ಮಲ್ಟಿಪಲ್ ಸ್ಕ್ಲೆರೊಸಿಸ್ (ಮಿದುಳು ದೇಹದ ಜೊತೆ ಸಂವಹಿಸಲು ವಿಫಲವಾಗುವುದು) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಗ್ರಾಮೀಣ ಸೇವೆ ಕಡ್ಡಾಯ ನಿಯಮದಿಂದ ವಿನಾಯಿತಿ ನೀಡುವಂತೆ ನಿರ್ದೇಶಿಸಬೇಕು ಎಂದು ಕೋರಿದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ.
ಸಿಕಂದರಾಬಾದ್‌ನ 34 ವರ್ಷದ ವೈದ್ಯೆ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್ ಸುನಿಲ್ ದತ್ ಯಾದವ್ ಅವರಿದ್ದ ರಜಾಕಾಲೀನ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲೆ ಅಕ್ಕಮಹಾದೇವಿ ಹಿರೇಮಠ ಅವರು ಅರ್ಜಿದಾರರು ಕೋವಿಡ್ ನಂತರದ ದಿನಗಳಿಂದ ಬೆನ್ನುಹುರಿ ಮತ್ತು ಮಿದುಳಿನ ನಡುವೆ ಸಮರ್ಪಕ ಸಂಪರ್ಕ ಸಾಧ್ಯವಾಗದ ಕಾರಣ ತಲೆದೋರುವ ಮಲ್ಟಿಪಲ್ ಸ್ಕ್ಲೆರೊಸಿಸ್ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಹೀಗಾಗಿ, ಸರ್ಕಾರ ಹೊರಡಿಸಿರುವ ಅಧಿಸೂಚನೆಯಿಂದ ವಿನಾಯಿತಿ ನೀಡುವಂತೆ ನಿರ್ದೇಶಿಸಬೇಕು ಎಂದು ಕೋರಿದರು.
ಇದನ್ನು ಮಾನ್ಯ ಮಾಡಿದ ಪೀಠವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯದರ್ಶಿ ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ, ವಿಚಾರಣೆ ಮುಂದೂಡಿದೆ.