, ತಪ್ಪಿತಸ್ಥರನ್ನು ಗುರುತಿಸಲು ಸಿಬಿಐಗೆ ಜವಾಬ್ದಾರಿ ನೀಡುವುದು ಅಗತ್ಯವಿದೆ.
ಇಲ್ಲವಾದಲ್ಲಿ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚಿಸಲು ಕೇಂದ್ರ ಸರ್ಕಾರಕ್ಕೆ ಆದೇಶಿಸಬೇಕು. ಇದರ ಮೇಲ್ವಿಚಾರಣೆಯನ್ನು ಹೈಕೋರ್ಟ್‌ಗೆ ವಹಿಸಬೇಕು. ಪ್ರಕರಣದ ಕುರಿತು ಮಾಧ್ಯಮಗಳು ಪ್ರಚೋದನಕಾರಿ ಹಾಗೂ ಮಕ್ಕಳ ಮನಸ್ಸಿನ ಮೇಲೆ ಪ್ರಭಾವ ಬೀರುವ ರೀತಿಯಲ್ಲಿ ಸುದ್ದಿ ಪ್ರಕಟಿಸುತ್ತಿವೆ. ಇದಕ್ಕೆ ನಿರ್ಬಂಧ ವಿಧಿಸಬೇಕು ಎಂದು ಅರ್ಜಿದಾರರು ಮನವಿಯಲ್ಲಿ ವಿನಂತಿಸಿದ್ದಾರೆ.