ಪಶು ಚಿಕಿತ್ಸಾಲಯಗಳ ಸ್ಥಳಾಂತರ: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್

ಕೇಂದ್ರ ಸರ್ಕಾರ ಹಾಗೂ ರಾಜ್ಯ ಪಶುಸಂಗೋಪನಾ ಇಲಾಖೆಯ ಆಯುಕ್ತರು ಮತ್ತು ನಿರ್ದೇಶಕರಿಗೆ ನೋಟಿಸ್​ ಜಾರಿ ಮಾಡಿ ಪೀಠವು ವಿಚಾರಣೆ ಮುಂದೂಡಿತು.
Karnataka High Court
Karnataka High Court

ಬೆಂಗಳೂರು ನಗರ ಜಿಲ್ಲೆಯ ವಿವಿಧೆಡೆ 28 ಪಶುವೈದ್ಯ ಕೇಂದ್ರ ಸ್ಥಳಾಂತರ ಮಾಡುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ಕರ್ನಾಟಕ ಹೈಕೋರ್ಟ್ ಬುಧವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಅನಿಮಲ್‌ ರೈಟ್ಸ್‌ ಫಂಡ್‌ ಹಾಗೂ ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಆರ್ ವಿಶ್ವನಾಥ್ ಸೇರಿದಂತೆ ಮತ್ತಿತರರು ಪ್ರತ್ಯೇಕವಾಗಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್​. ದೀಕ್ಷಿತ್​ ಅವರಿದ್ದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.

ಕೇಂದ್ರ ಸರ್ಕಾರ ಹಾಗೂ ರಾಜ್ಯ ಪಶುಸಂಗೋಪನಾ ಇಲಾಖೆಯ ಆಯುಕ್ತರು ಮತ್ತು ನಿರ್ದೇಶಕರಿಗೆ ನೋಟಿಸ್​ ಜಾರಿ ಮಾಡಿ ಪೀಠವು ವಿಚಾರಣೆ ಮುಂದೂಡಿತು.

ಅರ್ಜಿದಾರರ ಪರವಾಗಿ ವಾದಿಸಿದ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌ ಅವರು “ಬೆಂಗಳೂರು ನಗರ ಜಿಲ್ಲೆಯ ಆನೇಕಲ್​, ಬೆಂಗಳೂರು ಈಶಾನ್ಯ, ಬೆಂಗಳೂರು ಉತ್ತರ ಮತ್ತು ಬೆಂಗಳೂರು ದಕ್ಷಿಣ ತಾಲ್ಲೂಕುಗಳಲ್ಲಿ ಸುಮಾರು 13 ಲಕ್ಷಕ್ಕೂ ಹೆಚ್ಚು ವಿವಿಧ ಜಾತಿಗೆ ಸೇರಿದ ಸಾಕು ಪ್ರಾಣಿಗಳಿವೆ. ಯಲಹಂಕ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಸಾವಿರಾರು ಪಶುಗಳಿವೆ. ಈ ನಡುವೆ 1,300ಕ್ಕಿಂತಲೂ ಕಡಿಮೆ ಜಾನುವಾರು ಇರುವ ವ್ಯಾಪ್ತಿಯ ಪಶು ಆಸ್ಪತ್ರೆಗಳನ್ನು ಸ್ಥಳಾಂತರಿಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಅಸಂಬದ್ಧವಾಗಿದೆ” ಎಂದು ಆಕ್ಷೇಪಿಸಿದರು.

“ರಾಜ್ಯ ಸರ್ಕಾರ 2023ರ ಡಿಸೆಂಬರ್​ 15ರಂದು ಗಂಟಿಗಾನಹಳ್ಳಿ, ಲಿಂಗನಹಳ್ಳಿ ಹನಿಯೂರು ಮತ್ತು ಮಾದಪ್ಪನಹಳ್ಳಿಯಲ್ಲಿ ಪಶು ಚಿಕಿತ್ಸಾಲಯವನ್ನು ಸ್ಥಳಾಂತರ ಮಾಡುವುದಕ್ಕೆ ನಿರ್ಧರಿಸಿದೆ. ಇದರಿಂದಾಗಿ ಈ ಭಾಗದ ರೈತರು ಹಾಗೂ ಪ್ರಾಣಿ ಸಾಕಾಣಿಕೆದಾರರಿಗೆ ತೀವ್ರ ತೊಂದರೆಯಾಗಿದೆ. ಆದ್ದರಿಂದ ಸರ್ಕಾರದ ಸ್ಥಳಾಂತರ ನಿರ್ಧಾರ ಹಿಂಪಡೆಯಲು ನಿರ್ದೇಶನ ನೀಡಬೇಕು” ಎಂದು ಕೋರಿದರು.

ರಾಜ್ಯ ಸರ್ಕಾರವು 2022-23ನೇ ಸಾಲಿನಲ್ಲಿ 100 ಪಶು ವೈದ್ಯಕೀಯ ಕೇಂದ್ರಗಳ ಪ್ರಾರಂಭಕ್ಕೆ ನಿರ್ಧರಿಸಿದ್ದು, 2022ರ ಮೇ 17ರಂದು ಆದೇಶ ಹೊರಡಿಸಿದೆ. ಮೊದಲ ಹಂತದ ಭಾಗವಾಗಿ 20 ಪಶು ವೈದ್ಯಕೀಯ ಕೇಂದ್ರಗಳನ್ನು ಪ್ರಾರಂಭಿಸಿದೆ. ಈ ಆದೇಶ ಜಾರಿ ಮಾಡುವುದಕ್ಕೂ ಮುನ್ನ ಪಶು ವೈದ್ಯಕೀಯ ಆಸ್ಪತ್ರೆ ಸ್ಥಳಾಂತರಕ್ಕೆ ಮುಂದಾಗಿರುವ ನಿರ್ಧಾರದಿಂದ ಸ್ಥಳೀಯ ರೈತರು ತಮ್ಮ ಪಶುಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸುವ ಸ್ಥಿತಿ ಬಂದೊದಗಲಿದೆ. ಈ ಕಾರಣಕ್ಕಾಗಿ ಪಶು ಚಿಕಿತ್ಸಾಲಯ ಸ್ಥಳಾಂತರ ಆದೇಶ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ.

Kannada Bar & Bench
kannada.barandbench.com