ಮದ್ರಾಸ್‌ ಹೈಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ಕೆ ಎ ಸ್ವಾಮಿ ನಿಧನ

ಕೊಪ್ಪಳ ಜಿಲ್ಲೆಯ ಯಲಬುರ್ಗಾದ ಸ್ವಾಮಿ ಅವರಿಗೆ 89 ವರ್ಷವಾಗಿತ್ತು. ಅವರು ಪತ್ನಿ, ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತದೇಹವನ್ನು ರಾಮಯ್ಯ ಆಸ್ಪತ್ರೆಗೆ ದಾನ‌ ಮಾಡಲಾಗಿದೆ.
Justice (Rtd) K A Swamy
Justice (Rtd) K A Swamy

ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ಮತ್ತು ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನಿವೃತ್ತರಾಗಿದ್ದ ಕೆ ಎ ಸ್ವಾಮಿ ಅವರು ಮಂಗಳವಾರ ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ನಿಧನರಾದರು.

ಕೊಪ್ಪಳ ಜಿಲ್ಲೆಯ ಯಲಬುರ್ಗಾದ ಸ್ವಾಮಿ ಅವರಿಗೆ 89 ವರ್ಷವಾಗಿತ್ತು. ಅವರು ಪತ್ನಿ, ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸ್ವಾಮಿ ಅವರ ಇಚ್ಛೆಯಂತೆ ಮೃತದೇಹವನ್ನು ರಾಮಯ್ಯ ಆಸ್ಪತ್ರೆಗೆ ದಾನ‌ ಮಾಡಲಾಗಿದೆ.

1935ರ ಮಾರ್ಚ್‌ 20ರಂದು ಜನಿಸಿದ್ದ ಅವರು 1960ರ ಜೂನ್‌ನಲ್ಲಿ ವಕೀಲರಾಗಿ ರಾಜ್ಯ ವಕೀಲರ ಪರಿಷತ್‌ನಿಂದ ಸನ್ನದು ಪಡೆದರು. ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದ ದಿವಂಗತ ವಿ ಎಸ್ ಮಳಿಮಠ ಅವರಲ್ಲಿ ಕಿರಿಯ ವಕೀಲರಾಗಿ ವೃತ್ತಿ ಆರಂಭಿಸಿದ್ದರು. ನಂತರದ ದಿನಗಳಲ್ಲಿ ರಾಜ್ಯ ವಕೀಲರ ಪರಿಷತ್ ಸದಸ್ಯರಾಗಿ, ಭಾರತೀಯ ವಕೀಲರ ಪರಿಷತ್ ಶಿಸ್ತು ಸಮಿತಿ ಸದಸ್ಯರಾಗಿದ್ದರು.

ಸ್ವತಂತ್ರವಾಗಿ ವೃತ್ತಿ ಆರಂಭಿಸಿದ ದಿನಗಳಲ್ಲಿ ಅವರು ಉತ್ತರ ಕರ್ನಾಟಕ ಮತ್ತು ಹೈದರಾಬಾದ್‌ ಕರ್ನಾಟಕದಿಂದ ಹೈಕೋರ್ಟ್‌ ಮೆಟ್ಟಿಲೇರುತ್ತಿದ್ದ ಬಹುತೇಕ ವ್ಯಾಜ್ಯಗಳಲ್ಲಿ ಯಾವುದಾದರೂ ಒಂದು ಪಕ್ಷದ ಪರವಾಗಿ ಪ್ರತಿನಿಧಿಸಲೇಬೇಕು ಎಂಬಷ್ಟು ಖ್ಯಾತಿ ಗಳಿಸಿದ್ದರು. 1979ರ ಜನವರಿ 1ರಂದು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದ ಸ್ವಾಮಿ ಅವರು 1992ರ ಜುಲೈ 1ರಿಂದ 1993ರ ಜೂನ್ 25ರವರೆಗೆ ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದರು. 1993ರ ಜುಲೈ 1ರಂದು ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು.

Related Stories

No stories found.
Kannada Bar & Bench
kannada.barandbench.com