ಕಮಲಾನಗರ, ಹುಲಸೂರ, ಚಿಟಗುಪ್ಪ ತಾಲ್ಲೂಕುಗಳಲ್ಲಿ ಸಿವಿಲ್ ನ್ಯಾಯಾಲಯ ಸ್ಥಾಪನೆ: ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ತಾಲ್ಲೂಕುಗಳ ಕೇಂದ್ರ ಸ್ಥಳಗಳನ್ನು ನಿಗದಿಪಡಿಸುವುದು, ನ್ಯಾಯಾಲಯಗಳನ್ನು ಸ್ಥಾಪಿಸುವುದು ಸರ್ಕಾರದ ನೀತಿ ನಿರ್ಧಾರದ ಭಾಗವಾಗಿದೆ. ಈ ನಿಟ್ಟಿನಲ್ಲಿ ನ್ಯಾಯಾಲಯವು ನಿರ್ದೇಶನ ನೀಡಲಾಗದು ಎಂದ ಹೈಕೋರ್ಟ್‌.
High Court of Karnataka
High Court of Karnataka
Published on

ಬೀದರ್ ಜಿಲ್ಲೆಯಲ್ಲಿ ಹೊಸದಾಗಿ ರಚನೆಯಾಗಿರುವ ಕಮಲಾನಗರ, ಹುಲಸೂರ ಮತ್ತು ಚಿಟಗುಪ್ಪ ತಾಲ್ಲೂಕುಗಳಲ್ಲಿ ಸಿವಿಲ್ ನ್ಯಾಯಾಲಯಗಳನ್ನು ಸ್ಥಾಪಿಸಬೇಕು ಎಂಬ ಮನವಿಯನ್ನು 10 ವಾರಗಳಲ್ಲಿ ಕಾನೂನು ಪ್ರಕಾರ ಪರಿಗಣಿಸುವಂತೆ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ನಿರ್ದೇಶಿಸಿದೆ.

ಬೀದರ್ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತ ಗುರುನಾಥ್ ವಡ್ಡೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್‌ ಅವರ ನೇತೃತ್ವದ ವಿಭಾಗೀಯ ಪೀಠವು ಸೂಚನೆ ನೀಡಿ ಅರ್ಜಿ ಇತ್ಯರ್ಥಪಡಿಸಿತು.

ಇದಕ್ಕೂ ಮುನ್ನ, ಕೆಲ ಕಾಲ ಅರ್ಜಿ ಆಲಿಸಿದ ಪೀಠವು ತಾಲ್ಲೂಕುಗಳ ಕೇಂದ್ರ ಸ್ಥಳಗಳನ್ನು ನಿಗದಿಪಡಿಸುವುದು, ನ್ಯಾಯಾಲಯಗಳನ್ನು ಸ್ಥಾಪಿಸುವುದು ಸರ್ಕಾರದ ನೀತಿ ನಿರ್ಧಾರದ ಭಾಗವಾಗಿದೆ. ಈ ನಿಟ್ಟಿನಲ್ಲಿ ನ್ಯಾಯಾಲಯವು ನಿರ್ದೇಶನ ನೀಡಲಾಗದು. ಹಾಗಾಗಿ, ಅರ್ಜಿ ವಜಾಗೊಳಿಸಬೇಕಾಗುತ್ತದೆ ಎಂದು ಹೇಳಿತು.

ಅರ್ಜಿದಾರರ ಪರ ವಕೀಲ ಜಿ ಆರ್ ಮೋಹನ್ ಅವರು “ಈ ವಿಚಾರವಾಗಿ ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳು ಪರಿಗಣಿಸುವಂತೆ ನ್ಯಾಯಾಲಯ ನಿರ್ದೇಶನ ನೀಡಬೇಕು” ಎಂದು ಕೋರಿದರು.

ಅದಕ್ಕೆ ಒಪ್ಪಿದ ಪೀಠವು ಅರ್ಜಿದಾರರು 2023ರ ಅಕ್ಟೋಬರ್‌ 4ರಂದು ಸಲ್ಲಿಸಿರುವ ಮನವಿಯನ್ನು ಕಾನೂನು ರೀತಿ ಪ್ರಕಾರ 10 ವಾರಗಳಲ್ಲಿ ಪರಿಗಣಿಸಬೇಕು ಎಂದು ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಸೂಚಿಸಿ ಅರ್ಜಿ ಇತ್ಯರ್ಥಪಡಿಸಿತು.

Kannada Bar & Bench
kannada.barandbench.com