ಶಿಕ್ಷಣ ಸಂಸ್ಥೆಗಳಲ್ಲಿ ಆಂತರಿಕ ದೂರು ಸಮಿತಿ ಕಡ್ಡಾಯವಾಗಿ ರಚಿಸಲು ನಿರ್ದೇಶನ ಕೋರಿಕೆ: ಪಿಐಎಲ್‌ ಇತ್ಯರ್ಥ

ಅರ್ಜಿದಾರರ ವಾದ ಆಲಿಸಿದ ನ್ಯಾಯಾಲಯವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದಿಷ್ಟ ಅವಧಿಯಲ್ಲಿ ಉತ್ತರ ನೀಡುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿರುವ ಹಿನ್ನೆಲೆಯಲ್ಲಿ ಅರ್ಜಿಯನ್ನು ಪುರಸ್ಕರಿಸಲು ಯಾವುದೇ ಕಾರಣಗಳು ಇಲ್ಲ ಎಂದಿದೆ.
Chief Justice P B Varale and Justice M G S Kamal
Chief Justice P B Varale and Justice M G S Kamal
Published on

ಉದ್ಯೋಗ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಪ್ರಕರಣಗಳನ್ನು ತಡೆಯುವ ಹಿನ್ನೆಲೆ ಸಲುವಾಗಿ ರಾಜ್ಯ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಆಂತರಿಕ ದೂರು ಸಮಿತಿಗಳನ್ನು ಕಡ್ಡಾಯವಾಗಿ ರಚಿಸುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಿಲೇವಾರಿ ಮಾಡಿದೆ.

ಕ್ರೀಟಂಸ್ ಪ್ರೊ ಬೋನೋ ಮತ್ತು ಸೆಂಟರ್ ಫಾರ್ ಲೀಗಲ್ ರೀಸರ್ಚ್ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ಮತ್ತು ನ್ಯಾಯಮೂರ್ತಿ ಎಂ ಜಿ ಎಸ್ ಕಮಲ್ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.

ಅರ್ಜಿದಾರರ ವಾದ ಆಲಿಸಿದ ನ್ಯಾಯಾಲಯವು ಇಂತಹದ್ದೇ ಪ್ರಕರಣದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದಿಷ್ಟ ಅವಧಿಯಲ್ಲಿ ಉತ್ತರ ನೀಡುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿರುವ ಹಿನ್ನೆಲೆಯಲ್ಲಿ ಅರ್ಜಿಯನ್ನು ಪುರಸ್ಕರಿಸಲು ಯಾವುದೇ ಕಾರಣಗಳು ಇಲ್ಲ ಎಂದು ಹೇಳಿದೆ.

ಅಲ್ಲದೇ, ಈ ಸಂಬಂಧ ಈಗಾಗಲೇ ಸುಪ್ರೀಂ ಕೋರ್ಟ್ ತಾನು ನೀಡಿರುವ ನಿರ್ದೇಶನದ ಪಾಲನೆಗೆ ಸಂಬಂಧಿಸಿದಂತೆ ಎಂಟು ವಾರದಲ್ಲಿ ಅನುಪಾಲನಾ ವರದಿಯನ್ನು ಸಲ್ಲಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶಿಸಿದೆ. ಹೀಗಾಗಿ, ಇಲ್ಲಿ ಅರ್ಜಿಯನ್ನು ಮಾನ್ಯ ಮಾಡಲಾಗದು ಎಂದು ಪಿಐಎಲ್ ಇತ್ಯರ್ಥ ಮಾಡಿದೆ.

ದುಡಿಯುವ ಸ್ಥಳಗಳಲ್ಲಿ ಮಹಿಳೆಯರ ಮೇಲೆ ಹಾಗೂ ಬಹುತೇಕ ಶಾಲೆಗಳಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಲೇಖನಗಳು ಪ್ರಕಟವಾಗುತ್ತಿವೆ. ಜುಲೈ 2014ರಲ್ಲಿ ಸರ್ಕಾರ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಯುವ ಸಂಬಂಧ ಹೊರಡಿಸಿರುವ ಸುತ್ತೋಲೆಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಶಿಕ್ಷಣ ಸಂಸ್ಥೆಗಳಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದರು.

ಸರ್ಕಾರದ ಸುತ್ತೋಲೆಯಲ್ಲಿ ಪೋಕ್ಸೊ ಕಾಯಿದೆ ಸೇರಿದಂತೆ ಹಲವು ಕಾಯಿದೆಗಳನ್ನು ಉಲೇಖಿಸಲಾಗಿದೆ. ಅಲ್ಲದೆ, ಮಕ್ಕಳ ಮೇಲಿನ ಅಪರಾಧಗಳಿಗೆ ಸಂಬಂಧಿಸಿದಂತೆ ಎಷ್ಟು ಎಚ್ಚರಿಕೆಯಿಂದಿರಬೇಕು ಮತ್ತು ಮುನ್ನೆಚ್ಚರಿಕೆ ಕೈಗೊಳ್ಳಬೇಕು, ಶಿಕ್ಷಣ ಸಂಸ್ಥೆಗಳು ಹಾಗೂ ಪೋಷಕರ ಹೊಣೆಗಾರಿಕೆಗಳನ್ನು ವಿವರಿಸಲಾಗಿದೆ. ಅವುಗಳನ್ನು ಪಾಲನೆ ಮಾಡುವಂತೆ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

Kannada Bar & Bench
kannada.barandbench.com