ಸ್ಥಳೀಯ ಸಂಸ್ಥೆಗಳಿಗೆ ಮೀಸಲು ನಿಗದಿ: ಆಕ್ಷೇಪಣೆ ಸಲ್ಲಿಕೆಗೆ ಸರ್ಕಾರಕ್ಕೆ ಅಂತಿಮ ಅವಕಾಶ ನೀಡಿದ ಹೈಕೋರ್ಟ್‌

ಗ್ರಾಮ ಪಂಚಾಯಿತಿಗಳಿಗೆ 2020ರಲ್ಲಿ ಚುನಾವಣೆ ನಡೆದಿತ್ತು. ಅವುಗಳ ಅವಧಿ ಜನವರಿ ಅಂತ್ಯಕ್ಕೆ ಮುಗಿಯಲಿದೆ. ಅವಧಿ ಪೂರ್ಣಗೊಂಡಿರುವ 187 ನಗರ ಸ್ಥಳೀಯ ಸಂಸ್ಥೆಗಳಿಗೂ (47 ನಗರಸಭೆ, 91 ಪುರಸಭೆ, 49 ಪಟ್ಟಣ ಪಂಚಾಯಿತಿ) ಚುನಾವಣೆ ನಡೆಸಬೇಕಿದೆ.
CJ Vibhu Bhakru and Justice̤ CM Poonacha
CJ Vibhu Bhakru and Justice̤ CM Poonacha
Published on

ಅವಧಿ ಪೂರ್ಣಗೊಂಡಿರುವ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಈ ತಿಂಗಳ ಅಂತ್ಯಕ್ಕೆ ಅವಧಿ ಪೂರ್ಣಗೊಳ್ಳಲಿರುವ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ನಿಗದಿಪಡಿಸುವ ಸಂಬಂಧ ಉತ್ತರಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಬುಧವಾರ ಅಂತಿಮ ಅವಕಾಶ ನೀಡಿದೆ.

ಚುನಾವಣೆಗೆ ಮೀಸಲಾತಿ ಅಧಿಸೂಚನೆ ಹೊರಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಸರ್ಕಾರಿ ವಕೀಲೆ ನಿಲೋಫರ್ ಅಕ್ಬರ್ ಅವರು “ಮೀಸಲಾತಿ ನಿಗದಿಪಡಿಸುವ ಸಂಬಂಧ ಎಲ್ಲ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ. ಅರ್ಜಿ ವಿಚಾರಣೆಯನ್ನು ಅಲ್ಪಾವಧಿಗೆ ಮುಂದೂಡಬೇಕು” ಎಂದು ಪೀಠಕ್ಕೆ ಮನವಿ ಮಾಡಿದರು.

ಇದಕ್ಕೂ ಮೊದಲು ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ ಎನ್ ಫಣೀಂದ್ರ ಅವರು ರಾಜ್ಯದ ಬಹುತೇಕ ಎಲ್ಲ ಗ್ರಾಮ ಪಂಚಾಯಿತಿಗಳ ಅವಧಿ ಈ ತಿಂಗಳ ಅಂತ್ಯದೊಳಗೆ ಪೂರ್ಣಗೊಳ್ಳಲಿವೆ. 187 ನಗರ ಸ್ಥಳೀಯ ಸಂಸ್ಥೆಗಳ ಅವಧಿ ಈಗಾಗಲೇ ಪೂರ್ಣಗೊಂಡಿವೆ. ಸಕಾಲದಲ್ಲಿ ಚುನಾವಣೆ ನಡೆಸಬೇಕೆಂಬ ಸಾಂವಿಧಾನಿಕ ಪೀಠದ ತೀರ್ಪಿಗೆ ಚುನಾವಣಾ ಆಯೋಗ ಬದ್ಧವಾಗಿರಬೇಕಿದೆ ಎಂದರು.

Also Read
ಗ್ರಾಮ ಪಂಚಾಯಿತಿ ಚುನಾವಣೆ: ಅಂತಿಮ ಮೀಸಲಾತಿ ಅಧಿಸೂಚನೆ ಕೋರಿದ ಆಯೋಗ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಮುಂದುವರೆದು, ಮೀಸಲಾತಿ ಅಧಿಸೂಚನೆ ಹೊರಡಿಸುವಂತೆ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಅದಕ್ಕಾಗಿಯೇ ಈ ಅರ್ಜಿ ಸಲ್ಲಿಸಲಾಗಿದೆ. ಅರ್ಜಿ ಸಂಬಂಧ ನವೆಂಬರ್ 12ರಂದೇ ನ್ಯಾಯಾಲಯ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದೆ ಎಂದು ವಿವರಿಸಿದರು. ಅಲ್ಲದೆ, ಅವಧಿ ಪೂರ್ಣಗೊಂಡಿರುವ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೆ ಈಗಾಗಲೇ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.

ಅಂತಿಮವಾಗಿ, ಒಂದು ವಾರ ಕಾಲಾವಕಾಶ ನೀಡುವಂತೆ ಸರ್ಕಾರದ ಪರ ವಕೀಲರ ಮನವಿ ಪರಿಗಣಿಸಿದ ಪೀಠವು ಅರ್ಜಿಗೆ ಕುರಿತು ಉತ್ತರಿಸಲು ಸರ್ಕಾರಕ್ಕೆ ಅಂತಿಮ ಅವಕಾಶ ನೀಡಿ, ವಿಚಾರಣೆಯನ್ನು ಫೆಬ್ರವರಿ 5ಕ್ಕೆ ಮುಂದೂಡಿತು.

Kannada Bar & Bench
kannada.barandbench.com