ರಾಜ್ಯ ಒಕ್ಕಲಿಗರ ಸಂಘದಲ್ಲಿ ಮಹಿಳಾ ಮೀಸಲಾತಿಗೆ ಕೋರಿಕೆ: ಸಂಘಕ್ಕೆ ನೋಟಿಸ್‌ ಜಾರಿಗೊಳಿಸಿದ ಹೈಕೋರ್ಟ್‌

ಮಹಿಳೆಯರಿಗೆ ಮೀಸಲಾತಿ ಕಲ್ಪಿಸಲು ಸಂಘದ ಬೈಲಾ ತಿದ್ದುಪಡಿ ಮಾಡುವಂತೆ ಅರ್ಜಿಯಲ್ಲಿ ಕೋರಲಾಗಿದೆ. ಇದರಲ್ಲಿ ಸರ್ಕಾರದ ಪಾತ್ರವೇನೂ ಇಲ್ಲ ಎಂದ ನ್ಯಾಯಾಲಯ.
Karnataka High Court
Karnataka High Court
Published on

ರಾಜ್ಯ ಒಕ್ಕಲಿಗರ ಸಂಘದ ಆಡಳಿತ ಮಂಡಳಿ ಹಾಗೂ ಸಮಿತಿಗಳ ಚುನಾವಣೆಯಲ್ಲಿ ಮಹಿಳೆಯರಿಗೆ ಸೂಕ್ತ ಮೀಸಲಾತಿ ಕಲ್ಪಿಸಲು ನಿರ್ದೇಶನ ನೀಡುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ರಾಜ್ಯ ಒಕ್ಕಲಿಗರ ಸಂಘದ ಸದಸ್ಯೆಯಾಗಿರುವ ಮೈಸೂರು ನಿವಾಸಿ ಸುಶೀಲಾ ನಂಜಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಬಿ ಎಂ ಶ್ಯಾಮ್ ಪ್ರಸಾದ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿ ಆಲಿಸಿದ ಪೀಠವು ಮಹಿಳೆಯರಿಗೆ ಮೀಸಲಾತಿ ಕಲ್ಪಿಸಲು ಸಂಘದ ಬೈಲಾ ತಿದ್ದುಪಡಿ ಮಾಡುವಂತೆ ಅರ್ಜಿಯಲ್ಲಿ ಕೋರಲಾಗಿದೆ. ಇದರಲ್ಲಿ ಸರ್ಕಾರದ ಪಾತ್ರವೇನೂ ಇಲ್ಲ. ಅದಾಗ್ಯೂ ಸರ್ಕಾರಕ್ಕೆ ಔಪಚಾರಿಕವಾಗಿ ನೋಟಿಸ್ ಜಾರಿಗೊಳಿಸಲಾಗುವುದು ಎಂದು ಹೇಳಿತು. ಜೊತೆಗೆ ರಾಜ್ಯ ಒಕ್ಕಲಿಗರ ಸಂಘಕ್ಕೆ ನೋಟಿಸ್ ಜಾರಿಗೊಳಿಸಿದ ಪೀಠವು ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ನಿಲುವು ತಿಳಿಸಲು ನಿರ್ದೇಶನ ನೀಡಿ ವಿಚಾರಣೆಯನ್ನು ಏಪ್ರಿಲ್ 15ಕ್ಕೆ ಮುಂದೂಡಿತು.

ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ಅರ್ಜಿದಾರರು ಸಂಘಕ್ಕೆ ಸಲ್ಲಿಸಿರುವ ಮನವಿಯನ್ನು ಪರಿಗಣಿಸಿ ಸಂಘದ ಬೈಲಾಗಳಿಗೆ ಅಗತ್ಯ ತಿದ್ದುಪಡಿ ಮಾಡಲು ಸೂಚಿಸಬೇಕು. ಸಂಘದ ಆಡಳಿತ ಮಂಡಳಿ, ನಿರ್ದೇಶಕ ಮಂಡಳಿ ಹಾಗೂ ಇತರ ಸಮಿತಿಗಳ ಚುನಾವಣೆಗಳಲ್ಲಿ ಸಮಾನತೆಯ ತತ್ವದ ಆಧಾರದಲ್ಲಿ ಮಹಿಳೆಯರಿಗೆ ಮೀಸಲಾತಿ ಜಾರಿಗೆ ತರಲು ಒಕ್ಕಲಿಗರ ಸಂಘಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Kannada Bar & Bench
kannada.barandbench.com