ಆರ್‌ಟಿಐ ಅಡಿ ಮಾಹಿತಿ ನಿರಾಕರಣೆ: ಕಸಾಪ ಅಧ್ಯಕ್ಷ ಮಹೇಶ್‌ ಜೋಶಿಗೆ ದಂಡ ಆದೇಶಕ್ಕೆ ಹೈಕೋರ್ಟ್‌ ತಡೆ

ಕೆಲ ಕಾಲ ವಾದ ಆಲಿಸಿದ ಪೀಠವು ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ, ಏಕಸದಸ್ಯ ಪೀಠದ ಆದೇಶಕ್ಕೆ ಮುಂದಿನ ಆದೇಶದವರೆಗೆ ತಡೆ ನೀಡಿ ವಿಚಾರಣೆ ಮುಂದೂಡಿತು.
Mahesh Joshi and Karnataka HC
Mahesh Joshi and Karnataka HC
Published on

ಚಂದನ ದೂರದರ್ಶನದ ಮುಖ್ಯಸ್ಥರಾಗಿದ್ದ ವೇಳೆ ಮಾಹಿತಿ ಹಕ್ಕು ಕಾಯಿದೆ (ಆರ್‌ಟಿಐ) ಅಡಿ ಮಾಹಿತಿ ನೀಡಲು ನಿರಾಕರಿಸಿದ್ದ ಹಳೆಯ ಪ್ರಕರಣದಲ್ಲಿ ಕರ್ನಾಟಕ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ. ಮಹೇಶ್ ಜೋಶಿ ಅವರಿಗೆ 25 ಸಾವಿರ ರೂಪಾಯಿ ದಂಡ ವಿಧಿಸಿದ್ದ ಏಕಸದಸ್ಯ ಪೀಠದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠ ಈಚೆಗೆ ತಡೆ ನೀಡಿದೆ.

ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮಹೇಶ್ ಜೋಶಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಎಚ್ ಟಿ ನರೇಂದ್ರ ಪ್ರಸಾದ್ ಮತ್ತು ಎಸ್ ರಾಚಯ್ಯ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು.

ಕೆಲ ಕಾಲ ವಾದ ಆಲಿಸಿದ ಪೀಠವು ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ, ಏಕಸದಸ್ಯ ಪೀಠದ ಆದೇಶಕ್ಕೆ ಮುಂದಿನ ಆದೇಶದವರೆಗೆ ತಡೆ ನೀಡಿ ವಿಚಾರಣೆ ಮುಂದೂಡಿತು.

Also Read
ಆದೇಶ ಪಾಲಿಸಲು ವಿಫಲ; ಮಹೇಶ್​ ಜೋಶಿಗೆ ಒಟ್ಟು ರೂ. 50 ಸಾವಿರ ದಂಡ ವಿಧಿಸಿದ ಹೈಕೋರ್ಟ್‌

ಪ್ರಕರಣದ ಹಿನ್ನೆಲೆ: ಎಸ್‌ ಭಜಂತ್ರಿ ಎಂಬುವರು ಮಾಹಿತಿ ಹಕ್ಕಿನಡಿ ಕೋರಿದ್ದ ಮಾಹಿತಿಯನ್ನು ನೀಡಲು ದೂರದರ್ಶನದ ಸಾರ್ವಜನಿಕ ಮಾಹಿತಿ ಅಧಿಕಾರಿಯಾಗಿ (ಪಿಐಒ) ಮಹೇಶ್ ಜೋಶಿ ಅವರು ನಿರಾಕರಿಸಿದ್ದರು. ಹೀಗಾಗಿ, ಅವರು ಎರಡನೇ ಮೇಲ್ಮನವಿ ಪ್ರಾಧಿಕಾರದ ಮೊರೆ ಹೋಗಿದ್ದರು. ಆ ಪ್ರಾಧಿಕಾರವು ಅರ್ಜಿದಾರರಿಗೆ ಮಾಹಿತಿ ನೀಡುವಂತೆ ಆದೇಶಿಸಿತ್ತು. ಅದರೆ ಮೇಲ್ಮನವಿ ಪ್ರಾಧಿಕಾರದ ಆದೇಶವನ್ನು ಪ್ರಶ್ನಿಸಿ ಜೋಷಿ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠವು ಮಾಹಿತಿ ಹಕ್ಕು ಕಾಯಿದೆ ಅಡಿ ಪಿಐಒಗೆ ಮೇಲ್ಮನವಿ ಸಲ್ಲಿಸುವ ಅಧಿಕಾರವಿಲ್ಲಎಂದು ಆದೇಶಿಸಿತ್ತಲ್ಲದೇ ಅರ್ಜಿ ವಜಾಗೊಳಿಸಿ 25 ಸಾವಿರ ರೂಪಾಯಿ ದಂಡ ವಿಧಿಸಿತ್ತು.

Kannada Bar & Bench
kannada.barandbench.com