CM Siddaramaiah, MUDA, Bengaluru City Civil Court
CM Siddaramaiah, MUDA, Bengaluru City Civil Court

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿರುದ್ಧದ 'ಬಿ' ರಿಪೋರ್ಟ್‌ ಒಪ್ಪಿದ ವಿಶೇಷ ನ್ಯಾಯಾಲಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರ ವಿರುದ್ಧ ಕೇಳಿಬಂದಿದ್ದ ಮುಡಾ ಭ್ರಷ್ಟಾಚಾರ ಹಗರಣದಲ್ಲಿ ಅವರ ಪಾತ್ರವನ್ನು ನಿರೂಪಿಸುವ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎನ್ನುವುದನ್ನು ನ್ಯಾಯಾಲಯ ಒಪ್ಪಿದಂತಾಗಿದೆ.
Published on

ದೇಶದ ಗಮನಸೆಳೆದಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಅಕ್ರಮವಾಗಿ ನಿವೇಶನ ಪಡೆದ ಆರೋಪದ ಸಂಬಂಧಿತ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಬಿ ಎಂ ಪಾರ್ವತಿ ಸೇರಿ ನಾಲ್ವರ ವಿರುದ್ಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ 'ಬಿ' ರಿಪೋರ್ಟ್‌ ಅನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ ಒಪ್ಪಿಕೊಂಡಿದೆ. ಆ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರ ವಿರುದ್ಧ ಕೇಳಿಬಂದಿದ್ದ ಮುಡಾ ಭ್ರಷ್ಟಾಚಾರ ಹಗರಣದಲ್ಲಿ ಅವರ ಪಾತ್ರವನ್ನು ನಿರೂಪಿಸುವ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎನ್ನುವುದನ್ನು ನ್ಯಾಯಾಲಯ ಒಪ್ಪಿದಂತಾಗಿದೆ.

ಬಿ ರಿಪೋರ್ಟ್‌ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಪ್ರತಿಭಟನಾ ಅರ್ಜಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್‌ ಗಜಾನನ್‌ ಭಟ್‌ ತಿರಸ್ಕರಿಸಿದ್ದಾರೆ.

Santhosh Gajanan Bhat Judge, MP/MLA Special Court
Santhosh Gajanan Bhat Judge, MP/MLA Special Court

“ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ ಎಂ ಪಾರ್ವತಿ, ಅವರ ಭಾವಮೈದುನ ಮಲ್ಲಿಕಾರ್ಜುನ ಸ್ವಾಮಿ ಮತ್ತು ಆಕ್ಷೇಪಾರ್ಹವಾದ ಭೂಮಿಯ ಮಾಲೀಕ ಜೆ ದೇವರಾಜ್‌ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್‌ ಒಪ್ಪಿಕೊಳ್ಳಲಾಗಿದೆ. ತನಿಖಾಧಿಕಾರಿ ಉದೇಶ್‌ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಲಾಗಿದೆ. ಬಾಧಿತ ವ್ಯಕ್ತಿಯಾಗಿ ಜಾರಿ ನಿರ್ದೇಶನಾಲಯವು ಮಧ್ಯಪ್ರವೇಶಿಸುವ ಅಧಿಕಾರವನ್ನು ಸೀಮಿತವಾಗಿ ಹೊಂದಿದೆ” ಎಂದು ನ್ಯಾಯಾಲಯವು ಮಹತ್ವದ ಆದೇಶ ಮಾಡಿದೆ.

ಮುಂದುವರಿದು, “ಮುಚ್ಚಿದ ಲಕೋಟೆಯಲ್ಲಿ ಇಟ್ಟಿರುವ ಕರಡು ತನಿಖಾ ಅಂತಿಮ ವರದಿ ಮತ್ತು ಸಿ ಡಿ ದಾಖಲೆಗಳನ್ನು ಸಂಬಂಧಿತ ತನಿಖಾಧಿಕಾರಿಗೆ ನೀಡಲು ಕಚೇರಿಗೆ ನಿರ್ದೇಶಿಸಲಾಗಿದೆ. ಲೋಕಾಯುಕ್ತ ಪೊಲೀಸರು ಅಂತಿಮ ವರದಿ ಸಲ್ಲಿಸಲು ವಿಚಾರಣೆಯನ್ನು ಫೆಬ್ರವರಿ 9ಕ್ಕೆ ಮುಂದೂಡಲಾಗಿದೆ” ಎಂದು ನ್ಯಾಯಾಲಯ ಆದೇಶಿಸಿದೆ.

