ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿನ ಪ್ರಮುಖ ಆರೋಪಿ ನಟ ದರ್ಶನ್ ಸೇರಿ ನಾಲ್ಕು ಮಂದಿಯನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಗುರುವಾರ 12 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಜೂನ್ 20ರಂದು ಉಳಿದ 13 ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು.
ಆರೋಪಿಗಳಾದ ದರ್ಶನ್, ವಿನಯ್, ಪ್ರದೂಷ್, ಧನರಾಜ್ ಕಸ್ಟಡಿ ಅವಧಿ ಇಂದು ಮುಗಿದ ಹಿನ್ನೆಲೆಯಲ್ಲಿ ಕಾಮಾಕ್ಷಿ ಪಾಳ್ಯ ಪೊಲೀಸರು ಬೆಂಗಳೂರಿನ 24ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ವಿಶ್ವನಾಥ್ ಚನ್ನಬಸಪ್ಪ ಗೌಡರ್ ಮುಂದೆ ಆರೋಪಿಗಳನ್ನು ಹಾಜರುಪಡಿಸಿದರು.
ವಿಚಾರಣೆಯಲ್ಲಿ ಭಾಗಿಯಾದ ವಿಶೇಷ ಸರ್ಕಾರಿ ಅಭಿಯೋಜಕರಾದ ಪಿ ಪ್ರಸನ್ನ ಕುಮಾರ್ ಅವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಬಹುದು ಎಂದರು.
ಇದನ್ನು ಆಲಿಸಿದ ಪೀಠವು ನಾಲ್ವರು ಆರೋಪಿಗಳನ್ನು ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದ್ದು, ಅವರನ್ನು ಪರಪ್ಪನ ಅಗ್ರಹಾರದಲ್ಲಿನ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗುತ್ತದೆ.
ಈ ನಡುವೆ, ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿರುವ ದರ್ಶನ್ ಅಭಿಮಾನಿಗಳಾದ ಕೆಲವು ಆರೋಪಿಗಳ ರೇಣುಕಾಸ್ವಾಮಿ ಕೊಲೆ ಪ್ರಕರಣದ ಇತರೆ ಆರೋಪಿಗಳ ಮೇಲೆ ಹಲ್ಲೆ ನಡೆಸುವ ಸಾಧ್ಯತೆ ಇರುವುದರಿಂದ ಅವರನ್ನು ತುಮಕೂರು ಜಿಲ್ಲಾ ಕಾರಾಗೃಹಕ್ಕೆ ವರ್ಗಾಯಿಸಬೇಕು ಎಂದು ಪ್ರಾಸಿಕ್ಯೂಷನ್ ಕೋರಿತು. ಇದಕ್ಕೆ ಆರೋಪಿ ಪರ ವಕೀಲರು ಆಕ್ಷೇಪಿಸಿದರು. ಈ ಸಂಬಂಧ ಸೋಮವಾರ ವಿಚಾರಣೆ ನಡೆಸಲಾಗುವುದು ಎಂದ ನ್ಯಾಯಾಲಯ ಹೇಳಿ, ವಿಚಾರಣೆ ಮುಂದೂಡಿತು.
ದರ್ಶನ್ ಸೇರಿ ನಾಲ್ವರು ಆರೋಪಿಗಳು ಒಟ್ಟಾರೆ 12 ದಿನ ಪೊಲೀಸ್ ಕಸ್ಟಡಿಯಲ್ಲಿದ್ದರು. ದರ್ಶನ್ ಸೇರಿದಂತೆ ಹಲವರನ್ನು ಮೊದಲಿಗೆ ಆರು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. 6ನೇ ದಿನ ಭಾನುವಾರವಾಗಿದ ಹಿನ್ನೆಲೆಯಲ್ಲಿ ಶನಿವಾರವೇ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಪೊಲೀಸರು ಜೂನ್ 20ರವರೆಗೆ ಕಸ್ಟಡಿಗೆ ಪಡೆದಿದ್ದರು. ಆನಂತರ ಮತ್ತೆ ಜೂನ್ 22ರವರೆಗೆ ಕಸ್ಟಡಿಗೆ ಪಡೆಯಲಾಗಿತ್ತು.
ಪ್ರಕರಣದ ಹಿನ್ನೆಲೆ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪವಿತ್ರಾ ಗೌಡ, ದರ್ಶನ್ ಅಲಿಯಾಸ್ ಡಿ ಬಾಸ್, ಪುಟ್ಟಸ್ವಾಮಿ ಅಲಿಯಾಸ್ ಪವನ್, ರಾಘವೇಂದ್ರ, ನಂದೀಶ್, ಜಗದೀಶ್ ಅಲಿಯಾಸ್ ಜಗ್ಗ, ಅನುಕುಮಾರ್, ರವಿ ಶಂಕರ್ ಅಲಿಯಾಸ್ ರವಿ, ಧನರಾಜ್ ಡಿ ಅಲಿಯಾಸ್ ರಾಜು, ವಿನಯ್ ವಿ, ನಾಗರಾಜು, ಲಕ್ಷ್ಮಣ, ದೀಪಕ್, ಪ್ರದೂಷ್, ಕಾರ್ತಿಕ್ ಅಲಿಯಾಸ್ ಕಪ್ಪೆ, ಕೇಶವಮೂರ್ತಿ, ನಿಖಿಲ್ ನಾಯಕ್ ಆರೋಪಿಗಳಾಗಿದ್ದು, ಐಪಿಸಿ ಸೆಕ್ಷನ್‌ಗಳಾದ 302 (ಕೊಲೆ), 201 (ಸಾಕ್ಷ್ಯ ನಾಶ), 120 (ಬಿ) (ಕ್ರಿಮಿನಲ್ ಪಿತೂರಿ), 364 (ಅಪಹರಣ), 355 (ಕ್ರಿಮಿನಲ್ ಉದ್ದೇಶದಿಂದ), 384 (ಸುಲಿಗೆ), 143 (ಅಕ್ರಮ ಕೂಟ), 147 (ದೊಂಬಿ), 148 (ಮಾರಕಾಸ್ಟ್ರ ಬಳಕೆ) ಜೊತೆಗೆ 149 (ಏಕೈಕ ಉದ್ದೇಶದಿಂದ ಎಲ್ಲರೂ ಒಟ್ಟುಗೂಡಿ ಕೃತ್ಯ ಎಸಗಿರುವುದು) ಅಡಿ ಪ್ರಕರಣ ದಾಖಲಿಸಲಾಗಿದೆ.