ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್‌ ಪಡೆದ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್

“ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರನ್ನು ಕತ್ತಲೆಯಲ್ಲಿ ಇಡಬೇಕಿತ್ತು. ಇದು ವಿಶೇಷ ಪ್ರಕರಣ ಎಂದು ಸಿಬಿಐ ಹೇಳಿದೆ. ಇದು ನಿಜ. ಇದು ಏಕೆ ವಿಶೇಷ ಎಂಬುದು ನಮಗೆ, ನಿಮಗೆ, ಇಡೀ ಜಗತ್ತಿಗೆ ಗೊತ್ತಿದೆ ಎಂದ ಹಿರಿಯ ವಕೀಲ ಕಪಿಲ್‌ ಸಿಬಲ್.
Basanagouda R Patil, D K Shivakumar, CBI and Karnataka HC
Basanagouda R Patil, D K Shivakumar, CBI and Karnataka HC
Published on

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗಾಗಿ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಈ ಹಿಂದಿನ ಬಿಜೆಪಿ ಆಡಳಿತದ ರಾಜ್ಯ ಸರ್ಕಾರ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್‌ ಸೋಮವಾರ ಆದೇಶ ಕಾಯ್ದಿರಿಸಿದೆ.

ರಾಜ್ಯ ಸರ್ಕಾರವು ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್‌ ಮತ್ತು ಉಮೇಶ್‌ ಎಂ. ಅಡಿಗ ಅವರ ವಿಭಾಗೀಯ ಪೀಠ ನಡೆಸಿತು.

ಸಿಬಿಐ ಪರವಾಗಿ ವಾದಿಸಿದ ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನಕುಮಾರ್‌ ಅವರು “ರಾಜ್ಯ ಸರ್ಕಾರ ಸಿಬಿಐಗೆ ನೀಡಿರುವ ಅನುಮತಿ ಹಿಂಪಡೆದರೂ ಸಿಬಿಐ ಎಫ್‌ಐಆರ್‌ ಬಾಕಿ ಉಳಿಯಲಿದೆ. ಇದು ಪ್ರಮುಖ ವಿಚಾರವಾಗಿದೆ. ಇನ್ನು ಸಿಬಿಐ ಎಫ್‌ಐಆರ್‌ ಪ್ರಶ್ನಿಸಿ ಡಿ ಕೆ ಶಿವಕುಮಾರ್‌ ಸಲ್ಲಿಸಿದ್ದ ವಿಶೇಷ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿದೆ” ಎಂದರು.

ಬಿಜೆಪಿ ಮುಖಂಡ ಬಸನಗೌಡ ಪಾಟೀಲ್‌ ಯತ್ನಾಳ್‌ ಪ್ರತಿನಿಧಿಸಿದ್ದ ವಕೀಲ ವೆಂಕಟೇಶ್‌ ದಳವಾಯಿ ಅವರು “ಒಮ್ಮೆ ಸಿಬಿಐ ತನಿಖೆಗೆ ಒಪ್ಪಿಗೆ ನೀಡಿ ಅದನ್ನು ಹಿಂಪಡೆದರೆ ತನಿಖೆ ಮೊಟಕಾಗಲಿದೆಯೇ ಎಂಬುದು ನ್ಯಾಯಾಲಯ ಮುಂದೆ ಇರುವ ಪ್ರಶ್ನೆ. ಭ್ರಷ್ಟಾಚಾರ ನಿರೋಧಕ ಕಾಯಿದೆ ಅಡಿ ಅಪರಾಧದ ತನಿಖೆ ನಡೆಸುವ ಸಿಬಿಐ ಸಂಪೂರ್ಣ ಸ್ವತಂತ್ರವಾಗಿರುತ್ತದೆ. ಇಲ್ಲಿ ಅರ್ಜಿದಾರರಿಗೆ ಸಂವಿಧಾನದ 131ನೇ ವಿಧಿ ಅನ್ವಯಿಸುವುದು ಊರ್ಜಿತವಾಗುವುದಿಲ್ಲ. ಒಮ್ಮೆ ಸಿಬಿಐ ಪ್ರಕರಣ ದಾಖಲಿಸಿದ ಮೇಲೆ ಅದು ತಾರ್ಕಿಕ ಅಂತ್ಯ ಕಾಣಬೇಕು. ಸಿಬಿಐ ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್‌ ಅಥವಾ ಹೈಕೋರ್ಟ್‌ ವಜಾ ಮಾಡಬೇಕು. ಇದರಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದ ಯಾವುದೇ ಪಾತ್ರ ಇರುವುದಿಲ್ಲ” ಎಂದರು.

