ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಮುಕ್ತಗೊಳಿಸಲು ಕೋರಿ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ

ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಕೋರಿ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ವಿಶೇಷ ನ್ಯಾಯಾಲಯ.
Suraj Revanna and Bengaluru's city civil court
Suraj Revanna and Bengaluru's city civil court
Published on

ಸ್ವಪಕ್ಷದ ಕಾರ್ಯಕರ್ತನ ಮೇಲಿನ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಆರೋಪಮುಕ್ತಗೊಳಿಸುವಂತೆ ಕೋರಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದ ಕ್ರಿಮಿನಲ್ ಮರುಪರಿಶೀಲನಾ‌ ಅರ್ಜಿಯನ್ನು ಬೆಂಗಳೂರಿನ ಜನಪ್ರತಿ‌ನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಕೋರಿ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಇತ್ತೀಚೆಗೆ ವಜಾಗೊಳಿಸಿದ್ದಾರೆ.

ಕ್ರಿಮಿನಲ್ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಲಾಗಿದೆ. ಬೆಂಗಳೂರಿನ 42ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ (ಎಸಿಜೆಎಂ) ನ್ಯಾಯಾಲಯ 2025ರ ನವೆಂಬರ್ 28ರಂದು ಹೊರಡಿಸಿರುವ ಆದೇಶವನ್ನು ದೃಢೀಕರಿಸಲಾಗಿದೆ. ಈ ಆದೇಶದ ಪ್ರತಿಯನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ರವಾನಿಸಲು ಕಚೇರಿಗೆ ನಿರ್ದೇಶಿಸಲಾಗಿದೆ ಎಂದು ವಿಶೇಷ ನ್ಯಾಯಾಲಯದ ಆದೇಶದಲ್ಲಿ ಹೇಳಲಾಗಿದೆ.

ಪ್ರಕರಣದ ಹಿನ್ನೆಲೆ: ಜೆಡಿಎಸ್‌ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಸೂರಜ್‌ ರೇವಣ್ಣ ವಿರುದ್ಧ 2024ರ ಜೂನ್ 22ರಂದು ಹೊಳೆನರಸೀಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ಸೂರಜ್‌ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಬಳಿಕ ಪ್ರಕರಣವನ್ನು ಸಿಐಡಿ ಎಸ್ಐಟಿ ತನಿಖೆಗೆ ವಹಿಸಲಾಗಿತ್ತು. ಈ ಮಧ್ಯೆ ಸೂರಜ್‌ ರೇವಣ್ಣ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

Also Read
ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್‌ ನಿರೀಕ್ಷಣಾ ಜಾಮೀನು ಆದೇಶ ಕಾಯ್ದಿರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ

ಪ್ರಕರಣದ ತನಿಖೆ ನಡೆಸಿದ್ದ ಎಸ್ಐಟಿ ಅಧಿಕಾರಿಗಳು, ಸೂರಜ್‌ ವಿರುದ್ಧದ ಆರೋಪ ಸಾಬೀತುಪಡಿಸಲು ಸಾಕ್ಷ್ಯಾಧಾರಗಳ ಕೊರತೆ ಮುಂದಿಟ್ಟು ನ್ಯಾಯಾಲಯಕ್ಕೆ ಬಿ ರಿಪೋರ್ಟ್‌ ಸಲ್ಲಿಸಿದ್ದರು. ಬಿ ವರದಿಯನ್ನು ತಿರಸ್ಕರಿಸಿದ್ದ ನ್ಯಾಯಾಲಯ, ತನಿಖೆ ಮುಂದುವರಿಸಿ ತನಿಖಾ ವರದಿ ಸಲ್ಲಿಸುವಂತೆ ಎಸ್‌ಐಟಿ ತನಿಖಾಧಿಕಾರಿಗಳಿಗೆ ಸೂಚಿಸಿತ್ತು. ಜತೆಗೆ, ಪ್ರಕರಣದಿಂದ ಕೈಬಿಡುವಂತೆ ಕೋರಿ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನೂ 2025ರ ನವೆಂಬರ್ 28ರಂದು 42ನೇ ಎಸಿಜೆಎಂ ನ್ಯಾಯಾಲಯ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸೂರಜ್ ರೇವಣ್ಣ ಕ್ರಿಮಿನಲ್ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಇದೀಗ ಎಸಿಜೆಎಂ ನ್ಯಾಯಾಲಯದ ಆದೇಶವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎತ್ತಿಹಿಡಿದಿದೆ.

Kannada Bar & Bench
kannada.barandbench.com