ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಸೇರಿ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರಿನ ಪರಪ್ಪನ ಅಗ್ರಹಾರ ಮತ್ತು ತುಮಕೂರಿನ ಜಿಲ್ಲಾ ಕಾರಾಗೃಹದಲ್ಲಿರುವ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕ 24ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಅವರ ಮುಂದೆ ಹಾಜರುಪಡಿಸಲಾಯಿತು.
Darshan and Pavitra Gowda
Darshan and Pavitra Gowda
Published on

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್‌ ಹಾಗೂ ಅವರ ಗೆಳತಿ ಪವಿತ್ರಗೌಡ ಸೇರಿ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಆಗಸ್ಟ್‌ 28ರವರೆಗೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಬುಧವಾರ ವಿಸ್ತರಿಸಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಮತ್ತು ತುಮಕೂರಿನ ಜಿಲ್ಲಾ ಕಾರಾಗೃಹದಲ್ಲಿರುವ ಆರೋಪಿಗಳನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ 24ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ವಿಶ್ವನಾಥ್‌ ಸಿ. ಗೌಡರ್‌ ಅವರ ಮುಂದೆ ಹಾಜರುಪಡಿಸಲಾಯಿತು.

ಪ್ರಕರಣದ ಕುರಿತು ಮಾಹಿತಿ ಪಡೆದ ಮ್ಯಾಜಿಸ್ಟ್ರೇಟ್‌ ಅವರು ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನವನ್ನು 14 ದಿನ ಮತ್ತೆ ವಿಸ್ತರಿಸಿದರು.

Also Read
ದರ್ಶನ್‌ ಮನೆಯೂಟದ ಕೋರಿಕೆ: ಕೈದಿಗಳಲ್ಲಿ ಭೇದವೇಕೆ ಎಂದ ಹೈಕೋರ್ಟ್‌

ಪ್ರಕರಣದ ಹಿನ್ನೆಲೆ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪವಿತ್ರ ಗೌಡ, ದರ್ಶನ್‌ ಅಲಿಯಾಸ್‌ ಡಿ ಬಾಸ್‌, ಪುಟ್ಟಸ್ವಾಮಿ ಅಲಿಯಾಸ್‌ ಪವನ್‌, ರಾಘವೇಂದ್ರ, ನಂದೀಶ್‌, ಜಗದೀಶ್‌ ಅಲಿಯಾಸ್‌ ಜಗ್ಗ, ಅನುಕುಮಾರ್‌, ರವಿ ಶಂಕರ್‌ ಅಲಿಯಾಸ್‌ ರವಿ, ಧನರಾಜ್‌ ಡಿ ಅಲಿಯಾಸ್‌ ರಾಜು, ವಿನಯ್‌ ವಿ, ನಾಗರಾಜು, ಲಕ್ಷ್ಮಣ, ದೀಪಕ್‌, ಪ್ರದೂಷ್‌, ಕಾರ್ತಿಕ್‌ ಅಲಿಯಾಸ್‌ ಕಪ್ಪೆ, ಕೇಶವಮೂರ್ತಿ, ನಿಖಿಲ್‌ ನಾಯಕ್‌ ಆರೋಪಿಗಳಾಗಿದ್ದು, ಐಪಿಸಿ ಸೆಕ್ಷನ್‌ಗಳಾದ 302 (ಕೊಲೆ), 201 (ಸಾಕ್ಷ್ಯ ನಾಶ), 120 (ಬಿ) (ಕ್ರಿಮಿನಲ್‌ ಪಿತೂರಿ), 364 (ಅಪಹರಣ), 355 (ಕ್ರಿಮಿನಲ್‌ ಉದ್ದೇಶದಿಂದ), 384 (ಸುಲಿಗೆ), 143 (ಅಕ್ರಮ ಕೂಟ), 147 (ದೊಂಬಿ), 148 (ಮಾರಕಾಸ್ಟ್ರ ಬಳಕೆ) ಜೊತೆಗೆ 149 (ಏಕೈಕ ಉದ್ದೇಶದಿಂದ ಎಲ್ಲರೂ ಒಟ್ಟುಗೂಡಿ ಕೃತ್ಯ ಎಸಗಿರುವುದು) ಅಡಿ ಪ್ರಕರಣ ದಾಖಲಿಸಲಾಗಿದೆ.  

Kannada Bar & Bench
kannada.barandbench.com