ರಾಜ್ಯ ಸರ್ಕಾರದ ಪರವಾಗಿ ವಾದಿಸಿದ ಹಿರಿಯ ವಕೀಲ ಕಪಿಲ್‌ ಸಿಬಲ್‌ ಅವರು “ಸಿಬಿಐ ಕೇಂದ್ರ ಸರ್ಕಾರದ ಒಂದು ಘಟಕ. ಅದು ಸ್ವತಂತ್ರ ಸಂಸ್ಥೆಯಲ್ಲ. ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಅಡಿ ಬರುವ ಸಿಬಿಐಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡುತ್ತದೆ. ಪಶ್ಚಿಮ ಬಂಗಾಳ ಪ್ರಕರಣದಲ್ಲಿ ಸಿಬಿಐ ಸೂಕ್ತ ಪಕ್ಷಕಾರರಲ್ಲ. ಕೇಂದ್ರ ಸರ್ಕಾರ ಸೂಕ್ತ ಪಕ್ಷಕಾರ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಮುಂದೆ ಡಿ ಕೆ ಶಿವಕುಮಾರ್‌ ಅವರು ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿದ್ದರು. ಇಲ್ಲಿ ರಾಜ್ಯ ಸರ್ಕಾರದ ಪಾತ್ರ ಇರಲಿಲ್ಲ. ಸಿಬಿಐ ಮತ್ತು ಶಿವಕುಮಾರ್‌ ಪಕ್ಷಕಾರರಾಗಿದ್ದರು. ಸಿಬಿಐ ತನಿಖೆಗೆ ಅನುಮತಿ ನೀಡಿದ್ದು ಪ್ರಕರಣದ ವಿಚಾರವಾಗಿರಲಿಲ್ಲ” ಎಂದರು.

“ಸಿಬಿಐಗೆ ಅನುಮತಿ ನೀಡುವ ವಿಚಾರದಲ್ಲಿ ಈ ಪ್ರಕರಣದಲ್ಲಿ ಸರ್ಕಾರ ವಂಚಿಸಿದೆ. ಹಿಂದಿನ ಬಿಜೆಪಿ ಸರ್ಕಾರದ (ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ) ಮೌಖಿಕ ನಿರ್ದೇಶನದ ಮೂಲಕ ಸಿಬಿಐಗೆ ಅನುಮತಿಸಿತ್ತು. ಈಗ ಸರ್ಕಾರ ಬದಲಾಗಿದ್ದು, ನ್ಯಾಯಾಲಯದ ಮುಂದೆ ಬಂದಿದೆ. ಎಫ್‌ಐಆರ್‌ ರದ್ದತಿ ವಿಚಾರದಲ್ಲಿ ಹೈಕೋರ್ಟ್‌ ಆದೇಶವು ಶಿವಕುಮಾರ್‌ಗೆ ಅನ್ವಯಿಸುತ್ತದೆಯೇ ವಿನಾ ರಾಜ್ಯ ಸರ್ಕಾರಕ್ಕಲ್ಲ. ಸಿಬಿಐಗೆ ವಾಸ್ತವಿಕ ವಿಚಾರಗಳು ನ್ಯಾಯಾಲಯದ ಮುಂದೆ ಬರುವುದು ಬೇಕಿಲ್ಲ” ಎಂದು ಕಿಡಿಕಾರಿದರು.

