

ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್ಎಸ್) ಹಾಗೂ ಅದರ ಸದಸ್ಯರ ಬಗ್ಗೆ ಮಾನಹಾನಿ ಹೇಳಿಕೆ ನೀಡಿದ ಆರೋಪದಲ್ಲಿ ದಾಖಲಿಸಲಾಗಿದ್ದ ಖಾಸಗಿ ದೂರಿನಿಂದ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಕೈಬಿಟ್ಟಿರುವ ವಿಚಾರಣಾ ನ್ಯಾಯಾಲಯದ ಕ್ರಮವನ್ನು ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ.
ಆರ್‌ಎಸ್ಎಸ್ ಬೆಂಬಲಿಗ ಬೆಂಗಳೂರಿನ ಜಯನಗರದ ನಿವಾಸಿ ಎ ತೇಜಸ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿ ಏಕಸದಸ್ಯ ಪೀಠ ನಡೆಸಿತು.
ಕೆಲಕಾಲ ಅರ್ಜಿ ಆಲಿಸಿದ ಪೀಠವು ಪ್ರತಿವಾದಿಯಾದ ಮಾಜಿ ಸಚಿವ ಹಾಗೂ ಗಾಂಧಿನಗರ ವಿಧಾನಸಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜುಲೈ 31ಕ್ಕೆ ಮುಂದೂಡಿತು. ಅರ್ಜಿದಾರ ತೇಜಸ್ ಪರ ವಕೀಲ ವೆಂಕಟೇಶ್ ದಳವಾಯಿ ವಾದಿಸಿದರು.
ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ದಿನೇಶ್ ಗುಂಡೂರಾವ್, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಸಾರ್ವಜನಿಕ ಹೇಳಿಕೆಗಳು, ಸಾಮಾಜಿಕ ಮಾಧ್ಯಮಗಳ ಪೋಸ್ಟ್, ಸಂದರ್ಶನಗಳಲ್ಲಿ ಆರ್‌ಎಸ್ಎಸ್ ಹಾಗೂ ಅದರ ಸದಸ್ಯರ ಕುರಿತು ಮಾನಹಾನಿ ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಿ ತೇಜಸ್ ಅವರು ಮೂವರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ದೂರುದಾರರ ಹೇಳಿಕೆ ದಾಖಲಿಸಿಕೊಂಡಿದ್ದ ವಿಚಾರಣಾಧೀನ ನ್ಯಾಯಾಲಯವು ಮೂವರು ಆರೋಪಿತರಿಗೆ ನೋಟಿಸ್ ಜಾರಿಗೊಳಿಸಿತ್ತು. ಆದರೆ, ಇಬ್ಬರ ವಿರುದ್ಧ ವಿಚಾರಣೆಗೆ ಅಂಗೀಕರಿಸಿದ್ದ ವಿಚಾರಣಾ ನ್ಯಾಯಾಲಯವು ದಿನೇಶ್ ಗುಂಡೂರಾವ್ ವಿರುದ್ಧದ ವಿಚಾರಣಾ ಪ್ರಕ್ರಿಯೆಯನ್ನು ಕೈಬಿಟ್ಟು 2026ರ ಜೂನ್ 26ರಂದು ಆದೇಶಿಸಿತ್ತು. ಅದನ್ನು ಪ್ರಶ್ನಿಸಿ ತೇಜಸ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.