ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನಟ ದರ್ಶನ್ ಮತ್ತು ಅವರ ಗೆಳತಿ ಪವಿತ್ರಾ ಗೌಡ ಸಲ್ಲಿಸಿರುವ ಜಾಮೀನು ಅರ್ಜಿ ಸಂಬಂಧ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಪವಿತ್ರಾ ಗೌಡ ಅರ್ಜಿಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 19ರಂದು, ದರ್ಶನ್ ಅರ್ಜಿ ಸಂಬಂಧ ಶನಿವಾರ ವಿಶೇಷ ಸರ್ಕಾರಿ ಅಭಿಯೋಜಕರಿಗೆ (ಎಸ್‌ಪಿಪಿ) 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶ ಜೈಶಂಕರ್ ನೋಟಿಸ್ ಜಾರಿ ಮಾಡಿದರು.
ಆಕ್ಷೇಪಣೆ ಸಲ್ಲಿಸಲು ಎಸ್ ಪಿಪಿ ಪಿ ಪ್ರಸನ್ನ ಕುಮಾರ್ ಅವರು ಸಮಯಾವಕಾಶ ಕೇಳಿದ್ದು, ವಿಚಾರಣೆಯನ್ನು ಸೆಪ್ಟೆಂಬರ್ 23ಕ್ಕೆ ಮುಂದೂಡಲಾಗಿದೆ.
ಪವಿತ್ರಾ ಗೌಡ ಅವರನ್ನು ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ಪ್ರತಿನಿಧಿಸಿದ್ದು, ದರ್ಶನ್ ಪರವಾಗಿ ವಕೀಲ ಎಸ್ ಸುನಿಲ್ ಕುಮಾರ್ ವಕಾಲತ್ತು ಹಾಕಿದ್ದಾರೆ.
ಈಚೆಗೆ ವಿಚಾರಣಾ ನ್ಯಾಯಾಲಯ ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ತಿರಸ್ಕರಿಸಿತ್ತುಈ ಹಿನ್ನೆಲೆಯಲ್ಲಿ ಪವಿತ್ರಾ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ವೇಳೆ ಪ್ರಾಸಿಕ್ಯೂಷನ್ ಆರೋಪ ಪಟ್ಟಿ ಸಲ್ಲಿಸಿದ್ದರಿಂದ ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಕೋರುವುದಾಗಿ ಪವಿತ್ರಾ ಹೈಕೋರ್ಟ್‌ಗೆ ತಿಳಿಸಿ ಜಾಮೀನು ಅರ್ಜಿ ಹಿಂಪಡೆದಿದ್ದರು.
ದರ್ಶನ್ ಇದೇ ಮೊದಲ ಬಾರಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ವಿಶೇಷ ಆತಿಥ್ಯ ಪಡೆದ ಆರೋಪದ ಸಂಬಂಧ ದರ್ಶನ್ ರನ್ನು ಪ್ರಸ್ತುತ ಬಳ್ಳಾರಿ ಜಿಲ್ಲೆಯಲ್ಲಿ ಇಡಲಾಗಿದೆ.
ಇದೇ ಪ್ರಕರಣದಲ್ಲಿ 15ನೇ ಆರೋಪಿಯಾಗಿರುವ ಕಾರ್ತಿಕ್ ಅಲಿಯಾಸ್ ಕಪ್ಪೆ ಮತ್ತು 17ನೇ ಆರೋಪಿ ನಿಖಿಲ್ ನಾಯಕ್ ಸಲ್ಲಿಸಿರುವ ಜಾಮೀನು ಅರ್ಜಿಗಳಿಗೆ ಸಂಬಂಧಿಸಿದ ಆದೇಶವನ್ನು ನ್ಯಾಯಾಲಯ ಸೆಪ್ಟೆಂಬರ್ 23ರಂದು ಪ್ರಕಟಿಸಲಿದೆ.
ಪ್ರಕರಣದ ಹಿನ್ನೆಲೆ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪವಿತ್ರ ಗೌಡ, ದರ್ಶನ್ ಅಲಿಯಾಸ್ ಡಿ ಬಾಸ್, ಪುಟ್ಟಸ್ವಾಮಿ ಅಲಿಯಾಸ್ ಪವನ್, ರಾಘವೇಂದ್ರ, ನಂದೀಶ್, ಜಗದೀಶ್ ಅಲಿಯಾಸ್ ಜಗ್ಗ, ಅನುಕುಮಾರ್, ರವಿ ಶಂಕರ್ ಅಲಿಯಾಸ್ ರವಿ, ಧನರಾಜ್ ಡಿ ಅಲಿಯಾಸ್ ರಾಜು, ವಿನಯ್ ವಿ, ನಾಗರಾಜು, ಲಕ್ಷ್ಮಣ, ದೀಪಕ್, ಪ್ರದೂಷ್, ಕಾರ್ತಿಕ್ ಅಲಿಯಾಸ್ ಕಪ್ಪೆ, ಕೇಶವಮೂರ್ತಿ, ನಿಖಿಲ್ ನಾಯಕ್ ಆರೋಪಿಗಳಾಗಿದ್ದು, ಐಪಿಸಿ ಸೆಕ್ಷನ್‌ಗಳಾದ 302 (ಕೊಲೆ), 201 (ಸಾಕ್ಷ್ಯ ನಾಶ), 120 (ಬಿ) (ಕ್ರಿಮಿನಲ್ ಪಿತೂರಿ), 364 (ಅಪಹರಣ), 355 (ಕ್ರಿಮಿನಲ್ ಉದ್ದೇಶ), 384 (ಸುಲಿಗೆ), 143 (ಅಕ್ರಮ ಕೂಟ), 147 (ದೊಂಬಿ), 148 (ಮಾರಕಾಸ್ತ್ರ ಬಳಕೆ) ಜೊತೆಗೆ 149 (ಏಕೋದ್ದೇಶದಿಂದ ಎಲ್ಲರೂ ಒಟ್ಟುಗೂಡಿ ಕೃತ್ಯ ಎಸಗಿರುವುದು) ಅಡಿ ಪ್ರಕರಣ ದಾಖಲಿಸಲಾಗಿತ್ತು.