

ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಪಕ್ಷದಿಂದ ಉಚ್ಚಾಟಿತರಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಶಿಕ್ಷೆ ಹಾಗೂ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಹಾಲಿ ಶಾಸಕ ವಿನಯ್ ಕುಲಕರ್ಣಿ, ಅಕ್ರಮ ಅದಿರು ಸಾಗಣೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ರನ್ನು ದೋಷಿ ಎಂದು ತೀರ್ಮಾನಿಸುವ ಮೂಲಕ ಮಹತ್ವದ ತೀರ್ಪು ಪ್ರಕಟಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಸೇರಿದಂತೆ ಒಟ್ಟು 111 ಜಿಲ್ಲಾ ನ್ಯಾಯಾಧೀಶರನ್ನು ಕರ್ನಾಟಕ ಹೈಕೋರ್ಟ್ ಗುರುವಾರ ವರ್ಗಾವಣೆ ಮಾಡಿದೆ.
ಇವರ ಜೊತೆಗೆ ಮೂವರನ್ನು ತಾತ್ಕಾಲಿಕ ಜಿಲ್ಲಾ ನ್ಯಾಯಾಧೀಶರನ್ನಾಗಿ ನೇಮಿಸಲಾಗಿದೆ. ಉಳಿದಂತೆ ಹಿರಿಯ ಸಿವಿಲ್ ನ್ಯಾಯಾಧೀಶರ ಶ್ರೇಣಿಯ 115 ನ್ಯಾಯಾಧೀಶರು ಹಾಗೂ ಸಿವಿಲ್ ನ್ಯಾಯಾಧೀಶರ ಶ್ರೇಣಿಯ 139 ನ್ಯಾಯಾಧೀಶರನ್ನು ರಾಜ್ಯದ ಬೇರೆ ಬೇರೆ ನ್ಯಾಯಾಲಯಗಳಿಗೆ ನೇಮಕ ಮಾಡಿ ವರ್ಗಾಯಿಸಲಾಗಿದೆ.
ಜಿಲ್ಲಾ ನ್ಯಾಯಾಧೀಶರ ಶ್ರೇಣಿಯ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರನ್ನು ಬೆಂಗಳೂರಿನಲ್ಲಿರುವ ಕರ್ನಾಟಕ ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ನ್ಯಾ. ಭಟ್ ಸ್ಥಾನಕ್ಕೆ ಮಂಡ್ಯದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿರುವ ಕೆ ಬಿ ಶಿವಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಉಳಿದಂತೆ ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ ಎಸ್ ಭರತ್ ಕುಮಾರ್ ಅವರನ್ನು ಬೆಂಗಳೂರು ಪ್ರಧಾನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ರಿಜಿಸ್ಟ್ರಾರ್ ಜನರಲ್ ಹುದ್ದೆಗೆ ಬೆಂಗಳೂರು ಪ್ರಧಾನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರಾಗಿದ್ದ ಎಂ ಚಂದ್ರಶೇಖರ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.
ಆಡಳಿತಾತ್ಮಕ ಕಾರಣಗಳಿಗಾಗಿ ವರ್ಗಾವಣೆ ಮಾಡಲಾಗಿದ್ದು, ವರ್ಗಾವಣೆಯಾಗಿರುವ ನ್ಯಾಯಾಧೀಶರು ಸೂಚಿತ ಹುದ್ದೆಗಳಿಗೆ 2026 ಜೂನ್ 1ರ ಬೆಳಿಗ್ಗೆ ವರದಿ ಮಾಡಿಕೊಳ್ಳಲು ಹೈಕೋರ್ಟ್ ಅಧಿಸೂಚನೆಯಲ್ಲಿ ತಿಳಿಸಿದೆ.