ಆಯುಷ್ ವೈದ್ಯಾಧಿಕಾರಿಗಳ ಸೇವೆ ಖಾಯಂಗೊಳಿಸಲು ನಿರಾಕರಣೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌ ಜಾರಿ

ಸೇವೆ ಖಾಯಂಗೊಳಿಸುವಂತೆ ಆಯುಷ್ ವೈದ್ಯಾಧಿಕಾರಿಗಳು ನೀಡಿದ್ದ ಮನವಿಯನ್ನು ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕರು ತಿರಸ್ಕರಿಸಿ 2026ರ ಮೇ 15ರಂದು ಹಿಂಬರಹ ನೀಡಿದ್ದಾರೆ. ಇದು ಕಾನೂನುಬಾಹಿರ ಎಂದು ವಾದಿಸಿರುವ ಅರ್ಜಿದಾರರು.
Karnataka High Court
Karnataka High Court
Published on

ಸರ್ಕಾರಿ ಆಸ್ಪತ್ರೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಳೆದ ಎರಡು ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಆಯುಷ್ ವೈದ್ಯಾಧಿಕಾರಿಗಳ ಸೇವೆ ಖಾಯಂಗೊಳಿಸಲು ನಿರಾಕರಿಸಿದ ಸರ್ಕಾರದ ಕ್ರಮ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಮತ್ತೊಂದು ಅರ್ಜಿ ಸಲ್ಲಿಕೆಯಾಗಿದೆ.

ತುಮಕೂರು ಜಿಲ್ಲೆ ತುರುವೇಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಆಯುಷ್ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಡಾ. ಮಧುಕರ್ ಸೇರಿ ರಾಜ್ಯದ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರು ಆಯುಷ್ ವೈದ್ಯಾಧಿಕಾರಿಗಳು ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರ ಏಕಸದಸ್ಯ ಪೀಠ ಸೋಮವಾರ ವಿಚಾರಣೆಗೆ ಬಂದಿತ್ತು.

ಕೆಲ ಕಾಲ ಅರ್ಜಿ ಆಲಿಸಿದ ಪೀಠವು ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯ, ರಾಜ್ಯ ಸರ್ಕಾರದ ಆರೋಗ್ಯ ಇಲಾಖೆ, ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕರು, ಆಯುಷ್ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

ಅರ್ಜಿದಾರರು ಕಳೆದ 20 ವರ್ಷಗಳಿಂದ ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿ ಗುತ್ತಿಗೆ ಆಧಾರದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಆಯುಷ್ ವೈದ್ಯಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸೇವೆ ಖಾಯಂಗೊಳಿಸುವಂತೆ ಆಯುಷ್ ವೈದ್ಯಾಧಿಕಾರಿಗಳು ನೀಡಿದ್ದ ಮನವಿಯನ್ನು ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕರು ತಿರಸ್ಕರಿಸಿ 2026ರ ಮೇ 15ರಂದು ಹಿಂಬರಹ ನೀಡಿದ್ದಾರೆ. ಇದು ಕಾನೂನು ಬಾಹಿರವಾಗಿದ್ದು, ಹಿಂಬರಹ ರದ್ದುಪಡಿಸಬೇಕು ಹಾಗೂ ಆಯುಷ್ ವೈದ್ಯಾಧಿಕಾರಿಗಳ ಸೇವೆ ಖಾಯಂಗೊಳಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Kannada Bar & Bench
kannada.barandbench.com