
ಶಿವಮೊಗ್ಗ ಡಿಸಿಸಿ ಬ್ಯಾಂಕ್‌ನಲ್ಲಿ ನಕಲಿ ಚಿನ್ನ ಅಡವಿಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಕಾಯಿದೆ (ಪಿಎಂಎಲ್‌ಎ) ಅಡಿ ಬಂಧಿತರಾಗಿರುವ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಆರ್ ಎಂ ಮಂಜುನಾಥಗೌಡ ಅವರು ಸಲ್ಲಿಸಿರುವ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿಗೊಳಿಸಿದೆ.
ಮಂಜುನಾಥಗೌಡ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ರಜಾಕಾಲೀನ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ವಾದ ಆಲಿಸಿದ ಪೀಠವು ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಜೂನ್ 5ಕ್ಕೆ ಮುಂದೂಡಿತು.
ಶಿವಮೊಗ್ಗ ಡಿಸಿಸಿ ಬ್ಯಾಂಕ್ ಗಾಂಧಿ ಬಜಾರ್ ಶಾಖೆಯಲ್ಲಿ 2014ರಲ್ಲಿ ನಡೆದ ₹62.77 ಕೋಟಿ ಬಂಗಾರ ಅಡಮಾನ ಸಾಲದ ಹಗರಣಕ್ಕೆ ಸಂಬಂಧಿಸಿದಂತೆ 2014ರಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ್ದ ಪೊಲೀಸರು 2014ರ ಅಕ್ಟೋಬರ್ 18ರಂದು ವಿಚಾರಣಾಧೀನ ನ್ಯಾಯಾಲಯಕ್ಕೆ ಮೊದಲ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ 1997ರಿಂದ 2020ರವರೆಗೆ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಆರ್ ಎಂ ಮಂಜುನಾಥಗೌಡ ಅವರಿಗೆ 2023ರ ಅಕ್ಟೋಬರ್ 6ರಂದು ಇ ಡಿ ಸಮನ್ಸ್ ಜಾರಿಗೊಳಿಸಿತ್ತು. ಇದನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.