“ಸಿಬಿಐ ಒಪ್ಪಿಗೆ ವಿಚಾರದಲ್ಲಿ ನ್ಯಾಯಾಲಯಕ್ಕೆ ಸರ್ಕಾರ ವಂಚಿಸಿದೆ. ಇಲ್ಲಿ ಅನುಮತಿ ಪಡೆದಿರುವುದು ಪ್ರಶ್ನೆಯಲ್ಲ. ಒಪ್ಪಿಗೆ ಕಾನೂನುಬಾಹಿರವಾಗಿ ನೀಡಿರುವುದು ವಿಚಾರವಾಗಿದೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದು, ಸರ್ಕಾರವು ಕಾನೂನನ್ನು ಹೀಗೆ ಬಳಕೆ ಮಾಡಲಾಗದು. ಶಿವಕುಮಾರ್‌ ವಿರುದ್ಧದ ಆದಾಯ ತೆರಿಗೆ ಪ್ರಕರಣವನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿದೆ. ಈ ವಿಚಾರಗಳನ್ನು ನ್ಯಾಯಾಲಯದ ಮುಂದೆ ಇಡಬಾರದು ಎಂದು ಸಿಬಿಐ ಹೇಳಲಾಗದು” ಎಂದರು.

Also Read
ಡಿಕೆಶಿ ವಿರುದ್ಧದ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್‌ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

“ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಕೋರಿದಾಗ ಏಕೆ ತನಿಖೆ ನಡೆಸಬೇಕು ಎಂಬುದಕ್ಕೆ ಸಂಬಂಧಿಸಿದ ಪ್ರೊಫಾರ್ಮಾವನ್ನು (ಏಕೆ ತನಿಖೆ ಮಾಡಬೇಕು, ಸ್ಥಳೀಯ ಪೊಲೀಸರು ತನಿಖೆ ಮಾಡಲು ಸಾಧ್ಯವಿಲ್ಲವೇ ಎಂಬ ಅಂಶಗಳ ಪಟ್ಟಿ) ಸಿಬಿಐ ನೀಡುತ್ತದೆ. ಈ ಎಲ್ಲಾ ವಿಧಿ-ವಿಧಾನವನ್ನು ಪಾಲಿಸಲಾಗಿಲ್ಲ. ಏಕೆಂದರೆ ಶಿವಕುಮಾರ್‌ ಅವರನ್ನು ಕತ್ತಲೆಯಲ್ಲಿ ಇಡಬೇಕಿತ್ತು. ಇದು ವಿಶೇಷ ಪ್ರಕರಣ ಎಂದು ಸಿಬಿಐ ಹೇಳಿರುವುದು ನಿಜ. ಇದು ಏಕೆ ವಿಶೇಷ ಎಂಬುದು ನಮಗೆ, ನಿಮಗೆ, ಇಡೀ ಜಗತ್ತಿಗೆ ಗೊತ್ತಿದೆ” ಎಂದು ಕಟಕಿಯಾಡಿದರು.

“ದೆಹಲಿ ವಿಶೇಷ ಪೊಲೀಸ್‌ ಕಾಯಿದೆ ಸೆಕ್ಷನ್‌ 3ರ ಅಡಿ ಇಲ್ಲಿ ಸಾಮಾನ್ಯ ಒಪ್ಪಿಗೆ ಪಡೆಯಲಾಗಿಲ್ಲ. ರಾಜ್ಯ ಸರ್ಕಾರ ಸಾಮಾನ್ಯ ಒಪ್ಪಿಗೆ ನೀಡಿಲ್ಲ. ಈ ಪ್ರಕರಣದಲ್ಲಿ ವಿಶೇಷ ಒಪ್ಪಿಗೆ ನೀಡಲಾಗಿದೆ” ಎಂದು ಆಕ್ಷೇಪಿಸಿದರು.