2025ರ ಫೆಬ್ರವರಿ 20ರಂದು ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ ಎಂ ಪಾರ್ವತಿ, ಭಾವಮೈದ ಮಲ್ಲಿಕಾರ್ಜುನ ಹಾಗೂ ವಿವಾದಿತ ಜಮೀನಿನ ಮೂಲ ಮಾಲೀಕ ಜೆ ದೇವರಾಜು ವಿರುದ್ಧ ಅಪರಾಧ ಸಾಬೀತುಪಡಿಸುವ ಯಾವುದೇ ಅಂಶಗಳಿಲ್ಲ ಎಂಬ ಷರಾ ಬರೆದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ 'ಬಿʼ ರಿಪೋರ್ಟ್‌ ಸಲ್ಲಿಸಿದ್ದರು. ಇದನ್ನು ಪ್ರಶ್ನಿಸಿ 2025ರ ಮಾರ್ಚ್‌ 18ರಂದು ಸ್ನೇಹಮಯಿ ಕೃಷ್ಣ ಅವರು ವಿಶೇಷ ನ್ಯಾಯಾಲಯಕ್ಕೆ ಪ್ರತಿಭಟನಾ ಅರ್ಜಿ ಸಲ್ಲಿಸಿದ್ದರು. 2025ರ ಏಪ್ರಿಲ್‌ 2ರಂದು ವಿಶೇಷ ನ್ಯಾಯಾಲಯಕೆ ಜಾರಿ ನಿರ್ದೇಶನಾಲಯವೂ ಪ್ರತಿಭಟನಾ ಅರ್ಜಿ ಸಲ್ಲಿಸಿತ್ತು.

ರಾಜಕೀಯವಾಗಿ ಮಹತ್ವದ ಪ್ರಕರಣವಾಗಿರುವ ಮುಡಾ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ನೀಡಲು ಕರ್ನಾಟಕ ಹೈಕೋರ್ಟ್ ಕಳೆದ ವರ್ಷ ನಿರಾಕರಿಸಿತ್ತು. ಇದರ ಬೆನ್ನಿಗೇ ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯ ಸೇರಿ ನಾಲ್ವರಿಗೆ ಸೀಮಿತವಾಗಿ ಸಕ್ಷಮ ನ್ಯಾಯಾಲಯಕ್ಕೆ ಬಿ ರಿಪೋರ್ಟ್‌ ಸಲ್ಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಪ್ರಕರಣದ ಹಿನ್ನೆಲೆ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ ಎಂ ಪಾರ್ವತಿ ಅವರು ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸೇರಿ ಐವರು ಆರೋಪಿಗಳ ವಿರುದ್ಧ ವಿಶೇಷ ತನಿಖಾ ದಳ ಅಥವಾ ಬೇರಾವುದೇ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆಗೆ ಆದೇಶಿಸಬೇಕು ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ 2024ರ ಆಗಸ್ಟ್‌ 8ರಂದು ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು. ದೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಭಾವ ಮೈದುನ ಮಲ್ಲಿಕಾರ್ಜುನ ಸ್ವಾಮಿ, ಜೆ ದೇವರಾಜು ಹಾಗೂ ಇತರೆ ಹೆಸರಿನಡಿ ಐವರನ್ನು ಆರೋಪಿಗಳನ್ನಾಗಿಸಲಾಗಿತ್ತು.

ಇದರ ಬೆನ್ನಿಗೇ ರಾಜ್ಯಪಾಲರು ಸಿದ್ದರಾಮಯ್ಯ ಮತ್ತು ಇತರೆ ಆರೋಪಿಗಳ ತನಿಖೆಗೆ ಅನುಮತಿಸಿದ್ದರು. ಇದನ್ನು ಸಿದ್ದರಾಮಯ್ಯ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ರಾಜ್ಯಪಾಲರ ನಿರ್ಣಯ ಹೈಕೋರ್ಟ್‌ ಎತ್ತಿ ಹಿಡಿಯುತ್ತಿದ್ದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸಲು ಆದೇಶಿಸಿತ್ತು. ಇದರ ಅನ್ವಯ 2024ರ ಸೆಪ್ಟೆಂಬರ್‌ 27ರಂದು ಲೋಕಾಯುಕ್ತ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು.

ರಾಜ್ಯಪಾಲರ ನಿರ್ಣಯ ಎತ್ತಿ ಹಿಡಿದಿರುವ ಏಕಸದಸ್ಯ ಪೀಠದ ಆದೇಶವನ್ನು ಸಿದ್ದರಾಮಯ್ಯ ಮತ್ತು ಇತರರು ವಿಭಾಗೀಯ ಪೀಠದಲ್ಲಿ ಮೇಲ್ಮನವಿಯ ಮೂಲಕ ಪ್ರಶ್ನಿಸಿದ್ದಾರೆ. ಆ ಅರ್ಜಿ ವಿಚಾರಣಾ ಹಂತದಲ್ಲಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ತಮಗೆ ಹಂಚಿಕೆ ಮಾಡಲಾಗಿದ್ದ 14 ನಿವೇಶನಗಳನ್ನು ಮುಡಾಕ್ಕೆ ಹಿಂದಿರುಗಿಸಿದ್ದನ್ನು ಇಲ್ಲಿ ನೆನೆಯಬಹುದಾಗಿದೆ.

Kannada Bar & Bench
kannada.barandbench.com