
ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಂಚಿಕೆ ಅಕ್ರಮ ಹಗರಣದ ಹಿನ್ನೆಲೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ದಟ್ಟಗಳ್ಳಿಯಲ್ಲಿರುವ ಜಮೀನನ್ನು ಜಾರಿ ನಿರ್ದೇಶನಾಲಯ (ಇ ಡಿ) ಜಪ್ತಿ ಮಾಡಿದ್ದು, ಸದ್ಯ ಈ ಕುರಿತು ಯಾವುದೇ ಆತುರದ ಕ್ರಮಕ್ಕೆ ಮುಂದಾಗಬಾರದು ಎಂದು ಕರ್ನಾಟಕ ಹೈಕೋರ್ಟ್ ಬುಧವಾರ ಇ ಡಿಗೆ ನಿರ್ದೇಶಿಸಿದೆ.
ಜಾರಿ ನಿರ್ದೇಶನಾಲಯ ಕ್ರಮದ ವಿರುದ್ಧ ವಿದ್ಯಾರಣ್ಯಪುರಂನಲ್ಲಿರುವ ಚಾಮುಂಡೇಶ್ವರಿ ನಗರ ಸರ್ವೋದಯ ಸಂಘದ ಕಾರ್ಯದರ್ಶಿ ಭೋಜರಾಜ ಅವರು ಸಲ್ಲಿಸಿರುವ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯ ಭಾಗವಾಗಿ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್ ಮತ್ತು ಕೆ ವೆಂಟಕೇಶ್ ನಾಯ್ಕ್ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು “ಸಂಘದ ಸದಸ್ಯರಿಗೆ ನಿವೇಶನ ಹಂಚಿಕೆ ಸಂಬಂಧಿಸಿದಂತೆ ಮುಡಾ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣ ಬಾಕಿಯಿರುವಾಗ ಜಾರಿ ನಿರ್ದೇಶನಾಲಯವು ಇಡೀ ಬಡಾವಣೆಗಾಗಿ ಗುರುತಿಸಿದ್ದ ಜಾಗವನ್ನು ಜಪ್ತಿ ಮಾಡಿದೆ. ಹೀಗಾಗಿ ಜಫ್ತಿ ಆದೇಶವನ್ನು ರದ್ದುಗೊಳಿಸಬೇಕು” ಎಂದು ಪೀಠಕ್ಕೆ ಮನವಿ ಮಾಡಿದರು.
ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠವು ಪ್ರತಿವಾದಿ ಇ ಡಿ ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ, ಜಫ್ತಿ ಕ್ರಮಗಳ ಬಗ್ಗೆ ವಿವರಣೆ ನೀಡುವಂತೆ ಸೂಚಿಸಿದೆ.
ಮುಡಾದಿಂದ ನಿವೇಶನ ಹಂಚಿಕೆ ಮಾಡುವುದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶ ಪಾಲನೆ ಮಾಡಿಲ್ಲ ಎಂದು ಚಾಮುಂಡೇಶ್ವರಿ ನಗರ ಸರ್ವೋದಯ ಸಂಘವು ಮುಡಾ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದೆ.