Energy Minister K J George
Energy Minister K J George

ಸ್ಮಾರ್ಟ್‌ ಮೀಟರ್‌ ಟೆಂಡರ್‌ ಅಕ್ರಮ ಆರೋಪ: ಸಚಿವ ಜಾರ್ಜ್‌ ವಿರುದ್ಧ ಖಾಸಗಿ ದೂರು ದಾಖಲು

ಸ್ಮಾರ್ಟ್‌ ಮೀಟರ್‌ ಸೇವೆ ಒದಗಿಸುವ ನಿಟ್ಟಿನಲ್ಲಿ 2024ರ ಸೆಪ್ಟೆಂಬರ್ 26ರಂದು ಟೆಂಡರ್‌ ಕರೆಯಲಾಗಿತ್ತು. ಬಿಡ್‌ದಾರರಾದ ದಾವಣಗೆರೆಯ ರಾಜಶ್ರೀ ಎಲೆಕ್ಟ್ರಿಕಲ್ಸ್‌ ಎಂಬ ಶೆಲ್‌ ಕಂಪನಿಗೆ ಟೆಂಡರ್‌ ನೀಡಲಾಗಿದೆ ಎಂದು ಆರೋಪ.
Published on

ರಾಜ್ಯದಲ್ಲಿ ಸ್ಮಾರ್ಟ್‌ ಮೀಟರ್‌ ಅಳವಡಿಕೆಗೆ ಸಂಬಂಧಿಸಿದ ಟೆಂಡರ್‌ ಕಾನೂನು ಬಾಹಿರವಾಗಿದೆ ಮತ್ತು ಈ ಟೆಂಡರ್‌ ನೀಡಿಕೆಯಿಂದ ಅಂದಾಜು ₹16 ಸಾವಿರ ಕೋಟಿ ಮೊತ್ತದ ದುರ್ಲಾಭ ಪಡೆಯಲಾಗುತ್ತಿದೆ ಎಂದು ಆರೋಪಿಸಿ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ (ಬೆಸ್ಕಾಂ) ಅಧ್ಯಕ್ಷರೂ ಆದ ಇಂಧನ ಸಚಿವ ಕೆ ಜೆ ಜಾರ್ಜ್ ಮತ್ತಿತರರ ವಿರುದ್ಧ ಬಿಜೆಪಿಯ ಶಾಸಕ ಡಾ.ಸಿ ಎನ್‌ ಅಶ್ವತ್ಥ ನಾರಾಯಣ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.

ಈ ಸಂಬಂಧ ಫಿರ್ಯಾದುದಾರರು ಮತ್ತು ಬಿಜೆಪಿಯ ಶಾಸಕರೂ ಆದ ಡಾ.ಸಿ ಎನ್‌ ಅಶ್ವತ್ಥ ನಾರಾಯಣ, ಎಸ್‌ ಆರ್‌ ವಿಶ್ವನಾಥ್ ಮತ್ತು ಧೀರಜ್‌ ಮುನಿರಾಜು ಪರವಾಗಿ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್‌ ಬುಧವಾರ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದರು. ದೂರನ್ನು ಸ್ವೀಕರಿಸಿದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರು, ದೂರಿಗೆ ಸಂಖ್ಯೆ ನಮೂದಿಸಲು ಕಚೇರಿ ವಿಭಾಗಕ್ಕೆ ನಿರ್ದೇಶಿಸಿ ಗುರುವಾರ (ಜುಲೈ 17) ವಿಚಾರಣೆ ನಡೆಸುವುದಾಗಿ ತಿಳಿಸಿದರು.

ದೂರಿನಲ್ಲಿ ಸಚಿವ ಕೆ ಜೆ ಜಾರ್ಜ್‌, ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಬೆಸ್ಕಾಂ ಮಾಜಿ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಬೆಸ್ಕಾಂನ ತಾಂತ್ರಿಕ ನಿರ್ದೇಶಕ ಎಚ್‌ ಜೆ ರಮೇಶ್‌ ಅವರನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದೆ. ಫಿರ್ಯಾದುದಾರರಾದ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ, ಎಸ್‌ ಆರ್‌ ವಿಶ್ವನಾಥ್ ಮತ್ತು ಧೀರಜ್‌ ಮುನಿರಾಜು ನ್ಯಾಯಾಲಯದಲ್ಲಿ ಖುದ್ದು ಹಾಜರಿದ್ದರು.

Also Read
ಸ್ಮಾರ್ಟ್‌ ಮೀಟರ್ ಮಾರಾಟ, ನಿರ್ವಹಣೆ ಟೆಂಡರ್ ರದ್ದತಿಗೆ ಮನವಿ: ರಾಜ್ಯ ಸರ್ಕಾರ, ಬೆಸ್ಕಾಂಗೆ ಹೈಕೋರ್ಟ್‌ ನೋಟಿಸ್‌

ಸ್ಮಾರ್ಟ್‌ ಮೀಟರ್‌ ಸೇವೆ ಒದಗಿಸುವ ನಿಟ್ಟಿನಲ್ಲಿ 2024ರ ಸೆಪ್ಟೆಂಬರ್ 26ರಂದು ಟೆಂಡರ್‌ ಕರೆಯಲಾಗಿತ್ತು. ಬಿಡ್‌ದಾರರಾದ ದಾವಣಗೆರೆಯ ರಾಜಶ್ರೀ ಎಲೆಕ್ಟ್ರಿಕಲ್ಸ್‌ ಎಂಬ ಶೆಲ್‌ ಕಂಪನಿಗೆ ಟೆಂಡರ್‌ ನೀಡಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಮುಂದುವರೆದು, ಈ ಟೆಂಡರ್‌ ಅನ್ನು ರಾಜ್ಯದಲ್ಲಿ ವಿವಿಧ ಭಾಗಗಳ ವಿದ್ಯುತ್‌ ಸರಬರಾಜು ಕಂಪನಿಗಳಿಗೆ ಪ್ರತ್ಯೇಕ ಟೆಂಡರ್‌ ಕರೆಯದೆ ಬೆಸ್ಕಾಂ ಕಂಪನಿ ಮೂಲಕವೇ ನೇರವಾಗಿ ಟೆಂಡರ್‌ ನೀಡಲಾಗಿದೆ. ಇದರಿಂದ ಅಂದಾಜು ₹16 ಸಾವಿರ ಕೋಟಿ ಮೊತ್ತವನ್ನು ಪಡೆಯುವ ಅಕ್ರಮ ನಡೆದಿದೆ. ಕಾನೂನು ಬಾಹಿರವಾದ ಈ ಪ್ರಕ್ರಿಯೆ ಕರ್ನಾಟಕ ಸಾರ್ವಜನಿಕ ಖರೀದಿಯಲ್ಲಿ ಪಾರದರ್ಶಕತೆ (ಕೆಟಿಪಿಪಿ) ಅಧಿನಿಯಮ-2000 ಹಾಗೂ ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗದ (ಕೆಇಆರ್‌ಸಿ) ನಿಯಮಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದ್ದಾರೆ.

Kannada Bar & Bench
kannada.barandbench.com