[ರಾಷ್ಟ್ರದ್ರೋಹ ಪ್ರಕರಣ] ವಿದ್ಯಾರ್ಥಿಗಳ ವಿಚಾರಣೆ ನಡೆಸಿದ್ದ ಪೊಲೀಸರ ವಿರುದ್ಧ ಕ್ರಮ: ಹೈಕೋರ್ಟ್‌ಗೆ ಸರ್ಕಾರದ ವಿವರಣೆ

ಪೌರತ್ವ ತಿದ್ದುಪಡಿ ಕಾಯಿದೆಗೆ (ಸಿಎಎ) ಸಂಬಂಧಿಸಿದಂತೆ ಕಳೆದ ವರ್ಷ ಬೀದರ್‌ನ ಶಾಹೀನ್‌ ಶಾಲೆಯ ವಿದ್ಯಾರ್ಥಿಗಳು ನಾಟಕ ಪ್ರಸ್ತುತಪಡಿಸಿದ್ದಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ವಿದ್ಯಾರ್ಥಿಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದರು.
Bidar sedition case and Karnataka HC
Bidar sedition case and Karnataka HC

ಬೀದರ್‌ನ ಶಾಹೀನ್‌ ಶಾಲೆಯಲ್ಲಿ ಸಮವಸ್ತ್ರ ಧರಿಸಿ ಮತ್ತು ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು 4, 5 ಮತ್ತು 6ನೇ ತರಗತಿ ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿದ್ದ ತಪ್ಪಿತಸ್ಥ ಪೊಲೀಸ್‌ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರವು ಶುಕ್ರವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ.

ಬೀದರ್‌ನ ಶಾಹೀನ್‌ ಶಾಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯಿದೆಗೆ (ಸಿಎಎ) ಸಂಬಂಧಿಸಿದಂತೆ ಕಳೆದ ವರ್ಷ ಮಕ್ಕಳು ಪ್ರಸ್ತುತಪಡಿಸಿದ್ದ ನಾಟಕವನ್ನು ಆಧಾರವಾಗಿಸಿಕೊಂಡು ಶಾಲೆಯ ವಿರುದ್ಧ ದಾಖಲಿಸಲಾಗಿದ್ದ ರಾಷ್ಟ್ರದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಚಾರಣೆ ನಡೆಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತು ರಾಜ್‌ ಅವಸ್ಥಿ ಮತ್ತು ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್‌ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

“ಪೊಲೀಸ್‌ ಸಮವಸ್ತ್ರ ಧರಿಸಿ ಮತ್ತು ಶಸ್ತ್ರಾಸ್ತ್ರಗಳನ್ನು ಹಿಡಿದು ಮಕ್ಕಳನ್ನು ವಿಚಾರಣೆಗೆ ಒಳಪಡಿಸಿದ್ದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ದಿನದಂತ್ಯಕ್ಕೆ ಮೆಮೊ ಸಲ್ಲಿಸಲಾಗುವುದು. ಮೂರ್ನಾಲ್ಕು ದಿನಗಳಲ್ಲಿ ಅನುಪಾಲನಾ ವರದಿ ಸಲ್ಲಿಸಲಾಗುವುದು. ಸುತ್ತೋಲೆಯಲ್ಲಿ ಎರಡನೇ ನಿರ್ದೇಶನವಾದ ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಮಾದರಿ ನಿಯಮಗಳು 2016 ಅನ್ನು ಕಡ್ಡಾಯವಾಗಿ ಪಾಲಿಸಬೇಕು ಎಂಬುದಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ಪೊಲೀಸ್‌ ಠಾಣೆಗಳಿಗೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರು ಸುತ್ತೋಲೆ ಕಳುಹಿಸಿದ್ದಾರೆ. ಈ ಘಟನೆ ಮುಂದೆ ಮರುಕಳಿಸುವುದಿಲ್ಲ” ಎಂದು ಸರ್ಕಾರಿ ವಕೀಲರು ಪೀಠಕ್ಕೆ ತಿಳಿಸಿದರು.

