ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಪವಿತ್ರಾಗೌಡ ಅವರು ಕರ್ನಾಟಕ ಹೈಕೋರ್ಟ್‌ಗೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ಹಿಂಪಡೆದಿದ್ದಾರೆ.
ಪವಿತ್ರಾಗೌಡ ಸಲ್ಲಿಸಿದ್ದ ಜಾಮೀನು ಅರ್ಜಿ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠದ ಮುಂದೆ ವಿಚಾರಣೆ ಬಂದಿತ್ತು.
ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನ ಕುಮಾರ್ ಅವರ “ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 4 ಸಾವಿರ ಪುಟಗಳ ಆರೋಪ ಪಟ್ಟಿಯನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಆದ್ದರಿಂದ, ಆರೋಪಿ ಪವಿತ್ರಾಗೌಡ ವಿಚಾರಣಾ ನ್ಯಾಯಾಲಯದಲ್ಲೇ ಜಾಮೀನು ಅರ್ಜಿ ಸಲ್ಲಿಸಬಹುದು. ಈಗಾಗಲೇ ಪ್ರಕರಣದ 7ನೇ ಆರೋಪಿ ಅನುಕುಮಾರ್ ಸಹ ಆರೋಪ ಪಟ್ಟಿ ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ಜಾಮೀನು ಅರ್ಜಿ ಹಿಂಪಡೆದಿದ್ದಾರೆ” ಎಂದು ಪೀಠಕ್ಕೆ ವಿವರಿಸಿದರು.
ಆಗ ಪೀಠವು ಆರೋಪ ಪಟ್ಟಿ ಸಲ್ಲಿಕೆಯಾಗಿರುವ ಸತ್ರ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಬಹುದು ಎಂದು ಅರ್ಜಿದಾರೆ ಪರ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ಅವರಿಗೆ ತಿಳಿಸಿದರು. ಈ ಹಿನ್ನೆಲೆಯಲ್ಲಿ ಪವಿತ್ರಾ ಗೌಡ ಪರ ವಕೀಲರು ಜಾಮೀನು ಅರ್ಜಿ ಹಿಂಪಡೆದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮೊದಲ ಆರೋಪಿ ಪವಿತ್ರಾಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಜೈಶಂಕರ್ ಅವರು ಆಗಸ್ಟ್ 31ರಂದು ವಜಾಗೊಳಿಸಿದ್ದರು.
ನ್ಯಾಯಾಂಗ ಬಂಧನ ವಿಸ್ತರಣೆ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ನಿಗದಿಪಡಿಸಲು ಡಿಜಿಟಲ್ ಸಾಕ್ಷ್ಯವನ್ನು ಮಂಗಳವಾರ ಸಲ್ಲಿಸಲಾಗುವುದು ಎಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಪ್ರಾಸಿಕ್ಯೂಷನ್ ತಿಳಿಸಿತು.
ಈ ಹಿನ್ನೆಲೆಯಲ್ಲಿ ಮ್ಯಾಜಿಸ್ಟ್ರೇಟ್ ಎಸ್ ನಿರ್ಮಲಾ ಅವರು ಸೆಪ್ಟೆಂಬರ್ 17ಕ್ಕೆ ಆರೋಪ ನಿಗದಿ ಮಾಡಲಾಗುವುದು. ಅಂತೆಯೇ ಅಲ್ಲಿಯವರೆಗೆ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ ಎಂದು ಆದೇಶಿಸಿದರು.