ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ ಪ್ರಕರಣ: ಮ್ಯಾಜಿಸ್ಟೀರಿಯಲ್‌ ವಿಚಾರಣೆಗೆ ವಹಿಸಿದ ಸರ್ಕಾರ

ಬೆಂಗಳೂರು ನಗರ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಜಿ ಜಗದೀಶ್‌ ಅವರನ್ನು ವಿಚಾರಣಾಧಿಕಾರಿಯನ್ನಾಗಿ ನೇಮಿಸಿದ್ದು, ಅವರು ಆದೇಶ ಹೊರಡಿಸಿದ ದಿನದಿಂದ 15 ದಿನಗಳ ಒಳಗೆ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಗಡುವು ವಿಧಿಸಲಾಗಿದೆ.
Vidhana Soudha
Vidhana Soudha
Published on

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಐಪಿಎಲ್‌ ಟ್ರೋಫಿ ಜಯಿಸಿದ್ದರ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ವಿಜಯೋತ್ಸವದಲ್ಲಿ ಭಾಗಿಯಾಗಲು ಚಿನ್ನಸ್ವಾಮಿ ಕ್ರೀಡಾಂಗಣದ ವಿವಿಧ ಗೇಟ್‌ಗಳ ಬಳಿ ಅಪಾರ ಸಂಖ್ಯೆಯಲ್ಲಿ ಜನರು ನೆರೆದಿದ್ದಾಗ ಸಂಭವಿಸಿರುವ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟು, 47 ಮಂದಿ ಗಾಯಗೊಂಡಿರುವ ಪ್ರಕರಣವನ್ನು ರಾಜ್ಯ ಸರ್ಕಾರವು ಬುಧವಾರ ಮ್ಯಾಜಿಸ್ಟೀರಿಯಲ್‌ ವಿಚಾರಣೆಗೆ ನೀಡಿ ಆದೇಶಿಸಿದೆ.

ಬೆಂಗಳೂರು ನಗರ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಜಿ ಜಗದೀಶ್‌ ಅವರನ್ನು ವಿಚಾರಣಾಧಿಕಾರಿಯನ್ನಾಗಿ ನೇಮಿಸಿದ್ದು, ಅವರು ಆದೇಶ ಹೊರಡಿಸಿದ ದಿನದಿಂದ 15 ದಿನಗಳ ಒಳಗೆ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಗಡುವು ವಿಧಿಸಲಾಗಿದೆ.

ಮಧ್ಯಾಹ್ನ 3.30ರಿಂದ ಸಂಜೆ 4.30ರ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಪ್ರವೇಶಿಸುವ ಸಂದರ್ಭದಲ್ಲಿ ಬ್ಯಾರಿಕೇಡ್‌ ಮುರಿದು ಒಬ್ಬರ ಮೇಲೆ ಒಬ್ಬರು ಬಿದ್ದು ಉಂಟಾದ ನೂಕುನುಗ್ಗಲಿನಿಂದ ಕಾಲ್ತುಳಿತ ಉಂಟಾಗಿದ್ದು, ಈ ಘಟನೆಯಲ್ಲಿ 11 ಮಂದಿ ಮೃತಪಟ್ಟಿದ್ದಾರೆ. 47 ಮಂದಿ ಗಾಯಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್‌ ಮಹಾನಿರ್ದೇಶಕರು ವರದಿ ಸಲ್ಲಿಸಿದ್ದಾರೆ ಎಂದು ಸರ್ಕಾರದ ನಡಾವಳಿಯಲ್ಲಿ ತಿಳಿಸಲಾಗಿದೆ.

ಪೊಲೀಸ್‌ ಮಹಾನಿರ್ದೇಶಕರ ವರದಿಯನ್ನು ಸರ್ಕಾರ ಕೂಲಂಕಷವಾಗಿ ಪರಿಶೀಲಿಸಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತ, ಮೃತಪಟ್ಟವರ ಸಾವಿಗೆ ಕಾರಣ, ಘಟನಾವಳಿಗಳ ಸರಣಿ ಮತ್ತು ಸನ್ನಿವೇಶ, ಘಟನೆಯಲ್ಲಿ ಉಂಟಾಗಿರುವ ಲೋಪ, ಅದಕ್ಕೆ ಕಾರಣರಾದವರು ಮತ್ತು ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದೆಯೇ ಎಂಬುದರ ಬಗ್ಗೆ ಸಮಗ್ರವಾಗಿ ಮ್ಯಾಜಿಸ್ಟೀರಿಯಲ್‌ ವಿಚಾರಣೆ ನಡೆಸಲು ಸರ್ಕಾರ ನಿರ್ಧರಿಸಿದೆ.

Kannada Bar & Bench
kannada.barandbench.com