ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ನೌಕರರಿಗೆ ವೇತನ ಪರಿಷ್ಕರಣೆ: ಎರಡು ತಿಂಗಳಲ್ಲಿ ಆದೇಶ ಜಾರಿಗೆ ಹೈಕೋರ್ಟ್‌ ಗಡುವು

ಆದೇಶ ಜಾರಿಗೊಳಿಸಲು ಸರ್ಕಾರ ವಿಫಲವಾದರೆ, ಹೊಸದಾಗಿ‌ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ದೇವಾಲಯದ ನೌಕರರು ಮುಕ್ತ ಅವಕಾಶ ಹೊಂದಿದ್ದಾರೆ ಎಂದು ತಿಳಿಸಿ, ನ್ಯಾಯಾಂಗ ನಿಂದನೆ ಅರ್ಜಿಯನ್ನು ಹೈಕೋರ್ಟ್‌ ಕೈಬಿಟ್ಟಿದೆ.
Karnataka High Court
Karnataka High Court
Published on

ದಕ್ಷಿಣ ಕನ್ನಡ ಜಿಲ್ಲೆಯ ಸುಪ್ರಸಿದ್ಧ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ನೌಕರರಿಗೆ 2018ರ ಏಪ್ರಿಲ್ ತಿಂಗಳಿನಿಂದ ಅನ್ವಯವಾಗುವಂತೆ ಆರನೇ ವೇತನ ಆಯೋಗದ ಶಿಫಾರಸ್ಸಿನ ಅನುಸಾರ ವೇತನ ಪರಿಷ್ಕರಣೆ ಮಾಡುವಂತೆ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ಎಂಟು ವಾರಗಳಲ್ಲಿ ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ.

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೌಕರರಿಗೆ ಆರನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಪರಿಷ್ಕರಣೆ ಮಾಡುವಂತೆ ನಿರ್ದೇಶಿಸಿ 2024ರ ಮಾರ್ಚ್ 20ರಂದು ಏಕಸದಸ್ಯ ಪೀಠ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಮತ್ತೊಂದೆಡೆ, ಏಕಸದಸ್ಯ ಪೀಠದ ಆದೇಶ ಪಾಲನೆ ಮಾಡದ ಸರ್ಕಾರದ ವಿರುದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಕೆಲಸ ಮಾಡುತ್ತಿರುವ 12 ನೌಕರರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ಈ ಎರಡೂ ಅರ್ಜಿಗಳನ್ನು ಒಟ್ಟಾಗಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಮತ್ತು ವಿಜಯ್ ಕುಮಾರ್ ಎ. ಪಾಟೀಲ್‌ ಅವರ ನೇತ್ವದ ವಿಭಾಗೀಯ ಪೀಠವು ಸರ್ಕಾರದ ಮೇಲ್ಮನವಿಯನ್ನು ವಜಾಗೊಳಿಸಿ ಆದೇಶಿಸಿದೆ. ಏಕಸದಸ್ಯ ಪೀಠದ ಆದೇಶವನ್ನು ಎಂಟು ವಾರಗಳಲ್ಲಿ ಜಾರಿಗೊಳಿಸಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿರುವ ನ್ಯಾಯಾಲಯವು ಆದೇಶ ಜಾರಿಗೊಳಿಸಲು ಸರ್ಕಾರ ವಿಫಲವಾದರೆ, ಹೊಸದಾಗಿ‌ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ದೇವಾಲಯದ ನೌಕರರು ಮುಕ್ತ ಅವಕಾಶ ಹೊಂದಿದ್ದಾರೆ ಎಂದು ತಿಳಿಸಿ, ನ್ಯಾಯಾಂಗ ನಿಂದನೆ ಅರ್ಜಿಯನ್ನು ಕೈಬಿಟ್ಟಿದೆ.

ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ 210 ದಿನಗಳ ಕಾಲ ವಿಳಂಬವಾಗಿ ಮೇಲ್ಮನವಿ ಸಲ್ಲಿಸಿದೆ. ವಿಳಂಬಕ್ಕೆ ಸೂಕ್ತ ಕಾರಣವನ್ನೂ ನೀಡಿಲ್ಲ. ಅಲ್ಲದೆ, ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಕಾರ್ಯನಿವಾಹಕ ಅಧಿಕಾರಿಗಳು 2018ರಿಂದ ಅನ್ವಯವಾಗುವಂತೆ ಆರನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಪಾವತಿಸಬೇಕು ಎಂದು ತಿಳಿಸಿದ್ದಾರೆ. ಜೊತೆಗೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಕಾಯಿದೆಯ ಅಡಿಯಲ್ಲಿ ಎ ದರ್ಜೆಯ ಇತರ ದೇವಾಲಯಗಳ ಸಿಬ್ಬಂದಿಗೆ 2018ರಿಂದಲೇ ವೇತನ ಪರಿಷ್ಕರಣೆ ಮಾಡಿದ್ದು, ಈ ದೇವಾಲಯದ ಸಿಬ್ಬಂದಿಗೆ ಮಾತ್ರ ವಿಳಂಬ ಮಾಡಲಾಗಿದೆ. ಆದ್ದರಿಂದ, 2018ರಿಂದಲೇ ಅನ್ವಯವಾಗುವಂತೆ ವೇತನ ಪರಿಷ್ಕರಿಸಿ ಪಾವತಿಸುವಂತೆ ಏಕಸದಸ್ಯ ಪೀಠ ಹೊರಡಿಸಿರುವ ಆದೇಶ ಸೂಕ್ತವಾಗಿದೆ ಎಂದು ವಿಭಾಗೀಯ ಪೀಠ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ.

ಪ್ರಕರಣದ ಹಿನ್ನೆಲೆ: ರಾಜ್ಯ ಮುಜರಾಯಿ ಇಲಾಖೆಯಿಂದ ಎ ದರ್ಜೆಯಲ್ಲಿ ಅಧಿಸೂಚಿತ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ನೌಕರರಿಗೆ 2021ರ ಅಕ್ಟೋಬರ್ 1ರಿಂದ ಆರನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಆದರೆ, ಇತರ ಎ ದರ್ಜೆಯ ದೇವಾಲಯಗಳ ನೌಕರರಿಗೆ 2018ರ ಏಪ್ರಿಲ್ 1ರಿಂದಲೇ ವೇತನ ಪರಿಷ್ಕರಣೆ ಮಾಡಲಾಗಿತ್ತು.

ಇದನ್ನು ಪ್ರಶ್ನಿಸಿ ದೇವಾಲಯದ 223 ನೌಕರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠವು ಇತರ ದೇವಾಲಯಗಳ ಮಾದರಿಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಸಿಬ್ಬಂದಿಗೂ 2018ರ ಏಪ್ರಿಲ್‌ನಿಂದಲೇ ಆರನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಪರಿಷ್ಕರಣೆ ಮಾಡಿ, ಪಾವತಿಸುವಂತೆ 2024ರ ಮಾರ್ಚ್ 20ರಂದು ಆದೇಶಿಸಿತ್ತು. ಈ ಆದೇಶವನ್ನು ರಾಜ್ಯ ಸರ್ಕಾರ ವಿಭಾಗೀಯ ಪೀಠದಲ್ಲಿ ಪ್ರಶ್ನಿಸಿದ್ದರೆ, ಏಕಸದಸ್ಯ ಪೀಠದ ಆದೇಶ ಜಾರಿ ಮಾಡದ ಸರ್ಕಾರದ ವಿರುದ್ಧ ದೇವಾಲಯದ 12 ನೌಕರರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

Kannada Bar & Bench
kannada.barandbench.com