ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿನ 221 ಗುಂಡಿಗಳನ್ನು ಹತ್ತು ದಿನಗಳ ಒಳಗೆ ಮುಚ್ಚಬೇಕು. ರಾಜಕಾಲುವೆ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಮಹಾಲೇಖಪಾಲರ ವರದಿಯಲ್ಲಿ ಶಿಫಾರಸ್ಸುಗಳನ್ನು ಜಾರಿಗೊಳಿಸಲು ಮೂವರು ಅಧಿಕಾರಿಗಳ ಸಮಿತಿಯನ್ನು ರಚಿಸಬೇಕು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಕರ್ನಾಟಕ ಹೈಕೋರ್ಟ್ ಸೋಮವಾರ ನಿರ್ದೇಶಿಸಿದೆ.
ಬೆಂಗಳೂರು ವ್ಯಾಪ್ತಿಯಲ್ಲಿನ ರಸ್ತೆಗಳ ಗುಂಡಿ ಮುಚ್ಚುವುದಕ್ಕೆ ಸಂಬಂಧಿಸಿದಂತೆ ವಿಜಯನ್ ಮೆನನ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಮನವಿಗಳ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.
2,024 ರಾಜಕಾಲುವೆ ಒತ್ತುವರಿ ತೆರವು: ಬೆಂಗಳೂರು ನಗರದಲ್ಲಿನ ರಾಜಕಾಲುವೆ ನಿರ್ವಹಣೆಗೆ ಸಂಬಂಧಿಸಿದಂತೆ ಮಹಾಲೇಖಪಾಲರು (ಸಿಎಜಿ) ಬಿಬಿಎಂಪಿಗೆ ವರದಿ ಸಲ್ಲಿಸಿದ್ದಾರೆ. ಸಿಎಜಿ ವರದಿಯಲ್ಲಿನ ಶಿಫಾರಸ್ಸುಗಳನ್ನು ಜಾರಿಗೊಳಿಸುವುದಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳ ಸಮಿತಿಯನ್ನು ಬಿಬಿಎಂಪಿ ರಚಿಸಬೇಕು. ಸಿಎಜಿ ವರದಿಯಲ್ಲಿನ ಶಿಫಾರಸ್ಸುಗಳ ಜಾರಿಗೆ ಸಂಬಂಧಿಸಿದಂತೆ ಮೇಲಿಂದ ಮೇಲೆ ಅಧಿಕಾರಿಗಳ ಸಮಿತಿಯು ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಪೀಠ ಆದೇಶ ಮಾಡಿದೆ.
ಬೆಂಗಳೂರಿನಲ್ಲಿ ಒಟ್ಟು 2,626 ಕಡೆ ರಾಜಕಾಲುವೆ ಒತ್ತುವರಿ ಮಾಡಲಾಗಿದ್ದು, 2,024 ರಾಜಕಾಲುವೆ ಒತ್ತುವರಿ ತೆರವು ಮಾಡಲಾಗಿದೆ. ಉಳಿದ 602 ಒತ್ತುವರಿಗಳನ್ನು ಕೆಲ ದಿನಗಳಿಂದ ತೆರವು ಮಾಡಲಾಗುತ್ತಿದೆ ಎಂದು ಬಿಬಿಎಂಪಿ ತಿಳಿಸಿದ್ದು, 602 ಒತ್ತುವರಿಗಳನ್ನು ಬಿಬಿಎಂಪಿ ತೆರವು ಮಾಡಿ, 15 ದಿನಕ್ಕೊಮ್ಮೆ ಈ ಸಂಬಂಧ ಅನುಪಾಲನಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು” ಎಂದೂ ಆದೇಶಿಸಿತು.
ಇನ್ನು ರಸ್ತೆ ಗುಂಡಿಗಳಿಗೆ ಸಂಬಂಧಿಸಿದಂತೆ ಪೀಠವು, “2022ರ ಸೆಪ್ಟೆಂಬರ್ 14ರ ವೇಳೆಗೆ ಒಟ್ಟು 2,010 ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಪ್ರಮುಖ ರಸ್ತೆಗಳಲ್ಲಿರುವ 221 ಗುಂಡಿಗಳನ್ನು ಮುಚ್ಚಬೇಕಿದೆ. ಇವುಗಳನ್ನು ಮುಂದಿನ ಹತ್ತು ದಿನಗಳಲ್ಲಿ ಹಾಟ್ ಮಿಕ್ಸ್ ಬಳಸಿ ಮುಚ್ಚಲಾಗುವುದು ಎಂದು ಬಿಬಿಎಂಪಿ ಪ್ರತಿನಿಧಿಸಿರುವ ವಕೀಲ ವಿ ಶ್ರೀನಿಧಿ ಅವರು ತಿಳಿಸಿದ್ದು, ಈ ಹೇಳಿಕೆಯನ್ನು ದಾಖಲೆಯಲ್ಲಿ ಉಲ್ಲೇಖಿಸಲಾಗಿದೆ. 221 ಗುಂಡಿಗಳನ್ನು ಮುಚ್ಚಿರುವುದಕ್ಕೆ ಸಂಬಂಧಿಸಿದಂತೆ ಅನುಪಾಲನಾ ವರದಿ ಮತ್ತು ಫೋಟೊಗಳನ್ನು ಮುಂದಿನ ವಿಚಾರಣೆಯ ವೇಳೆಗೆ ಬಿಬಿಎಂಪಿ ಸಲ್ಲಿಸಬೇಕು” ಎಂದು ಆದೇಶಿಸಿತು.
