Suraj Revanna
Suraj Revanna

ಯುವಕನಿಗೆ ಲೈಂಗಿಕ ಕಿರುಕುಳ ಪ್ರಕರಣ: ಸೂರಜ್‌ಗೆ ಜಾಮೀನು ನಿರಾಕರಿಸಿದ ಜನಪ್ರತಿನಿಧಿಗಳ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ

ಶಾಸಕ ಎಚ್‌ ಡಿ ರೇವಣ್ಣರ ಹಿರಿಯ ಪುತ್ರನಾದ ಸೂರಜ್‌ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಜುಲೈ 4ರಂದು ಪೂರ್ಣಗೊಳಿಸಿ, ಕಾಯ್ದಿರಿಸಿದ್ದ ಆದೇಶವನ್ನು ಇಂದು ಪ್ರಕಟಿಸಿದ ನ್ಯಾಯಾಲಯ.
Published on

ಯುವಕನೊಬ್ಬನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಂಧನದಲ್ಲಿರುವ ವಿಧಾನ ಪರಿಷತ್‌ನ ಜೆಡಿಎಸ್‌ ಸದಸ್ಯ ಸೂರಜ್‌ ರೇವಣ್ಣಗೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಮಂಗಳವಾರ ಜಾಮೀನು ನಿರಾಕರಿಸಿದೆ.

ಶಾಸಕ ಎಚ್‌ ಡಿ ರೇವಣ್ಣರ ಹಿರಿಯ ಪುತ್ರನಾದ ಸೂರಜ್‌ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಜುಲೈ 4ರಂದು ಪೂರ್ಣಗೊಳಿಸಿ, ಕಾಯ್ದಿರಿಸಿದ್ದ ಆದೇಶವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮ್ಯಾಜಿಸ್ಟ್ರೇಟ್‌ ಕೆ ಎನ್‌ ಶಿವಕುಮಾರ್‌ ಅವರು ಇಂದು ಪ್ರಕಟಿಸಿದರು. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.

ಸಿಐಡಿ ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್‌ ನಾಯ್ಕ್‌ ಅವರು “ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್‌, ದೂರುದಾರರ ನಡುವಿನ ಕರೆ ದಾಖಲೆ ಸಲ್ಲಿಸಲಾಗಿದೆ. ಮೊದಲ ಪ್ರಕರಣದಲ್ಲಿ ಸಾಕ್ಷಿಯಾಗಿರುವ ವ್ಯಕ್ತಿ (ಶಿವಕುಮಾರ್)‌ ಸೂರಜ್‌ ವಿರುದ್ಧ ದೂರು ನೀಡಿದ್ದಾರೆ. ಕೋಟ್ಯಂತರ ರೂಪಾಯಿ ಹಣವನ್ನು ಸೂರಜ್‌ ಆಮಿಷ ಒಡ್ಡಿದ್ದಾರೆ. ಸೂರಜ್‌ ಕುಟುಂಬ ರಾಜಕೀಯವಾಗಿ ಬಲಾಢ್ಯವಾಗಿದ್ದು, ಅವರಿಗೆ ಜಾಮೀನು ಮಂಜೂರು ಮಾಡಿದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ” ಎಂದು ಜಾಮೀನಿಗೆ ಆಕ್ಷೇಪಿಸಿದ್ದರು.

ಅರ್ಜಿದಾರರ ಪರ ಹಿರಿಯ ವಕೀಲ ಎಂ ಅರುಣ್‌ ಶ್ಯಾಮ್‌ ಅವರು “ಘಟನೆ ನಡೆದು ಸಾಕಷ್ಟು ತಿಂಗಳ ಬಳಿಕ ತಡವಾಗಿ ಎಫ್‌ಐಆರ್‌ ದಾಖಲಿಸಲಾಗಿದೆ. ಇದು ರಾಜಕೀಯಪ್ರೇರಿತ. ಚುನಾವಣೆಯ ಸಂದರ್ಭದಲ್ಲಿ ನಿರ್ದಿಷ್ಟ ಕುಟುಂಬವನ್ನು ಗುರಿಯಾಗಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ. ಮ್ಯಾಜಿಸ್ಟ್ರೇಟ್‌ ಅವರು ವಿಚಾರಣೆ ನಡೆಸಬೇಕಿರುವುದರಿಂದ ಜಾಮೀನು ನೀಡುವುದಕ್ಕೆ ಯಾವುದೇ ಅಡ್ಡಿಯಾಗದು” ಎಂದು ವಾದಿಸಿದ್ದರು.

ಪ್ರಕರಣದ ಹಿನ್ನೆಲೆ: ಸೂರಜ್‌ ವಿರುದ್ಧ ಯುವಕನೊಬ್ಬ ಸಲ್ಲಿಸಿದ್ದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 377 (ಅನೈಸರ್ಗಿಕ ಅಪರಾಧ), 342 (ಅಕ್ರಮ ಬಂಧನಕ್ಕಾಗಿ ದಂಡನೆ), 506 (ಬೆದರಿಕೆ), 34 (ಏಕೋದ್ದೇಶಕ್ಕಾಗಿ ವಿವಿಧ ವ್ಯಕ್ತಿಗಳು ಎಸಗಿದ ಕೃತ್ಯ) ಅಡಿ ಎಫ್‌ಐಆರ್‌ ದಾಖಲಿಸಲಾಗಿದೆ.

Also Read
ಯುವಕನಿಗೆ ಲೈಂಗಿಕ ಕಿರುಕುಳ ಪ್ರಕರಣ: ಸೂರಜ್‌ ಜಾಮೀನು ಆದೇಶ ಜುಲೈ 6ಕ್ಕೆ

ಚನ್ನರಾಯಪಟ್ಟಣ ತಾಲ್ಲೂಕಿನ ಗನ್ನಿಗಡ ತೋಟದ ಮನೆಯಲ್ಲಿ ತನ್ನೊಂದಿಗೆ ಸೂರಜ್‌ ರೇವಣ್ಣ ಬಲವಂತದ ಲೈಂಗಿಕ ಕ್ರಿಯೆ ನಡೆಸಿದ್ದಾರೆ ಎಂದು ಯುವಕ ಪೊಲೀಸ್‌ ಮಹಾ ನಿರ್ದೇಶಕರು ಹಾಗೂ ಗೃಹ ಸಚಿವರಿಗೆ ದೂರು ನೀಡಿದ್ದರು. ಹನುಮನಹಳ್ಳಿ ಗ್ರಾಮದ ಶಿವಕುಮಾರ್ ಮತ್ತು ಸೂರಜ್ ರೇವಣ್ಣ ಅವರಿಂದ ತಮಗೆ ಹಾಗೂ ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ಯುವಕ ಮನವಿ ಮಾಡಿದ್ದರು.

ಹೊಳೆನರಸೀಪುರ ಗ್ರಾಮಾಂತರ ಪೊಲೀಸ್‌ ಠಾಣೆಗೆ ಪ್ರಕರಣ ವರ್ಗಾಯಿಸಲಾಗಿತ್ತು. ಅದರಂತೆ ದೂರುದಾರನಿಂದ ಹೇಳಿಕೆ ಪಡೆದು ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿತ್ತು. ಸೂರಜ್‌ ಅವರ ಬಂಧನವಾದ ಕೆಲ ಗಂಟೆಗಳ ಬಳಿಕ ಪ್ರಕರಣವನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು.

Kannada Bar & Bench
kannada.barandbench.com