ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯದಿಂದ (ಇ ಡಿ) ಬಂಧನಕ್ಕೊಳಗಾಗಿದ್ದ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರ ಬಿಡುಗಡೆಗಾಗಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆಗೆ ಶೀಘ್ರವೇ ವಿಸ್ತೃತ ಪೀಠ ರಚಿಸುವಂತೆ ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ತಿಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇ ಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ದೀಪಂಕರ್ ದತ್ತ ಅವರಿದ್ದ ಪೀಠ ಈ ವಿಚಾರ ತಿಳಿಸಿತು.
ಬಾಲಾಜಿ ಅವರ ಪತ್ನಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ವಿಚಾರಣೆಗೆ ಒಳಪಡಿಸುವಲ್ಲಿ ಮದ್ರಾಸ್ ಹೈಕೋರ್ಟ್ ಎಡವಿದೆ ಎಂದು ಸುಪ್ರೀಂ ಕೋರ್ಟ್‌ಗೆ ಇ ಡಿ ಅರ್ಜಿ ಸಲ್ಲಿಸಿತ್ತು. ಬಾಲಾಜಿ ಅವರನ್ನು ಬೈಪಾಸ್ ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿ ನೀಡಿದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಅದು ಪ್ರಶ್ನಿಸಿತ್ತು.
ಬಂಧಿತರಾಗಿರುವ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರ ಬಿಡುಗಡೆಗೆ ಆದೇಶಿಸಬಹುದೇ ಎಂಬ ಪ್ರಶ್ನೆಗೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆ ಮದ್ರಾಸ್ ಹೈಕೋರ್ಟ್ ಭಿನ್ನ ತೀರ್ಪು ನೀಡಿತ್ತು. ಹಾಗಾಗಿ, ವಿಸ್ತೃತ ಪೀಠ ರಚನೆಗಾಗಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ಮುಂದೆ ಪ್ರಕರಣ ಇರಿಸಬೇಕಾಗುತ್ತದೆ. ಇಂದು ಬೆಳಿಗ್ಗೆ ನಡೆದ ಬೆಳವಣಿಗೆಗಳನ್ನು ಭಾರತದ ಸಾಲಿಸಿಟರ್ ಜನರಲ್ (ಎಸ್‌ಜಿಐ) ತುಷಾರ್ ಮೆಹ್ತಾ ಅವರು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.
ನಂತರ ಸರ್ವೋಚ್ಚ ನ್ಯಾಯಾಲಯ ಪ್ರಕರಣವನ್ನು ಶೀಘ್ರವೇ ವಿಸ್ತೃತ ಪೀಠಕ್ಕೆ ವರ್ಗಾಯಿಸುವಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ ವಿ ಗಂಗಾಪುರವಾಲಾ ಅವರಿಗೆ ತಿಳಿಸಿತು. ನಿಯೋಜಿತ ಪೀಠ ಆದಷ್ಟು ಬೇಗ ಪ್ರಕರಣ ಇತ್ಯರ್ಥಪಡಿಸಬೇಕು ಎಂದು ಕೂಡ ತಿಳಿಸಿದ ಅದು ಇ ಡಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜುಲೈ 24ಕ್ಕೆ ಮುಂದೂಡಿತು.
ಸುಪ್ರೀಂ ಕೋರ್ಟ್‌ನಲ್ಲಿರುವ ಅರ್ಜಿ ಬಾಕಿ ಇರುವುದು ಮದ್ರಾಸ್ ಹೈಕೋರ್ಟ್‌ನ ವಿಚಾರಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.