ಮೈಸೂರಿನಲ್ಲಿರುವ ಚಿತ್ರದುರ್ಗದ ಮುರುಘಾ ಮಠದ ಉಚಿತ ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯಿದೆ (ಪೋಕ್ಸೊ) ಅಡಿ ನಾಡಿನ ಪ್ರತಿಷ್ಠಿತ ಸ್ವಾಮೀಜಿಗಳಲ್ಲಿ ಒಬ್ಬರಾದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಶುಕ್ರವಾರ ಎಫ್‌ಐಆರ್ ದಾಖಲಾಗಿದೆ.
ಮೈಸೂರು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಸಿ ಚಂದ್ರಕುಮಾರ್ ಅವರ ದೂರು ಆಧರಿಸಿ ನಜಾರಾಬಾದ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಪ್ರಕರಣದಲ್ಲಿ ಡಾ. ಶಿವಮೂರ್ತಿ ಮುರುಘಾ ಶರಣರು ಮೊದಲ ಆರೋಪಿಯಾಗಿದ್ದು, ಚಿತ್ರದುರ್ಗದಲ್ಲಿನ ಅಕ್ಕಮಹಾದೇವಿ ವಸತಿ ನಿಲಯದ ವಾರ್ಡನ್ ರಶ್ಮಿ ಹಾಗೂ ಮಠದ ಬಸವಾದಿತ್ಯ (ಮರಿಸ್ವಾಮಿ) ಅವರು ಕ್ರಮವಾಗಿ ಎರಡು ಮತ್ತು ಮೂರನೇ ಆರೋಪಿಗಳಾಗಿದ್ದಾರೆ. ಮಠದ ಜೊತೆಗೆ ನಿಕಟ ಸಂಪರ್ಕ ಹೊಂದಿರುವ ಮೈಸೂರಿನ ಪರಮಶಿವಯ್ಯ ಮತ್ತು ವಕೀಲ ಗಂಗಾಧರಯ್ಯ ಅವರು ನಾಲ್ಕು ಮತ್ತು ಐದನೇ ಆರೋಪಿಗಳಾಗಿದ್ದಾರೆ.
“ಸಂತ್ರಸ್ತೆಯಾಗಿರುವ ಇಬ್ಬರು ವಿದ್ಯಾರ್ಥಿನಿಯರ ಪೈಕಿ ಒಬ್ಬರನ್ನು ಸ್ವಾಮೀಜಿಯ ಮೂರೂವರೆ ವರ್ಷಗಳಿಂದ ಮತ್ತೊಬ್ಬರಿಗೆ ಒಂದೂವರೆ ವರ್ಷದಿಂದ ಲೈಂಗಿಕ ಕಿರುಕುಳ ನೀಡಿದ್ದಾರೆ. ಇದಕ್ಕೆ ಉಳಿದ ಆರೋಪಿಗಳು ಸಹಕರಿಸಿದ್ದಾರೆ ಎಂದು ಪ್ರೌಢಶಾಲೆಯ ವಿದ್ಯಾರ್ಥಿನಿಯರು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಆಪ್ತ ಸಮಾಲೋಚನೆ ಸಮಯದಲ್ಲಿ ಹೇಳಿಕೆ ನೀಡಿದ್ದಾರೆ” ಎಂದು ದೂರಿನಲ್ಲಿ ವಿವರಿಸಲಾಗಿದೆ.
ಸಂತ್ರಸ್ತ ಬಾಲಕಿಯರು ಮೈಸೂರಿನ ಒಡನಾಡಿ ಸಂಸ್ಥೆಯಲ್ಲಿ ಆಶ್ರಯ ಪಡೆದಿದ್ದು, ಸಮಿತಿಯ ನಿರ್ದೇಶನದ ಮೇರೆಗೆ ರಾತ್ರಿ ದೂರು ದಾಖಲಿಸಲಾಗಿದೆ.