ಡಿಕೆಶಿ ಅಕ್ರಮ ಅಸ್ತಿ ಗಳಿಕೆ ಪ್ರಕರಣ: ಸಿಬಿಐ ಕೋರಿಕೆ ಪುರಸ್ಕರಿಸಿ ಮೂರು ವಾರ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠವು 2023ರ ಏಪ್ರಿಲ್‌ 20ರಂದು ಡಿ ಕೆ ಶಿವಕುಮಾರ್‌ ಅವರ ಅರ್ಜಿಯನ್ನು ವಜಾ ಮಾಡಿತ್ತು.
D K Shivakumar, CBI and Karnataka HC
D K Shivakumar, CBI and Karnataka HC

ಆದಾಯ ಮೀರಿದ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯ ವಿವಿಧ ಸೆಕ್ಷನ್‌ಗಳ ಅಡಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ವಿರುದ್ಧ ತನಿಖೆ ನಡೆಸಲು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಅನುಮತಿಸಿದ್ದ ಆದೇಶ ವಜಾ ಮಾಡಲು ನಿರಾಕರಿಸಿದ್ದ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶಕ್ಕೆ ವಿಧಿಸಿರುವ ಮಧ್ಯಂತರ ತಡೆಯನ್ನು ಮುಂದುವರಿಸಿರುವ ವಿಭಾಗೀಯ ಪೀಠವು ವಿಚಾರಣೆಯನ್ನು ಮೂರು ವಾರಗಳ ಕಾಲ ಮುಂದೂಡಿದೆ.

ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ ಕೆ ಶಿವಕುಮಾರ್‌ ಸಲ್ಲಿಸಿದ್ದ ಮೇಲ್ಮನವಿಯು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ ಜಿ ಎಸ್‌ ಕಮಲ್‌ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು.

ಈ ಸಂದರ್ಭದಲ್ಲಿ ಪೀಠದ ಮುಂದೆ ಹಾಜರಾದ ಸಿಬಿಐ ಪರ ವಕೀಲ ಪಿ ಪ್ರಸನ್ನಕುಮಾರ್‌ ಅವರು ವಿಚಾರಣೆ ಮುಂದೂಡಬೇಕು ಎಂದು ಕೋರಿದರು.

ಇದನ್ನು ಆಲಿಸಿದ ಪೀಠವು ಪ್ರತಿವಾದಿ ಸಿಬಿಐ ಕೋರಿಕೆ ಹಿನ್ನೆಲೆಯಲ್ಲಿ ಮೂರು ವಾರಗಳ ಕಾಲ ವಿಚಾರಣೆ ಮುಂದೂಡಲಾಗುತ್ತಿದ್ದು, ಮಧ್ಯಂತರ ತಡೆಯಾಜ್ಞೆ ಮುಂದುವರಿಯಲಿದೆ ಎಂದು ಆದೇಶಿಸಿತು.

ಏಕಸದಸ್ಯ ಪೀಠವು 2023ರ ಏಪ್ರಿಲ್‌ 20ರಂದು ಡಿ ಕೆ ಶಿವಕುಮಾರ್‌ ಅವರ ಅರ್ಜಿಯನ್ನು ವಜಾ ಮಾಡಿತ್ತು.

Also Read
ಡಿಕೆಶಿ ವಿರುದ್ಧದ ಪ್ರಕರಣ: ಸಿಬಿಐ ತನಿಖೆಗೆ ಆದೇಶಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ವಿಭಾಗೀಯ ಪೀಠ ತಡೆ

ಪ್ರಕರಣದ ಹಿನ್ನೆಲೆ: ಡಿ ಕೆ ಶಿವಕುಮಾರ್‌ ಅವರು ಗಣಿಗಾರಿಕೆ ಮತ್ತು ರಿಯಲ್‌ ಎಸ್ಟೇಟ್‌ ಉದ್ಯಮ ಸೇರಿದಂತೆ ಹಲವು ವ್ಯವಹಾರಗಳಲ್ಲಿ ತೊಡಗಿಕೊಂಡಿದ್ದು, ಅವರಿಗೆ ಸೇರಿದ ದೆಹಲಿಯ ಅಪಾರ್ಟ್‌ಮೆಂಟ್‌ ಸಹಿತ ವಿವಿಧ ಸ್ಥಳಗಳ ಮೇಲೆ 2017ರ ಆಗಸ್ಟ್‌ 2ರಂದು ಆದಾಯ ತೆರಿಗೆ ಇಲಾಖೆ ಶೋಧ ನಡೆಸಿತ್ತು.

ಈ ವೇಳೆ 8.59 ಕೋಟಿ ರೂಪಾಯಿ ಹಣ ಪತ್ತೆಯಾಗಿತ್ತು. ಡಿ ಕೆ ಶಿವಕುಮಾರ್‌ ಅವರಿಗೆ ಸೇರಿದ ಸ್ಥಳದಲ್ಲಿ 41 ಲಕ್ಷ ರೂಪಾಯಿ ಪತ್ತೆಯಾಗಿತ್ತು. ಇದರ ಬೆನ್ನಿಗೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಇದರ ಬಳಿಕ ಜಾರಿ ನಿರ್ದೇಶನಾಲಯವು ಶಿವಕುಮಾರ್‌ ಅವರ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯಿದೆ ಅಡಿ ಪ್ರಕರಣ ದಾಖಲಿಸಿತ್ತು.

ಜಾರಿ ನಿರ್ದೇಶನಾಲಯದ ಪ್ರಕರಣ ಆಧರಿಸಿ 2019ರ ಸೆಪ್ಟೆಂಬರ್‌ 3ರಂದು ಶಿವಕುಮಾರ್‌ ಅವರನ್ನು ಬಂಧಿಸಲಾಗಿತ್ತು. ಆನಂತರ 2019ರ ಸೆಪ್ಟೆಂಬರ್‌ 9ರಂದು ಜಾರಿ ನಿರ್ದೇಶನಾಲಯದ ಪತ್ರ ಆಧರಿಸಿ, ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ತನಿಖೆ ನಡೆಸಲು ಸಿಬಿಐಗೆ ರಾಜ್ಯ ಸರ್ಕಾರವು ಅನುಮತಿಸಿತ್ತು.

Related Stories

No stories found.
Kannada Bar & Bench
kannada.barandbench.com