ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಸುಪ್ರೀಂ ಕೋರ್ಟ್‌ ನ್ಯಾ. ಕರೋಲ್‌

ದೇವರಿಗೆ ಪ್ರಾರ್ಥನೆ ಸಲ್ಲಿಸಿದ ನಂತರ ನ್ಯಾ. ಕರೋಲ್ ಅವರು ಕೆಲ ಕಾಲ ದೇವಸ್ಥಾನ ವ್ಯವಸ್ಥಾಪನಾ ಮಂಡಳಿಯ ಪದಾಧಿಕಾರಿಗಳೊಂದಿಗೆ ಸಮಾಲೋಚಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಮಂಡಳಿಯಿಂದ ನ್ಯಾಯಮೂರ್ತಿಗಳನ್ನು ಸನ್ಮಾನಿಸಲಾಯಿತು.
ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಸುಪ್ರೀಂ ಕೋರ್ಟ್‌ ನ್ಯಾ. ಕರೋಲ್‌

ಬೆಂಗಳೂರು ಕರಗಕ್ಕೆ ಪ್ರಸಿದ್ಧಿ ಪಡೆದಿರುವ ಐತಿಹಾಸಿಕ ತಿಗಳರ ಪೇಟೆಯ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಭಾನುವಾರ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸಂಜಯ್ ಕರೋಲ್ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಶನಿವಾರ ನಡೆದ ರಾಷ್ಟ್ರೀಯ ಕಾನೂನು ಶಾಲಾ ವಿಶ್ವವಿದ್ಯಾಲಯ 31ನೇ ಘಟಿಕೋತ್ಸವ ಮತ್ತು ನವೀಕೃತ ಗ್ರಂಥಾಲಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ನ್ಯಾಯಮೂರ್ತಿ ಸಂಜಯ್ ಕರೋಲ್ ಅವರು ಭಾನುವಾರ ಮಧ್ಯಾಹ್ನ 12.30ರ ಸುಮಾರಿಗೆ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ದೇವರಿಗೆ ಪ್ರಾರ್ಥನೆ ಸಲ್ಲಿಸಿದ ನಂತರ ನ್ಯಾಯಮೂರ್ತಿ ಸಂಜಯ್ ಕರೋಲ್ ಅವರು, ಕೆಲ ಕಾಲ ದೇವಸ್ಥಾನ ವ್ಯವಸ್ಥಾಪನಾ ಮಂಡಳಿಯ ಪದಾಧಿಕಾರಿಗಳೊಂದಿಗೆ ಸಮಾಲೋಚಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಮಂಡಳಿಯಿಂದ ನ್ಯಾಯಮೂರ್ತಿಗಳನ್ನು ಸನ್ಮಾನಿಸಲಾಯಿತು. ಧರ್ಮರಾಯ ಸ್ವಾಮಿ ದೇವಸ್ಥಾನ ವ್ಯವಸ್ಥಾಪನಾ ಮಂಡಳಿ ಅಧ್ಯಕ್ಷ ಸತೀಶ್, ಸದಸ್ಯ ಬಾಲಕೃಷ್ಣ, ಅರ್ಚಕ ಜ್ಞಾನೇಂದ್ರ, ರಾಜ್ಯ ಮುಜರಾಯಿ ಇಲಾಖೆ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಮೂರ್ತಿ ಉಪಸ್ಥಿತರಿದ್ದರು.

“ಧರ್ಮರಾಯಸ್ವಾಮಿ ದೇವಸ್ಥಾನದ ಪ್ರಸಿದ್ಧಿ ಬಗ್ಗೆ ನನಗೆ ತಿಳಿದಿದೆ. ಬೆಂಗಳೂರಿಗೆ ಬಂದ ವೇಳೆ ದೇವಸ್ಥಾನಕ್ಕೆ ಭೇಟಿ ನೀಡಬೇಕೆಂಬುದು ನನ್ನ ಮನದಾಳದ ಆಸೆಯಾಗಿತ್ತು. ಅದರಂತೆ ಇಂದು ದೇವಸ್ಥಾನಕ್ಕೆ ಭೇಟಿ ನೀಡಿದ್ದೇನೆ. ಧರ್ಮರಾಯಸ್ವಾಮಿ ದೇವರ ದರ್ಶನ ಪಡೆದಿರುವುದು ನನಗೆ ಬಹಳ ಸಂತೋಷ-ಖುಷಿ ತಂದಿರುವುದಾಗಿ ನ್ಯಾಯಮೂರ್ತಿಗಳ ಹರ್ಷ ವ್ಯಕ್ತಪಡಿಸಿದರು” ಎಂದು ದೇವಸ್ಥಾನದ ವ್ಯವಸ್ಥಾಪನಾ ಮಂಡಳಿ ಅಧ್ಯಕ್ಷ ಸತೀಶ್ ತಿಳಿಸಿದ್ದಾರೆ.

Related Stories

No stories found.
Kannada Bar & Bench
kannada.barandbench.com