
ಉಡುಪಿಯಲ್ಲಿರುವ ಒಂದನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯವನ್ನು ಬ್ರಹ್ಮಾವರಕ್ಕೆ ಸ್ಥಳಾಂತರ ಮಾಡುವ ಕ್ರಮ ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಹಾಗೂ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕಚೇರಿಗೆ ಕರ್ನಾಟಕ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ.
ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನಾಲ್ಡ್ ಪ್ರವೀಣ್ ಕುಮಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಕೆಲ ಕಾಲ ವಾದ ಆಲಿಸಿದ ಪೀಠವು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್, ಸರ್ಕಾರದ ಕಾನೂನು ಇಲಾಖೆ, ಹಣಕಾಸು ಇಲಾಖೆಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು 2026ರ ಜನವರಿ 9ಕ್ಕೆ ಮುಂದೂಡಿತು.
ಬ್ರಹ್ಮಾವರದಲ್ಲಿ ಶಾಶ್ವತ ನ್ಯಾಯಾಲಯ ಸ್ಥಾಪನೆ ಮಾಡುವ ಕುರಿತ ಪ್ರಸ್ತಾವನೆಗೆ 2022ರಲ್ಲಿ ಕಾನೂನು ಇಲಾಖೆ ಅನುಮೋದಿಸಿದೆ. ಅದನ್ನು ಕಾರ್ಯಗತಗೊಳಿಸುವ ಬದಲು ಉಡುಪಿಯಲ್ಲಿರುವ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯವನ್ನು ಬ್ರಹ್ಮಾವರಕ್ಕೆ ಸ್ಥಳಾಂತರಿಸಲಾಗುತ್ತಿದೆ. ಇದು ಸರ್ಕಾರ ತೀರ್ಮಾನಕ್ಕೆ ವಿರುದ್ಧವಾಗಿದ್ದು, ಉಡುಪಿಯ ಜನರಿಗೂ ಅನಾನುಕೂಲವಾಗಲಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.