“ಬಿಬಿಎಂಪಿಯು ಶಾಸನಬದ್ಧ ಸಂಸ್ಥೆಯಾಗಿದ್ದು, ರಸ್ತೆಗಳನ್ನು ಉತ್ತಮ ಸ್ಥಿತಿಯಲ್ಲಿರುವಂತೆ ನೋಡಿಕೊಳ್ಳುವುದು ಮತ್ತು ಅವುಗಳನ್ನು ನಿರ್ವಹಣೆ ಮಾಡುವ ಜವಾಬ್ದಾರಿ ಹೊಂದಿದೆ. ಗುಂಡಿ ಮುಕ್ತ ರಸ್ತೆ ಹೊಂದುವ ಹಕ್ಕು ನಾಗರಿಕರಿಗೆ ಇದೆ. ಹೀಗಾಗಿ, ಗುಂಡಿ ಮುಕ್ತವಾದ ರಸ್ತೆಗಳನ್ನು ನಿರ್ಮಿಸುವ ಹೊಣೆಗಾರಿಗೆ ಬಿಬಿಎಂಪಿ ಮೇಲಿದೆ” ಎಂದು ಪೀಠ ಆದೇಶದಲ್ಲಿ ಹೇಳಿದೆ.
“ರಸ್ತೆ ಗುಂಡಿಗಳ ಬಗ್ಗೆ ದೂರು ಸಲ್ಲಿಸಲು ಆರಂಭಿಸಲಾಗಿರುವ ಮತ್ತು ರಸ್ತೆ ಗುಂಡಿ ಮುಚ್ಚಿದ ಫೋಟೊಗಳನ್ನು ಅಪ್‌ಲೋಡ್ ಮಾಡುವ ಮೂಲಕ ಕೆಲಸ ಪೂರ್ಣಗೊಳಿಸುವುದನ್ನು ಖಾತರಿಪಡಿಸುವ ದೂರು ಪರಿಹಾರ ವ್ಯವಸ್ಥೆಯ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕು” ಎಂದು ಪೀಠವು ಬಿಬಿಎಂಪಿಗೆ ನಿರ್ದೇಶಿಸಿದೆ.
“ರಸ್ತೆ ಗುಂಡಿ ಮುಚ್ಚುವುದಕ್ಕೆ ಸಂಬಂಧಿಸಿದಂತೆ ಟೆಂಡರ್ ನೀಡಲಾಗಿದೆ. ಸದರಿ ಕೆಲಸವು 2023ರ ಜನವರಿ 31ರ ಒಳಗೆ ಪೂರ್ಣಗೊಳ್ಳಲಿದೆ. ಬಿಬಿಎಂಪಿಯ ಎಂಟು ವಲಯಗಳಲ್ಲಿನ ಒಟ್ಟು 2,500 ಕಿ ಮೀ ರಸ್ತೆಗಳ ಗುಂಡಿ ಮುಚ್ಚುವ ಕೆಲಸವನ್ನು 2023ರ ಮಾರ್ಚ್ 31ರ ಒಳಗೆ ಪೂರ್ಣಗೊಳಿಸಲಾಗುವುದು ಎಂದು ಬಿಬಿಎಂಪಿ ತಿಳಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯು ಅನುಪಾಲನಾ ವರದಿ ಸಲ್ಲಿಬೇಕು” ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.
ಪರ್ಯಾಯ ತನಿಖೆ ನಡೆಸುವಂತಿಲ್ಲ: ಹಾಲಿ ದಾವೆಗೆ ಸಂಬಂಧಿಸಿದಂತೆ ಯಾವುದೇ ಪ್ರಾಧಿಕಾರವು ಪರ್ಯಾಯ ತನಿಖೆ ಅಥವಾ ಆದೇಶ ಮಾಡುವಂತಿಲ್ಲ. ನ್ಯಾಯಾಲಯ ಮಾಡಿರುವ ಆದೇಶವು ಎಲ್ಲಾ ಪ್ರಾಧಿಕಾರಿಗಳಿಗೂ ಅನ್ವಯಿಸುತ್ತದೆ ಎಂದು ಬಿಡಿಸಿ ಹೇಳಬೇಕಿಲ್ಲ. ನ್ಯಾಯಾಲಯದ ನಿರ್ದೇಶನಗಳ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.