ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಕುರಿತ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಅಂದಿನ ಬಿಜೆಪಿ ಸರ್ಕಾರವು ನಿವೃತ್ತ ಐಎಎಸ್‌ ಅಧಿಕಾರಿ ಪಿ ಎಸ್ ವಸ್ತ್ರದ ಅವರನ್ನು 2022ರ ಡಿಸೆಂಬರ್ 13ರಂದು ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿತ್ತು. ಮುಂದೆ ಈ ಆದೇಶವನ್ನು ಏಕಸದಸ್ಯ ಪೀಠ ರದ್ದುಗೊಳಿಸಿತ್ತು.
Murugha Mutt
Murugha Mutt
Published on

ಚಿತ್ರದುರ್ಗದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠಕ್ಕೆ (ಎಸ್‌ಜೆಎಂ) ರಾಜ್ಯ ಸರ್ಕಾರ ಆಡಳಿತಾಧಿಕಾರಿ ನೇಮಕ ಮಾಡಿದ್ದ ಆದೇಶವನ್ನು ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಲಾದ ಮೇಲ್ಮನವಿ ವಿಚಾರಣೆ ಮುಕ್ತಾಯಗೊಳಿಸಿರುವ ಕರ್ನಾಟಕ ಹೈಕೋರ್ಟ್‌ ಬುಧವಾರ ತೀರ್ಪು ಕಾಯ್ದಿರಿಸಿದೆ.

ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಲಾದ ಒಟ್ಟು ಏಳು ಮೇಲ್ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂಜಿಎಸ್‌ ಕಮಲ್‌ ಅವರ ನೇತೃತ್ವದ ವಿಭಾಗೀಯ ಪೀಠವು ವಿಸ್ತೃತವಾಗಿ ವಾದ-ಪ್ರತಿವಾದ ಆಲಿಸಿ ಆದೇಶ ಕಾಯ್ದಿರಿಸಿತು.

ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಶರಣರು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ) ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಪೊಲೀಸರು 2022ರ ಸೆಪ್ಟೆಂಬರ್ 1ರಂದು ಅವರನ್ನು ಬಂಧಿಸಿದ್ದು ಅಂದಿನಿಂದಲೂ ಅವರು ಚಿತ್ರದುರ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಹೀಗಾಗಿ, ಅಂದಿನ ಬಿಜೆಪಿ ಸರ್ಕಾರವು ನಿವೃತ್ತ ಐಎಎಸ್‌ ಅಧಿಕಾರಿ ಪಿ ಎಸ್ ವಸ್ತ್ರದ ಅವರನ್ನು 2022ರ ಡಿಸೆಂಬರ್ 13ರಂದು ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿತ್ತು. ಅವರು 2022ರ ಡಿಸೆಂಬರ್ 15ರಂದು ಅಧಿಕಾರ ಸ್ವೀಕರಿಸಿದ್ದರು.

Also Read
ರಾಜ್ಯ ಸರ್ಕಾರದಿಂದ ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ

ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಮಠದ ತಾತ್ಕಾಲಿಕ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಮತ್ತು ಭಕ್ತರು, ಹೈಕೋರ್ಟ್‌ ಮೆಟ್ಟಿಲೇರಿದ್ದರು. ರಿಟ್‌ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠವು ಆಡಳಿತಾಧಿಕಾರಿ ನೇಮಕವನ್ನು ರದ್ದುಪಡಿಸಿ, ಮಠಗಳಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲದು ಎಂಬ ಅಭಿಪ್ರಾಯ ವ್ಯಕ್ತಪಡಿಸಿ, ಸರ್ಕಾರದ ಆದೇಶವನ್ನು ರದ್ದುಪಡಿಸಿತ್ತು.

ಸದ್ಯ ಚಿತ್ರದುರ್ಗ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ಮಠದ ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಮೇಲ್ಮನವಿ ಮೇಲಿನ ಅಂತಿಮ ತೀರ್ಪು ಬರುವ ತನಕ ಈ ಆದೇಶ ಜಾರಿಯಲ್ಲಿರುತ್ತದೆ ಎಂದು ವಿಚಾರಣೆ ನಡೆಸುತ್ತಿರುವ ವಿಭಾಗೀಯ ಪೀಠವು 2023ರ ಜುಲೈ 03ರಂದು ಆದೇಶಿಸಿತ್ತು.

Kannada Bar & Bench
kannada.barandbench.com