ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಆರ್ ವಿ ವಸಂತ ಕುಮಾರ್ (91) ಬುಧವಾರ ಬೆಳಿಗ್ಗೆ ಜಯನಗರ 7ನೇ ಬ್ಲಾಕ್‌ನಲ್ಲಿರುವ ಅವರ ನಿವಾಸದಲ್ಲಿ ನಿಧನರಾದರು. ಮಧ್ಯಾಹ್ನ ಬನಶಂಕರಿಯ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಅವರಿಗೆ ಪತ್ನಿ, ಪುತ್ರ ಮತ್ತು ಪುತ್ರಿ ಇದ್ದಾರೆ. ಪುತ್ರಿ ವಾಣಿ ಅವರ ಪತಿ ಎಚ್ ಸತೀಶ್ ಅವರು ಸದ್ಯ ಬೆಂಗಳೂರಿನ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾಗಿದ್ದಾರೆ.
ವಸಂತ ಕುಮಾರ್ ಅವರು 1933ರ ಮೇ 1ರಂದು ಜನಿಸಿದ್ದರು. ಬೆಂಗಳೂರಿನ ಸೆಂಟ್ರಲ್ ಕಾಲೇಜು ಮತ್ತು ಸರ್ಕಾರಿ ಕಾನೂನು ಕಾಲೇಜಿನಲ್ಲಿ ವಿದ್ಯಾಭ್ಯಾಸ ಪೂರೈಸಿದ್ದರು. 1955ರ ಸೆಪ್ಟೆಂಬರ್ 7ರಂದು ವಕೀಲರಾಗಿ ಸನ್ನದು ನೋಂದಣಿ ಮಾಡಿಸಿದ್ದ ಅವರು, ಹಿರಿಯ ವಕೀಲ ವಿ ಕೃಷ್ಣಮೂರ್ತಿ ಅವರಲ್ಲಿ ಕಿರಿಯ ವಕೀಲರಾಗಿ ವೃತ್ತಿ ಆರಂಭಿಸಿದ್ದರು. 1991ರ ಡಿಸೆಂಬರ್ 9ರಂದು ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. ನಿವೃತ್ತಿ ನಂತರ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧಿಕರಣದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.