ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ರ‍್ಯಾಂಕ್ ಪಟ್ಟಿ ತಯಾರಿಸಲು ವಿದ್ಯಾರ್ಥಿಗಳು ಪಿಯುಸಿಯಲ್ಲಿ ಪಡೆದಿರುವ ಶೇ.50 ಅಂಕ ಹಾಗೂ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಪಡೆದಿರುವ ಶೇ.50 ಅಂಕಗಳನ್ನು ಪರಿಗಣಿಸಿ ಹೊಸದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ರ‍್ಯಾಂಕ್ ಪಟ್ಟಿ ಪ್ರಕಟಿಸಬೇಕು ಎಂದು ಆದೇಶಿಸಿರುವ ಏಕಸದಸ್ಯ ಪೀಠದ ಆದೇಶವನ್ನು ಬದಿಗೆ ಸರಿಸಬೇಕು ಎಂದು ಕೋರಿ ಕರ್ನಾಟಕ ಹೈಕೋರ್ಟ್‌ಗೆ ರಾಜ್ಯ ಸರ್ಕಾರವು ಮೇಲ್ಮನವಿ ಸಲ್ಲಿಸಿದೆ. ಅರ್ಜಿಯು ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.
ಪುನರಾವರ್ತಿತ ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಗಳನ್ನು ಮಾನ್ಯ ಮಾಡಿ, ಕೆಇಎ ಜುಲೈ 30ರಂದು ಮಾಡಿದ್ದ ಆದೇಶವನ್ನು ವಜಾ ಮಾಡುವ ಮೂಲಕ ಏಕಸದಸ್ಯ ಪೀಠವು ಲೋಪ ಎಸಗಿದೆ. 2020-21ನೇ ಶೈಕ್ಷಣಿಕ ಸಾಲಿನ ಪಿಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅರ್ಹತಾ ಪರೀಕ್ಷೆ ಬರೆಯದೇ ಪಾಸಾಗಿದ್ದಾರೆ. ಕೆಲವರು 600ಕ್ಕೆ 600 ಅಂಕ ಪಡೆದಿದ್ದಾರೆ. ಹೀಗಾಗಿ, ಅವರು ಪಿಯುಸಿಯಲ್ಲಿ ಪಡೆದಿರುವ ಅಂಕ ಪರಿಗಣಿಸಿದರೆ ಹಾಲಿ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ ಎಂದು ರಾಜ್ಯ ಸರ್ಕಾರ ಆಕ್ಷೇಪಿಸಿದೆ.
ನ್ಯಾಯದಾನ ದೃಷ್ಟಿಯಿಂದ ಸೆಪ್ಟೆಂಬರ್ 3ರಂದು ಏಕಸದಸ್ಯ ಪೀಠ ಮಾಡಿರುವ ಆದೇಶವನ್ನು ಬದಿಗೆ ಸರಿಸಬೇಕು. ಅಲ್ಲದೇ, ಪುನರಾವರ್ತಿತ ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಗಳನ್ನು ವಜಾ ಮಾಡಬೇಕು ಎಂದು ಕೋರಲಾಗಿದೆ.
ಏಕಸದಸ್ಯ ಪೀಠದ ಆದೇಶವನ್ನು ಜಾರಿ ಮಾಡುವುದರಿಂದ ಪ್ರತಿಭಾವಂತ ವಿದ್ಯಾರ್ಥಿಗಳು ಉತ್ತಮ ರ‍್ಯಾಂಕ್ ಪಡೆದು ವೃತ್ತಿಪರ ಕೋರ್ಸ್‌ಗಳಿಗೆ ಸೇರುವುದಕ್ಕೆ ನಿರಾಕರಿಸಿದಂತಾಗುತ್ತದೆ. ಏಕಸದಸ್ಯ ಪೀಠವು ಹೊಸದಾಗಿ ರ‍್ಯಾಂಕ್ ಪಟ್ಟಿ ಪ್ರಕಟಿಸುವಂತೆ ಆದೇಶ ಮಾಡಿದೆ. ಇದರಿಂದ ಅನಿಶ್ಚಿತತೆ ತಲೆದೋರಲಿದ್ದು, ಮೆರಿಟ್ ರ‍್ಯಾಂಕ್ ಅನ್ನು ಪುನಾ ಸಿದ್ಧಪಡಿಸುವುದು ಲಾಜಿಸ್ಟಿಕ್ ದೃಷ್ಟಿಯಿಂದ ಮೇಲ್ಮನವಿ ಪ್ರಾಧಿಕಾರಕ್ಕೆ ತೀರ ಸಮಸ್ಯೆಯಾಗಲಿದೆ. ಇದೆಲ್ಲಕ್ಕಿಂತಲೂ ಮಿಗಿಲಾಗಿ ವಿದ್ಯಾರ್ಥಿಗಳ ಮೆರಿಟ್ ರ‍್ಯಾಂಕ್ ಪಟ್ಟಿಗೆ ಅಡ್ಡಿ ಉಂಟು ಮಾಡಿದಂತಾಗುತ್ತದೆ ಎಂದು ರಾಜ್ಯ ಸರ್ಕಾರ ವಾದಿಸಿದೆ.