ಇದನ್ನು ಆಧರಿಸಿ ನ್ಯಾಯಾಲಯವು “ತಪ್ಪಿತಸ್ಥ ಪೊಲೀಸ್‌ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಮಾದರಿ ನಿಯಮಗಳು 2016 ಅನ್ನು ಕಡ್ಡಾಯವಾಗಿ ಪಾಲಿಸಬೇಕು ಎಂಬುದಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ಪೊಲೀಸ್‌ ಠಾಣೆಗಳಿಗೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರು ಸುತ್ತೋಲೆ ಕಳುಹಿಸಿದ್ದಾರೆ ಎಂದು ತಿಳಿಸಲಾಗಿದೆ… ಈ ಸಂಬಂಧ ಮೂರು ವಾರಗಳಲ್ಲಿ ಅನುಪಾಲನಾ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಬೇಕು” ಎಂದು ಪೀಠ ಆದೇಶದಲ್ಲಿ ಹೇಳಿದೆ. ಅಲ್ಲದೇ ವಿಚಾರಣೆಯನ್ನು ಡಿಸೆಂಬರ್‌ 1ಕ್ಕೆ ಮುಂದೂಡಿದೆ.

ವಿಚಾರಣೆ ಆರಂಭವಾಗುತ್ತಿದ್ದಂತೆ ಅರ್ಜಿದಾರರ ಪರ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌ ಅವರು ಪೀಠ ಹಿಂದೆ ಹೊರಡಿಸಿದ್ದ ವಿಸ್ತೃತ ಆದೇಶವನ್ನು ನೆನಪಿಸಿದರು. “ನ್ಯಾಯಾಲಯದ ಹಿಂದಿನ ಆದೇಶಕ್ಕೆ ಸಂಬಂಧಿಸಿದಂತೆ ಯಾವುದೇ ಅಫಿಡವಿಟ್‌ ಸಲ್ಲಿಸಲಾಗಿಲ್ಲ. ಯಾವುದೇ ಹೇಳಿಕೆಯನ್ನೂ ನಮಗೆ ನೀಡಲಾಗಿಲ್ಲ” ಎಂದರು.

Also Read
ಸಮವಸ್ತ್ರ ಧರಿಸಿ ವಿದ್ಯಾರ್ಥಿಗಳ ವಿಚಾರಣೆ: ವಿವರ ಐಜಿಪಿಗೆ ರವಾನಿಸಲಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ಗೆ ಮಾಹಿತಿ

ಶಾಹೀನ್‌ ಶಾಲೆಯಲ್ಲಿ ಸಿಎಎ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿಗೆ (ಎನ್‌ಆರ್‌ಸಿ) ಸಂಬಂಧಿಸಿದಂತೆ 4, 5 ಮತ್ತು ಆರನೇ ತರಗತಿ ವಿದ್ಯಾರ್ಥಿಗಳಿಂದ ಪ್ರಸ್ತುತಪಡಿಸಲಾದ ನಾಟಕದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ನಿಂದಿಸುವ ಸಂಭಾಷಣೆ ಇತ್ತು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಸದಸ್ಯರೊಬ್ಬರು ದೂರು ದಾಖಲಿಸಿದ್ದರು. ಸಂಸತ್‌ನಲ್ಲಿ ಒಪ್ಪಿಗೆ ಪಡೆದ ಸಿಎಎ ವಿರುದ್ಧ ಮಕ್ಕಳಲ್ಲಿ ತಪ್ಪು ಮಾಹಿತಿ ಬಿತ್ತಲು ಶಾಲಾ ಆಡಳಿತ ಪ್ರಯತ್ನಿಸಿದ್ದು, ಈ ಮೂಲಕ ಕೋಮು ಪ್ರಚೋದನೆಗೆ ನಾಂದಿ ಹಾಡಿದೆ ಎಂದು ದೂರಿನಲ್ಲಿ ಪ್ರಮುಖವಾಗಿ ಆರೋಪಿಸಲಾಗಿತ್ತು. ಇದನ್ನು ಆಧರಿಸಿ ಪೊಲೀಸರು ಮಕ್ಕಳ ವಿಚಾರಣೆ ನಡೆಸಿದ್ದರು.

ವಿಚಾರಣೆಯ ಹಂತದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಮತ್ತು ವಿದ್ಯಾರ್ಥಿಯೊಬ್ಬರ ತಾಯಿಯನ್ನು ಬಂಧಿಸಲಾಗಿತ್ತು. ಆನಂತರ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಬೀದರ್‌ನ ಜಿಲ್ಲಾ ನ್ಯಾಯಾಲಯವು ಶಾಹೀನ್‌ ಶಾಲೆಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

Related Stories

No stories found.
Kannada Bar & Bench
kannada.barandbench.com