ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿರುವ ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ಏಕಸದಸ್ಯ ನ್ಯಾಯಪೀಠದ ಮುಂದೆ ಗುರುವಾರಕ್ಕೆ (ಮಾ.2) ನಿಗದಿ ಮಾಡಲಾಗಿದೆ.
ಈ ಸಂಬಂಧ ಎಸ್‌ಜೆಎಂ ವಿದ್ಯಾಪೀಠದ ಅಧ್ಯಕ್ಷ ಎಚ್ ಎಂ ವಿಶ್ವನಾಥ್ ಮತ್ತು ಮಠದ ತಾತ್ಕಾಲಿಕ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಸಲ್ಲಿಸಿರುವ ರಿಟ್ ಅರ್ಜಿಯ ಮುಂದುವರಿದ ವಿಚಾರಣೆ ಮಧ್ಯಾಹ್ನ 2.30ಕ್ಕೆ ಆರಂಭವಾಗಲಿದೆ.
‘ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ–1988ರ ಕಲಂ 8 (2)ರಡಿ ಶರಣರು ತಮ್ಮ ಅಧಿಕಾರ ಚಲಾಯಿಸಲು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನಿರ್ಬಂಧ ವಿಧಿಸಿರುವುದು ಕಾನೂನು ಬಾಹಿರ’ ಎಂಬುದು ಅರ್ಜಿದಾರರ ಆಕ್ಷೇಪ.
ಈ ಹಿಂದಿನ ವಿಚಾರಣೆ ವೇಳೆ ಮುರುಘಾ ಶರಣರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿ ವಿ ನಾಗೇಶ್ ಅವರು ಸಣ್ಣಪುಟ್ಟದ್ದಕ್ಕೆಲ್ಲಾ ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯಿದೆ ಅನ್ವಯ ಮಾಡುತ್ತಾ ಹೋದರೆ ರಾಜ್ಯದಲ್ಲಿ ಧಾರ್ಮಿಕ ಸಂಸ್ಥೆಗಳು ಮುಚ್ಚಿಕೊಂಡು ಹೋಗುತ್ತವೆ ಎಂದು ಕಳವಳ ವ್ಯಕ್ತಪಡಿಸಿದ್ದರು. ಶರಣರ ವಿರುದ್ಧ ಮಾಡಲಾದ ಆರೋಪವು ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯಿದೆ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದಿದ್ದರು.
ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಶಿವಮೂರ್ತಿ ಶರಣರನ್ನು ಪೊಲೀಸರು 2022ರ ಸೆಪ್ಟೆಂಬರ್ 1ರಂದು ಬಂಧಿಸಿದ್ದು ಅಂದಿನಿಂದಲೂ ಅವರು ಚಿತ್ರದುರ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೊಕ್ಸೊ), ಅತ್ಯಾಚಾರ, ಪರಿಶಿಷ್ಟ ಜಾತಿ–ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ವಿವಿಧ ಕಲಂಗಳ ಅಡಿಯಲ್ಲಿ ಗುರುತರ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ.