ರಾಜ್ಯದ ಮಧ್ಯ ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಕಲುಷಿತ ಕುಡಿಯುವ ನೀರು ಪೂರೈಕೆಯಿಂದ ಆಗುತ್ತಿರುವ ಆರೋಗ್ಯ ಸಮಸ್ಯೆ ಉಲ್ಲೇಖಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಸಂಬಂಧ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.
ತುಮಕೂರಿನ ವಕೀಲ ರಮೇಶ್ ಎಲ್.ನಾಯ್ಕ್ ಎಂಬುವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.
ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ, ರಾಯಚೂರು, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲಾಧಿಕಾರಿಗಳು ಹಾಗೂ ತುಮಕೂರಿನ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಯನ್ನು ಜುಲೈ 1ಕ್ಕೆ ಮುಂದೂಡಿದೆ.
ಕುಡಿಯುವ ನೀರನ್ನು ಮಲಿನಗೊಳ್ಳದಂತೆ ತಡೆಯಲು ಅಗತ್ಯ ಕ್ರಮ ಕೈಗೊಳ್ಳಲು ನಿರ್ದೇಶಿಸಬೇಕು. ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆಯಾಗುತ್ತಿರುವ ನೀರಿನ ಮೂಲಗಳನ್ನು ನಿಯಮಿತವಾಗಿ ಪರಿಶೀಲಿಸಬೇಕು. ಹಳೆಯ ನೀರಿನ ಕೊಳವೆಗಳನ್ನು ಪರಿಶೀಲಿಸಬೇಕು. ನಗರ ಮತ್ತು ಗ್ರಾಮೀಣ ಪ್ರದೇಶಗಲ್ಲಿ ನಿರ್ದಿಷ್ಟ ದಿನಗಳಲ್ಲಿ ನೀರು ಸಂಗ್ರಹಿಸುವ ಘಟಕಗಳನ್ನು ಸ್ವಚ್ಛಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಕೋರಿ ಮನವಿ ಮಾಡಲಾಗಿದೆ.
ಕಳೆದ ಮೂರು ವರ್ಷಗಳಲ್ಲಿ ರಾಜ್ಯದ ರಾಯಚೂರು, ಚಿತ್ರದುರ್ಗ, ಮತ್ತು ತುಮಕೂರು ಜಿಲ್ಲೆಗಳಲ್ಲಿ ಕುಡಿಯುವ ನೀರು ಕಲುಷಿತಗೊಂಡು ಜನರು ಅನಾರೋಗ್ಯಕ್ಕೆ ತುತ್ತಾದ ಪ್ರಕರಣಗಳು ಮರುಕಳಿಸುತ್ತಿವೆ. ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಲವು ಬಾರಿ ಸರ್ಕಾರದ ಪ್ರಾಧಿಕಾರಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೂ, ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
2022ರ ಜೂನ್ ತಿಂಗಳಲ್ಲಿ ಕಲುಷಿತ ನೀರು ಕುಡಿದು ರಾಯಚೂರು ಪಟ್ಟಣದಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಅನೇಕ ಮಂದಿ ಅಸ್ವಸ್ಥರಾಗಿ ಎರಡು ವಾರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು.
2023ರ ಮೇ ತಿಂಗಳಲ್ಲಿ ದೇವದುರ್ಗ ತಾಲ್ಲೂಕಿನ ರೇಕಲಮರಡಿ ಗ್ರಾಮದಲ್ಲ 3 ವರ್ಷದ ಮಗು ಸಾವನ್ನಪ್ಪಿತ್ತು. 34 ಮಂದಿ ಅನಾರೋಗ್ಯಕ್ಕೆ ತುತ್ತಾಗಿದ್ದರು. ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಗೋರೆಬಾಳ ಗ್ರಾಮದಲ್ಲಿ 25 ಮಂದಿಗೆ ಆರೋಗ್ಯ ಸಮಸ್ಯೆ ಉಂಟಾಗಿತ್ತು ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
2023ರ ಜುಲೈ ತಿಂಗಳಲ್ಲಿ ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿ ಪ್ರದೇಶದಲ್ಲಿ ಕಲುಷಿತ ನೀರು ಕುಡಿದ ಹಿನ್ನೆಲೆಯಲ್ಲಿ ಆರು ಮಂದಿ ಸಾವಿಗೆ ಗುರಿಯಾಗಿದ್ದರು ಇದೇ ಕಾರಣಕ್ಕೆ 180 ಮಂದಿ ಆಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು ಎಂಬುದಾಗಿ ವರದಿಯಾಗಿತ್ತು. ಈ ಎಲ್ಲ ಘಟನೆಗಳಲ್ಲಿ ಸರ್ಕಾರವು ಮೃತರಿಗೆ ಪರಿಹಾರ ನೀಡಿ ಕೈತೊಳೆದುಕೊಂಡಿದೆ. ಸಂವಿಧಾನದ 21ನೇ ವಿಧಿಯ ಅಡಿ ಶುದ್ದ ಮತ್ತು ಸುರಕ್ಷಿತ ಕುಡಿಯುವ ನೀರು ಪಡೆಯುವುದು ಸಹ ಹಕ್ಕಾಗಿದೆ. ನಾಗರಿಕರು ಶುದ್ದ ಕುಡಿಯುವ ನೀರು ಪಡೆಯುವುದು ಮೂಲಭೂತ ಹಕ್ಕಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.