Also Read
ಡಿಕೆಶಿ ವಿರುದ್ಧದ ಸಿಬಿಐ ತನಿಖೆಗೆ ಅನುಮತಿ ವಾಪಸ್‌ ಪ್ರಕರಣ: ವಿಚಕ್ಷಣಾ ಆಯೋಗದ ಪಾತ್ರದ ಬಗ್ಗೆ ಆಲಿಸಲಿರುವ ಹೈಕೋರ್ಟ್‌

ಡಿ ಕೆ ಶಿವಕುಮಾರ್ ಪ್ರತಿನಿಧಿಸಿದ್ದ ಹಿರಿಯ ವಕೀಲ ಡಾ. ಅಭಿಷೇಕ್‌ ಮನು ಸಿಂಘ್ವಿ ಅವರು “ಸಿಬಿಐಗೆ ಅನುಮತಿ ನೀಡಿರುವುದನ್ನು ಹಿಂಪಡೆದಿರುವುದನ್ನು ಸಿಬಿಐ ಪ್ರಶ್ನಿಸಿದೆ. ಇಲ್ಲಿ ಸಿಬಿಐ ಮತ್ತು ರಾಜ್ಯ ಸರ್ಕಾರ ಪಕ್ಷಕಾರರು. ನಾನು ಖಾಸಗಿ ವ್ಯಕ್ತಿಯಾಗಿದ್ದೇನೆ. ಕೇಂದ್ರ ಸರ್ಕಾರದ ಪರ್ಯಾಯ ರೂಪದಂತೆ ಸಿಬಿಐ ವರ್ತಿಸುತ್ತದೆ. ಸಾಮಾನ್ಯ/ವಿಶೇಷ ಒಪ್ಪಿಗೆ ವಿಚಾರವು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದೆ. ನಮ್ಮ ಪ್ರಕರಣದಲ್ಲಿ ಸಾಮಾನ್ಯ ಒಪ್ಪಿಗೆ ನೀಡಲಾಗಿಲ್ಲ, ನಿರ್ದಿಷ್ಟ ಒಪ್ಪಿಗೆ ನೀಡಲಾಗಿದೆ. ಇದು ಕಾನೂನುಬಾಹಿರ. ಈ ಪ್ರಕರಣವನ್ನು ರಾಜ್ಯ ಪೊಲೀಸರು ಅಥವಾ ಲೋಕಾಯುಕ್ತ ಏಕೆ ತನಿಖೆ ನಡೆಸಲಿಲ್ಲ. ಇನ್ನು ಸಿಬಿಐಗೆ ನೀಡಿರುವ ಅನುಮತಿ ಹಿಂಪಡೆದಿರುವುದಕ್ಕೂ ಸಿಬಿಐ ಎಫ್‌ಐಆರ್‌ ರದ್ದತಿ ಅರ್ಜಿ ವಜಾ ಮಾಡಿದ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿರುವುದಕ್ಕೂ ಯಾವುದೇ ಸಂಬಂಧವಿಲ್ಲ” ಎಂದರು.

ಸುದೀರ್ಘವಾಗಿ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ತೀರ್ಪು ಕಾಯ್ದಿರಿಸಿತು. ಕೆಲವು ತಿಂಗಳ ಹಿಂದೆಯೇ ನ್ಯಾಯಾಲಯವು ಆದೇಶ ಕಾಯ್ದಿರಿಸಿತ್ತು. ಕೆಲವು ವಿಚಾರಗಳಿಗೆ ಸ್ಪಷ್ಟನೆ ಬಯಸಿ ಮತ್ತೆ ಪ್ರಕರಣವನ್ನು ವಿಚಾರಣೆಗೆ ನಿಗದಿಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

Kannada Bar & Bench
kannada.barandbench.com