
ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರಿಗೆ ಸೇರಿದ ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯ ಸರ್ವೇ ನಂಬರ್ 8, 9, 10, 16, 17 ಮತ್ತು 79ರಲ್ಲಿ ನಡೆದಿರುವ ಸರ್ಕಾರಿ ಭೂಮಿಯ ಅನಧಿಕೃತ ಒತ್ತುವರಿ ತೆರವುಗೊಳಿಸುವ ಸಂಬಂಧ ರಾಜ್ಯ ಸರ್ಕಾರವು ಹಿರಿಯ ಐಎಎಸ್ ಅಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿರುವ ಆದೇಶಕ್ಕೆ ತಡೆ ನೀಡಿರುವ ಏಕಸದಸ್ಯ ಪೀಠದ ಮಧ್ಯಂತರ ಆದೇಶದ ವಿರುದ್ದ ರಾಜ್ಯ ಸರ್ಕಾರವು ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ ಮಾಡಿದೆ.
ಎಸ್‌ಐಟಿ ರಚನೆ ಅಕ್ರಮ ಎಂದು ಆಕ್ಷೇಪಿಸಿ ಮಾಜಿ ಮುಖ್ಯಮಂತ್ರಿಯೂ ಆದ ಕುಮಾರಸ್ವಾಮಿ, ಮಾಜಿ ಸಚಿವ ಡಿ ಸಿ ತಮ್ಮಣ್ಣ ಪತ್ನಿ ಕೆ ಜಿ ಪ್ರಮೀಳಾ, ಪುತ್ರ ಡಿ ಟಿ ಸಂತೋಷ್, ಸುನಂದಾ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಇ ಎಸ್ ಇಂದಿರೇಶ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಕಿರಣ್ ವಿ. ರೋಣ್ “ಈ ನ್ಯಾಯಾಲಯವು ಎಸ್‌ಐಟಿಗೆ ತಡೆ ನೀಡಿ ಜೂನ್ 19ರಂದು ಮತ್ತು ಜುಲೈ 2ರಂದು ಮಾಡಿರುವ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆ ಮಾಡಲಾಗಿದೆ. ಹೀಗಾಗಿ, ಹಾಲಿ ಅರ್ಜಿಗಳ ವಿಚಾರಣೆಯನ್ನು ಮುಂದೂಡಬೇಕು” ಎಂದು ಕೋರಿದರು.
ಈ ಹೇಳಿಕೆಯನ್ನು ಆದೇಶದಲ್ಲಿ ದಾಖಲಿಸಿದ ನ್ಯಾಯಾಲಯವು ವಿಚಾರಣೆಯನ್ನು ಅಕ್ಟೋಬರ್ 8ಕ್ಕೆ ಮುಂದೂಡಿತು.
ಜೂನ್ 19ರಂದು ನ್ಯಾಯಾಲಯವು “ರಾಜ್ಯ ಸರ್ಕಾರವು ಜನವರಿ 28ರಂದು ಎಸ್‌ಐಟಿ ರಚಿಸಿರುವ ಆದೇಶದ ನಂತರ ಔಪಚಾರಿಕವಾಗಿ ಯಾವುದೇ ತೆರನಾದ ಅಧಿಸೂಚನೆಯನ್ನು ಪ್ರಕಟಿಸಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ರಚಿಸಿರುವ ಆದೇಶ ಮತ್ತು ಆನಂತರ ಕುಮಾರಸ್ವಾಮಿ ಅವರಿಗೆ ಜಾರಿ ಮಾಡಿರುವ ಸಮನ್ಸ್‌ಗೆ ಮುಂದಿನ ವಿಚಾರಣೆವರೆಗೆ ತಡೆ ನೀಡಲಾಗಿದೆ” ಎಂದು ಆದೇಶಿಸಿತ್ತು. ಇದೇ ಆದೇಶ ತಮಗೂ ವಿಸ್ತರಿಸಬೇಕು ಎಂದು ಪ್ರಮೀಳಾ, ಪುತ್ರ ಡಿ ಟಿ ಸಂತೋಷ್, ಸುನಂದಾ ಕೋರಿದ್ದನ್ನೂ ನ್ಯಾಯಾಲಯ ಪುರಸ್ಕರಿಸಿತು.