ಕೊಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ಪಡೆಯುತ್ತಿದ್ದ 31 ವರ್ಷದ ಸ್ಥಾನಿಕ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಪಶ್ಚಿಮ ಬಂಗಾಳದ ವೈದ್ಯರು ನಾಳೆ ಸಂಜೆ 5 ಗಂಟೆಯೊಳಗೆ ಕರ್ತವ್ಯಕ್ಕೆ ಮರಳಬೇಕು. ಇಲ್ಲವಾದಲ್ಲಿ ಶಿಸ್ತು ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಅಧಿಕಾರ ನೀಡಲಾಗುವುದು ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ [ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೇನಿ ವೈದ್ಯೆಯ ಆಪಾದಿತ ಅತ್ಯಾಚಾರ ಮತ್ತು ಕೊಲೆ ಘಟನೆ ಮತ್ತು ಸಂಬಂಧಿತ ಪ್ರಕರಣಗಳಿಗೆ ಸಂಬಂಧಿಸಿದಂತೆ ದಾಖಲಿಸಿಕೊಂಡ ಸ್ವಯಂ ಪ್ರೇರಿತ ಪ್ರಕರಣ].
ಸೆಪ್ಟೆಂಬರ್ 10ರ ಮಂಗಳವಾರ ಸಂಜೆ 5 ಗಂಟೆಯೊಳಗೆ ಕರ್ತವ್ಯಕ್ಕೆ ಹಾಜರಾದವರ ವಿರುದ್ಧ ಯಾವುದೇ ಶಿಸ್ತು ಕ್ರಮ ಜರುಗಿಸುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಹಾಗೂ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ ಇದೇ ವೇಳೆ ಅಭಯ ನೀಡಿದೆ.
ವೈದ್ಯರು ನಾಳೆ ಸಂಜೆ 5 ಗಂಟೆಗೆ ಅಥವಾ ಅದಕ್ಕಿಂತ ಮೊದಲು ಕರ್ತವ್ಯಕ್ಕೆ ವರದಿ ಮಾಡಿಕೊಂಡರೆ ಅವರ ವಿರುದ್ಧ ಯಾವುದೇ ಪ್ರತಿಕೂಲ ಶಿಸ್ತು ಕ್ರಮ ತೆಗೆದುಕೊಳ್ಳುವುದಿಲ್ಲ. ಸುರಕ್ಷತೆ ಮತ್ತು ಭದ್ರತೆಯ ಮೇಲಿನ ಎಲ್ಲಾ ದೂರುಗಳನ್ನು ತಕ್ಷಣವೇ ಪರಿಗಣಿಸಲಾಗುವುದು. ಆದರೂ, ನಿರಂತರವಾಗಿ ಕೆಲಸದಿಂದ ದೂರವಿದ್ದರೆ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬಹುದು. ತಾವು ಸೇವೆ ಮಾಡಲು ಉದ್ದೇಶಿಸಿರುವ ಸಮುದಾಯದ ಸಾಮಾನ್ಯ ಕಾಳಜಿಯನ್ನು ವೈದ್ಯರು ನಿರ್ಲಕ್ಷಿಸುವಂತಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ವೈದ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಜೊತೆಗೆ ಸುರಕ್ಷತೆ ಮತ್ತು ಭದ್ರತೆಗೆ ಸಂಬಂಧಿಸಿದಂತೆ ಅವರ ಭಯ ನಿವಾರಿಸಲು ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಕೂಡ ನ್ಯಾಯಾಲಯ ನುಡಿದಿದೆ.
ವೈದ್ಯರ ನಿರಂತರ ಪ್ರತಿಭಟನೆಯಿಂದಾಗಿ ಪಶ್ಚಿಮ ಬಂಗಾಳದಲ್ಲಿ ಆರೋಗ್ಯ ವ್ಯವಸ್ಥೆ ಬಿಕ್ಕಟ್ಟಿನಲ್ಲಿದೆ ಎಂದು ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದ ಹಿನ್ನೆಲೆಯಲ್ಲಿ ಈ ಆದೇಶ ನೀಡಲಾಗಿದೆ. ಪಶ್ಚಿಮ ಬಂಗಾಳ ಸರ್ಕಾರದ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದರು.